ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಹ್ಯಾಂಡಲ್ ಲಾಕ್ ಮುರಿದು ಕಳ್ಳತನ: 30 ದ್ವಿಚಕ್ರ ವಾಹನ ಕದ್ದವನ ಸೆರೆ

Published : 29 ಸೆಪ್ಟೆಂಬರ್ 2024, 15:50 IST
Last Updated : 29 ಸೆಪ್ಟೆಂಬರ್ 2024, 15:50 IST
ಫಾಲೋ ಮಾಡಿ
Comments

ಬೆಂಗಳೂರು: ನಗರದ ವಿವಿಧೆಡೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡಿದ್ದ ಆರೋಪಿಯನ್ನು ಕೆ.ಆರ್.ಪುರ ಪೊಲೀಸರು ಬಂಧಿಸಿದ್ದಾರೆ.

ಸುಂಕದಕಟ್ಟೆ ಮುದ್ದಿನ ಪಾಳ್ಯದ ಹನುಮೇಶ್ ಅಲಿಯಾಸ್ ಚಿನ್ನ ಹನುಮಯ್ಯ (32) ಎಂಬುವವರನ್ನು ಬಂಧಿಸಿ, ₹ 22.50 ಲಕ್ಷ ಮೌಲ್ಯದ 30 ದ್ವಿಚಕ್ರ ವಾಹನಗಳನ್ನು ವಶ ಪಡಿಸಿಕೊಳ್ಳಳಾಗಿದೆ.

ಕೆ.ಆರ್.ಪುರ ಸಮೀಪದ ಕೌದೇನಹಳ್ಳಿ ಮನೆಯೊಂದರ ಬಳಿ ನಿಲುಗಡೆ ಮಾಡಿದ್ದ ಬೈಕ್ ಕಳ್ಳತನವಾಗಿತ್ತು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದರು. ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ವೇಳೆ ಸಿಕ್ಕ ಸುಳಿವು ಹಾಗೂ ಬಾತ್ಮೀದಾರರು ನೀಡಿದ ಖಚಿತ ಮಾಹಿತಿ ಮೇರೆಗೆ ಮುದ್ದಿನಪಾಳ್ಯದಲ್ಲಿ ದ್ವಿಚಕ್ರ ವಾಹನ ಸಹಿತ ಆರೋಪಿಯನ್ನು ವಶಕ್ಕೆ ಪಡೆದರು.

ಆರೋಪಿ ನೀಡಿದ ಮಾಹಿತಿ ಮೇರೆಗೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಕಂದಕೂರು ಗ್ರಾಮದ ಖಾಲಿ ಜಾಗದಲ್ಲಿ ನಿಲುಗಡೆ ಮಾಡಿದ್ದ ಎಂಟು ದ್ವಿಚಕ್ರ ವಾಹನ, ಕೆ.ಆರ್‌.ಪುರದ ಜಾಲಿ ಜಾಗದಲ್ಲಿ ನಿಲುಗಡೆ ಮಾಡಿದ್ದ 10 ಹಾಗೂ ಯಲಹಂಕದ ಬಿಎಸ್‌ಎಫ್ ಕಾಂಪೌಂಡ್‌ ಸಮೀಪದ ನೀಲಗಿರಿ ತೋಪಿನಲ್ಲಿ ನಿಲುಗಡೆ ಮಾಡಿದ್ದ 11 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದರು.

‘ಬೆಂಗಳೂರು ಮತ್ತು ಗ್ರಾಮಾಂತರ ಜಿಲ್ಲೆಗಳ ವಿವಿಧೆಡೆ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ರಾತ್ರಿ ವೇಳೆ ನಗರದ ವಿವಿಧೆಡೆ ಸುತ್ತಾಡಿ ಮನೆ, ಕಚೇರಿ, ರಸ್ತೆ ಬದಿ ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದ. ಕದ್ದ ವಾಹನಗಳನ್ನು ಖಾಲಿ ಜಾಗದಲ್ಲಿ ನಿಲುಗಡೆ ಮಾಡಿ, ಗ್ರಾಹಕರನ್ನು ಹುಡುಕಿ ಮಾರಾಟ ಮಾಡಿ ಹಣ ಪಡೆಯುತ್ತಿದ್ದ. ಆಂಧ್ರಪ್ರದೇಶದಲ್ಲೂ ವಾಹನ ಮಾರಾಟಕ್ಕೆ ಯತ್ನಿಸಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಬೈಕ್ ಕಳವು ಪ್ರಕರಣಗಳಲ್ಲಿ ಹನುಮೇಶ್ ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೂರು ವರ್ಷ ಜೈಲು ವಾಸ ಅನುಭವಿಸಿದ್ದ. ಜೈಲಿನಿಂದ ಹೊರ ಬಂದ ಬಳಿಕವೂ ಹಳೆಯ ಚಾಳಿ ಮುಂದುವರಿಸಿದ್ದ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT