ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಮಕ್ಕಳಿಂದ ಶೌಚಾಲಯ ಸ್ವಚ್ಛ: ಮುಖ್ಯ ಶಿಕ್ಷಕಿ ಬಂಧನ

Published 23 ಡಿಸೆಂಬರ್ 2023, 16:20 IST
Last Updated 23 ಡಿಸೆಂಬರ್ 2023, 16:20 IST
ಅಕ್ಷರ ಗಾತ್ರ

ಬೆಂಗಳೂರು: ಅಂದ್ರಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯವನ್ನು ಮಕ್ಕಳಿಂದ ಸ್ವಚ್ಛಗೊಳಿಸಿದ್ದ ಆರೋಪದಡಿ ಶಾಲೆಯ ಮುಖ್ಯ ಶಿಕ್ಷಕಿ ಟಿ. ಲಕ್ಷ್ಮಿದೇವಮ್ಮ ಅವರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಾಲೆಯ ಶೌಚಾಲಯವನ್ನು ಮಕ್ಕಳು ಸ್ವಚ್ಛಗೊಳಿಸಿದ್ದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ. ಆಂಜನಪ್ಪ, ಮುಖ್ಯ ಶಿಕ್ಷಕಿ ವಿರುದ್ಧ ಉಪ ನಿರ್ದೇಶಕರಿಗೆ ವರದಿ ನೀಡಿದ್ದರು. ನಂತರ, ಮುಖ್ಯ ಶಿಕ್ಷಕಿಯನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು.

ಘಟನೆಗೆ ಸಂಬಂಧಪಟ್ಟಂತೆ, ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ವಿರುದ್ಧ ಕೆ.ಜಿ. ಆಂಜನಪ್ಪ ಅವರು ಬ್ಯಾಡರಹಳ್ಳಿ ಠಾಣೆಗೆ ದೂರು ನೀಡಿದ್ದರು. ಬಾಲ ನ್ಯಾಯ ಕಾಯ್ದೆ ಹಾಗೂ ಮನುಷ್ಯರನ್ನು ಮಲ ಸ್ವಚ್ಛಗೊಳಿಸಲು ನಿಯೋಜಿಸಿಕೊಳ್ಳುವ ಹಾಗೂ ಪುನರ್ವಸತಿ ಕಾಯ್ದೆಯಡಿ ಲಕ್ಷ್ಮಿದೇವಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

‘ಪ್ರಕರಣ ದಾಖಲಾಗುತ್ತಿದ್ದಂತೆ ಮುಖ್ಯ ಶಿಕ್ಷಕಿ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಶನಿವಾರ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಮುಖ್ಯ ಶಿಕ್ಷಕಿ ಸೂಚನೆ ಮೇರೆಗೆ ಮಕ್ಕಳಿಬ್ಬರು ಶೌಚಾಲಯ ಸ್ವಚ್ಛಗೊಳಿಸಿದ್ದರು ಎಂಬುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ. ಇಬ್ಬರು ಮಕ್ಕಳ ಪೈಕಿ, ಒಬ್ಬನ ಹೇಳಿಕೆ ಸಹ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಯೊಬ್ಬರನ್ನೂ ವಿಚಾರಣೆ ನಡೆಸಿ ಪುನಃ ಹೇಳಿಕೆ ಪಡೆಯಲಾಗುವುದು’ ಎಂದು ತಿಳಿಸಿದರು.

‘ಶಾಲೆ ಶಿಕ್ಷಕರ ಪಾತ್ರದ ಬಗ್ಗೆ ದೂರಿನಲ್ಲಿ ಯಾವುದೇ ಉಲ್ಲೇಖವಿಲ್ಲ. ಮಕ್ಕಳು ನೀಡುವ ಹೇಳಿಕೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ಹಿಂದೆಯೂ ಮಕ್ಕಳು ಶೌಚಾಲಯ ಸ್ವಚ್ಛಗೊಳಿಸಿದ್ದ ಬಗ್ಗೆ ಮಾಹಿತಿ ಇದೆ. ಆ ಮಕ್ಕಳಿಂದಲೂ ಹೇಳಿಕೆ ಪಡೆಯಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT