ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನೌಕರರ ಚಳವಳಿ ‘ಕಪ್ಪು ಪಟ್ಟಿ’ ಧರಿಸಿ ಕೆಲಸ

ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹ
Last Updated 1 ಏಪ್ರಿಲ್ 2021, 19:53 IST
ಅಕ್ಷರ ಗಾತ್ರ

ಬೆಂಗಳೂರು: ‘ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು’ ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಸಾರಿಗೆ ನಿಗಮಗಳ ನೌಕರರು ಚಳವಳಿ ಆರಂಭಿಸಿದ್ದು, ಅದರ ಪ್ರಯುಕ್ತ ಗುರುವಾರ ‘ಕಪ್ಪು ಪಟ್ಟಿ’ ಧರಿಸಿ ಪ್ರತಿಭಟನೆ ನಡೆಸಿದರು.

‘ಏಪ್ರಿಲ್ 7ರಿಂದ ರಾಜ್ಯದಾದ್ಯಂತ ಕರ್ತವ್ಯಕ್ಕೆ ಗೈರು ಹಾಜರಾಗಿ ಮುಷ್ಕರ ನಡೆಸಲಾಗುವುದು’ ಎಂದು ನೌಕರರು ಈಗಾಗಲೇ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಎಚ್ಚರಿಕೆ ನೀಡಲು ನೌಕರರು, ಗುರುವಾರದಿಂದಲೇ ಸರಣಿ ಪ್ರತಿಭಟನೆ ಆರಂಭಿಸಿದ್ದಾರೆ. ಅದರ ಭಾಗವಾಗಿಯೇ ತಲೆ ಹಾಗೂ ಕೈಗಳಿಗೆ ಕಪ್ಪುಪಟ್ಟಿ ಧರಿಸಿಕೊಂಡು ಕರ್ತವ್ಯಕ್ಕೆ ಹಾಜರಾಗಿ ಆಕ್ರೋಶ ಹೊರಹಾಕಿದರು.

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಸೇರಿದ್ದ ನೌಕರರು, ತಮ್ಮ ಬೇಡಿಕೆ ಈಡೇರಿಕೆಗಾಗಿ ಘೋಷಣೆ ಕೂಗಿದರು.

ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದಿಂದ ಚಳವಳಿ ಹಮ್ಮಿಕೊಳ್ಳಲಾಗಿದ್ದು, ಇದರ ನೇತೃತ್ವವನ್ನು ಒಕ್ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಹಿಸಿಕೊಂಡಿದ್ದಾರೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ ನಾಲ್ಕು ವಿಭಾಗಗಳ ನೌಕರರು ಚಳವಳಿಯಲ್ಲಿ ಭಾಗವಹಿಸುತ್ತಿದ್ದಾರೆ. ರಾಜ್ಯದ ಎಲ್ಲ ಬಸ್‌ ನಿಲ್ದಾಣ, ಡಿಪೊಗಳು ಹಾಗೂ ವಿಭಾಗದ ಕಚೇರಿಗಳಲ್ಲಿ ಬಹುಪಾಲು ನೌಕರರು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿ ಸಾರ್ವಜನಿಕರ ಗಮನ ಸೆಳೆದರು.

‘ಸಾರಿಗೆ ನೌಕರರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು. 6ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತರಬೇಕು ಸೇರಿದಂತೆ ಪ್ರಮುಖ 9 ಬೇಡಿಕೆಗಳ ಈಡೇರಿಕೆಗಾಗಿ ಹಲವು ವರ್ಷಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿ ಬಾರಿಯೂ ಭರವಸೆ
ನೀಡುತ್ತಿರುವ ಸರ್ಕಾರ, ಬೇಡಿಕೆ ಈಡೇರಿಕೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ನೌಕರರಿಗೆ ನೋವುಂಟು ಮಾಡಿದೆ. ಅದೇ ಕಾರಣಕ್ಕೆ ಪುನಃ ಮುಷ್ಕರ ಆರಂಭಿಸಲು ತೀರ್ಮಾನಿಸಲಾಗಿದೆ’ ಎಂದು ಪ್ರತಿಭಟನನಿರತರು ಹೇಳಿದರು.

‘ಏಕಾಏಕಿ ಮುಷ್ಕರ ಆರಂಭಿಸಿದರೆ, ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಹೀಗಾಗಿ, ಮುಷ್ಕರ ದಿನಾಂಕವನ್ನೂ ಮೊದಲೇ ನಿಗದಿ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ. ಮುಷ್ಕರ ಆರಂಭಿಸುವ ಮುನ್ನವೇ ಸರ್ಕಾರ, ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಮುಂದಾಗುವ ಸಮಸ್ಯೆಗಳಿಗೆ ಸರ್ಕಾರವೇ ಹೊಣೆ’ ಎಂದು ಪ್ರತಿಭಟನಕಾರರು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT