ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

Published 22 ಮಾರ್ಚ್ 2024, 15:53 IST
Last Updated 22 ಮಾರ್ಚ್ 2024, 15:53 IST
ಅಕ್ಷರ ಗಾತ್ರ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ತಮಿಳುನಾಡಿಗೆ ಸಂಬಂಧ ಕಲ್ಪಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.

‘ನನ್ನ ವಿರುದ್ಧ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಹಾಗೂ ಆ ಸಂಬಂಧ 5ನೇ ಎಸಿಎಂಎಂ ಕೋರ್ಟ್‌ನಲ್ಲಿರುವ ಪ್ರಕರಣವನ್ನು ರದ್ದುಪಡಿಸಬೇಕು’ ಎಂದು ಕೋರಿ ಶೋಭಾ ಕರಂದ್ಲಾಜೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ಇದರ ವಿಚಾರಣೆ ನಡೆಸಿತು.

ಶೋಭಾ ಕರಂದ್ಲಾಜೆ ಪರ ವಕೀಲ ವೆಂಕಟೇಶ್ ಪಿ.ದಳವಾಯಿ, ‘ಇದು ರಾಜಕೀಯ ಪ್ರೇರಿತ ಪ್ರಕರಣ. ಎಫ್‌ಐಆರ್ ದಾಖಲಿಸಿರುವುದು ಕಾನೂನಿನ ದುರ್ಬಳಕೆ. ಹೀಗಾಗಿ, ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಕೋರಿದರು. ಆಗ, ಪೀಠವು ಶೋಭಾ ಕರಂದ್ಲಾಜೆ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

‘ಮಾತಿಗೆ ಅಳತೆಗೋಲು ಇರಬೇಕು. ಯಾವುದೇ ಪಕ್ಷ ಇರಲಿ, ಮುಖಂಡರಿಗೆ ಮಾತಿನ ಮೇಲೆ ಹಿಡಿತಇರಬೇಕು. ವಾಕ್ ಸ್ವಾತಂತ್ರ್ಯ ಅಭಿವ್ಯಕ್ತಿ ಸ್ವಾತಂತ್ರ್ಯವೇ ಇರಬಹುದು. ನಾವು ನಾಗರಿಕ ಸಮಾಜದಲ್ಲಿ ಬದುಕುತ್ತಿದ್ದೇವೆ ಎಂದು ಮರೆಯಬಾರದು. ಭಾರತ ಅಫ್ಘಾನಿಸ್ತಾನ ಆಗಬಾರದು’ ಎಂದು ತೀಕ್ಷ್ಣವಾಗಿ ಹೇಳಿತು.

ಅಂತೆಯೇ, ಪ್ರತಿವಾದಿಗಳಾದ ಕಾಟನ್‌ಪೇಟೆ ಠಾಣೆಯ ಪೊಲೀಸರು ಹಾಗೂ ದೂರು ದಾಖಲಿಸಿದ್ದ ಚುನಾವಣಾ ನೀತಿ ಸಂಹಿತೆ ಸಂಚಾರಿ ದಳದ ಅಧಿಕಾರಿ ಎಂ.ಎನ್. ಶಿವರಾಜು ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT