ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಸ್‌ಆರ್‌ ಸಂಕೇತದಡಿ ವರ್ಗಾವಣೆ ದಂಧೆ: ಕುಮಾರಸ್ವಾಮಿ

Published 20 ಮೇ 2024, 15:54 IST
Last Updated 20 ಮೇ 2024, 15:54 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದು ವರ್ಷ ಕಳೆದರೂ ವರ್ಗಾವಣೆ ದಂಧೆ ನಿಂತಿಲ್ಲ. ಕಾರ್ಪೋರೇಟ್‌ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್‌ ಫಂಡ್‌) ಸಂಕೇತ ಬಳಸಿಕೊಂಡು ವರ್ಗಾವಣೆ ದಂಧೆ ನಡೆಯುತ್ತಿದೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಸರ್ಕಾರದ ವರ್ಷಾಚರಣೆ ಸಂಭ್ರಮದ ಕುರಿತು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಸ್ಥಗಿತವಾಗಿವೆ. ಸಚಿವರು ಜಿಲ್ಲೆಗಳಿಗೆ ಭೇಟಿನೀಡಿ ಸಭೆ ನಡೆಸುತ್ತಿಲ್ಲ. ಎಲ್ಲರೂ ವರ್ಗಾವಣೆ ದಂಧೆಯಲ್ಲೇ ಮುಳುಗಿದ್ದಾರೆ’ ಎಂದರು.

ರಾಜ್ಯ ಸರ್ಕಾರ ವರ್ಷದ ಸಂಭ್ರಮದಲ್ಲಿದೆ. ಆದರೆ, ಕೇಂದ್ರ ಸರ್ಕಾರ ರೈತರಿಗೆ ನೀಡಿರುವ ಬರ ಪರಿಹಾರದ ಹಣವನ್ನೂ ಬ್ಯಾಂಕ್‌ಗಳು ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿವೆ. ಸಂಕಷ್ಟದಲ್ಲಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅವರನ್ನು ಕೇಳುವವರೇ ಇಲ್ಲ. ಇದು ಈ ಸರ್ಕಾರದ ಕಾರ್ಯವೈಖರಿ ಎಂದು ಟೀಕಿಸಿದರು.

‘ಗ್ಯಾರಂಟಿಗಳ ಹೆಸರಿನಲ್ಲಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಅಧಿಕಾರಿಗಳು ಕಡತ ವಿಲೇವಾರಿಯನ್ನೂ ಮರೆತಿದ್ದಾರೆ. ರಾಜ್ಯದ ನೀರಾವರಿ ಯೋಜನೆಗಳ ಪ್ರಗತಿ ಕ್ಷೀಣಿಸಿದೆ. ಬೆಂಗಳೂರಿನಲ್ಲಿ ಮಳೆ ಬಂದರೆ ಮನೆಗಳಲ್ಲಿ ವಾಸಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಈ ಸರ್ಕಾರದ ಸಾಧನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT