ಶನಿವಾರ, ಅಕ್ಟೋಬರ್ 16, 2021
23 °C

ಹೆದ್ದಾರಿಗಳ ದುರಸ್ತಿಗೆ ಕಾಲಮಿತಿ: ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಗಡುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದ ಕೆಲವು ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಿದ್ದು, ಅವುಗಳನ್ನು ಕಾಲಮಿತಿಯೊಳಗೆ ತುರ್ತಾಗಿ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾಧಿಕಾರಿಗಳಿಗೆ ಗಡುವು ನೀಡಿದರು.

ಸೋಮವಾರ ನಡೆದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಭಾರಿ ಮಳೆಯಿಂದಾಗಿ ಪುಣೆ– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯೂ ಸೇರಿ ಹಲವು ಹೆದ್ದಾರಿಗಳಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಹೆದ್ದಾರಿ ನಿರ್ವಹಣೆ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಸಲಹೆ ನೀಡಿದರು.

ಹೆದ್ದಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳಲು  ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ರಾಜ್ಯ ಸರ್ಕಾರ ಇದಕ್ಕೆ ಅಗತ್ಯ ಸಹಕಾರ ನೀಡಲಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಗುತ್ತಿಗೆದಾರರಿಂದ ತಡವಾದರೆ ಅವರಿಗೆ ನೋಟೀಸ್‌ ನೀಡಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದೂ ಹೇಳಿದರು.

ರಾಷ್ಟ್ರೀಯ ಹೆದ್ದಾರಿ ಮತ್ತು ಇತರ ಕಡೆಗಳಲ್ಲಿ ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ನಿರ್ಮಿಸಿರುವುದರಿಂದ ಅಪಘಾತಗಳ ಸಂಖ್ಯೆ ಕಡಿಮೆ ಆಗುವ ಬದಲು ಹೆಚ್ಚಾಗುತ್ತಿದೆ. ಇದರಿಂದ ವಾಹನಗಳ ಸರಾಗ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಈ ಬಗ್ಗೆ ಜನಪ್ರತಿನಿಧಿಗಳಿಂದ ವ್ಯಾಪಕ ದೂರುಗಳು ಬಂದಿವೆ. ಇವುಗಳನ್ನು ಪರಿಶೀಲಿಸಿ ಮತ್ತು ಸ್ಥಳೀಯರ ಮನವೊಲಿಸಿ ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ತೆಗೆದು ಹಾಕಬೇಕು ಎಂದು ಪಾಟೀಲ ಸೂಚಿಸಿದರು.

ಹಾಸನ–ಮಂಗಳೂರು, ಬೆಂಗಳೂರು–ಬಿ.ಆರ್‌.ಹಿಲ್ಸ್‌, ಬೆಂಗಳೂರು–ಕನಕಪುರ ಹೆದ್ದಾರಿ ಕಾಮಗಾರಿಗಳು ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಈ ಕಾಮಗಾರಿಗಳಿಗೆ ಇರುವ ಅಡೆತಡೆಗಳನ್ನು ನಿವಾರಿಸಿ ಆದಷ್ಟು ಶೀಘ್ರವಾಗಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದೂ ಅವರು ನಿರ್ದೇಶನ ನೀಡಿದರು.

ಹೆದ್ದಾರಿಗಳ ಅಕ್ಕ– ಪಕ್ಕದ ಹಳ್ಳಿಗಳಿಗೆ ಮತ್ತು ಪೇಟೆ– ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲು ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಯು ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು. ವರ್ತುಲ ರಸ್ತೆಗಳ ಕಾಮಗಾರಿಗಳನ್ನು ತಡ ಮಾಡಿದರೆ ಆಯಾ ಪ್ರದೇಶಗಳ ನಗರಗಳ ಒಳಭಾಗದಲ್ಲಿ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿ ಅಪಘಾತಗಳಿಗೆ ಕಾರಣವಾಗುತ್ತದೆ ಎಂದು ಸಚಿವರು ಎಚ್ಚರಿಕೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು