ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೆಡ್ಡಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಚಿಂತನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
Published 19 ಜನವರಿ 2024, 17:30 IST
Last Updated 19 ಜನವರಿ 2024, 17:30 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯ ಸರ್ಕಾರವು ರೆಡ್ಡಿ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಚಿಂತನೆ ನಡೆಸಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಕನ್ನಡ ಮತ್ತು ಸಂಸ್ಕೃತಿ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. 

‘ರೆಡ್ಡಿ ಸಮುದಾಯದವರು ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಮನವಿ ಮಾಡಿದ್ದರು. ಅವರ ಮನವಿಯನ್ನು ಸರ್ಕಾರ ಗಮನದಲ್ಲಿಟ್ಟುಕೊಂಡಿದ್ದು, ನಿಗಮ ರಚನೆ ಬಗ್ಗೆ ಸರ್ಕಾರ ಗಮನ ನೀಡಲಿದೆ. ರೆಡ್ಡಿ ಸಂಘದವರು ಶಿಕ್ಷಣ ಕೇಂದ್ರ ಸ್ಥಾಪನೆಗೆ ಆನೇಕಲ್‌ನಲ್ಲಿ ಜಮೀನು ಕೇಳಿದ್ದಾರೆ. ಅರಣ್ಯ ಭೂಮಿ ಬಿಟ್ಟು, ಕಂದಾಯ ಜಮೀನು ಇದ್ದಲ್ಲಿ ಸರ್ಕಾರ ಜಾಗ ನೀಡಲಿದೆ. ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಹುಟ್ಟೂರಿನಲ್ಲಿ ಸ್ಮಾರಕ ಅಭಿವೃದ್ಧಿಗೂ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

‘ನಮ್ಮ ಸರ್ಕಾರ ಮನುಷ್ಯ ಜಾತಿಯ ಪರವಿದೆ. ಬಡವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ವೇಮನ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡರೆ ಅವರ ಜಯಂತಿಗೆ ಅರ್ಥ ಬರುತ್ತದೆ’ ಎಂದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ‘ಕೆ.ಸಿ.ರೆಡ್ಡಿ ಅವರ ಸ್ಮಾರಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಅವರ ಹುಟ್ಟೂರಿಗೆ ಭೇಟಿ ನೀಡಿ, ಮುಂದಿನ ಹೆಜ್ಜೆ ಇರಿಸಲಾಗುವುದು. ಜಯಂತಿಗಳ ಮೂಲಕ ಮಹಾನ್ ಸಾಧಕರ ಸಾಧನೆಯನ್ನು ಯುವ ಸಮುದಾಯಕ್ಕೆ ತಲುಪಿಸಲಾಗುತ್ತಿದೆ’ ಎಂದು ಹೇಳಿದರು. 

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ‘ಕೆ.ಸಿ.ರೆಡ್ಡಿ ಅವರ ಹುಟ್ಟೂರಿನಲ್ಲಿರುವ ಸ್ಮಾರಕ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು’ ಎಂದು ಮನವಿ ಮಾಡಿದರು.

ಶಾಸಕ ಜನಾರ್ದನ ರೆಡ್ಡಿ, ಕರ್ನಾಟಕ ರೆಡ್ಡಿ ಜನ ಸಂಘದ ಅಧ್ಯಕ್ಷ ಎಸ್. ಜಯರಾಮ ರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ಇಲಾಖೆ ನಿರ್ದೇಶಕಿ ಧರಣಿದೇವಿ ಮಾಲಗತ್ತಿ, ಲೇಖಕಿ ಕೆ.ಆರ್.ಸಂಧ್ಯಾರೆಡ್ಡಿ ಪಾಲ್ಗೊಂಡಿದ್ದರು.

‘ರಾಮಲಿಂಗಾರೆಡ್ಡಿಗೆ ಡಿಸಿಎಂ ಸ್ಥಾನ ನೀಡಿ’

ವೇಮನ ಜಯಂತಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಭಾಷಣ ಮುಗಿಸುವ ವೇಳೆಗೆ ರೆಡ್ಡಿ ಸಮುದಾಯದವರು ರಾಮಲಿಂಗಾರೆಡ್ಡಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ‘ಹೊಸದಾಗಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಬಗ್ಗೆ ನಾನು ಮಾತನಾಡುವುದಿಲ್ಲ. ಈ ಹುದ್ದೆ ಬಗ್ಗೆ ಮಾತನಾಡುವ ಹಾಗಿಲ್ಲ. ಮಾತನಾಡಿದರೂ ಅದು ತಪ್ಪಾಗುತ್ತದೆ. ಈಗಾಗಲೇ ನಮ್ಮ ಹೈಕಮಾಂಡ್ ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಮಾತನಾಡಬೇಡಿ ಎಂದು ಎಚ್ಚರಿಕೆ ನೀಡಿದೆ. ಆದ್ದರಿಂದ ಡಿಸಿಎಂ ವಿಚಾರವಾಗಿ ನಾನು ಏನನ್ನೂ ಹೇಳುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT