ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೌಡಿಗಳಿಗೆ ಅಕ್ರಮವಾಗಿ ಪಿಸ್ತೂಲ್‌, ಗುಂಡುಗಳನ್ನು ಮಾರುತ್ತಿದ್ದ ಇಬ್ಬರ ಬಂಧನ

2 ಪಿಸ್ತೂಲ್‌, 9 ಜೀವಂತ ಗುಂಡು ಜಪ್ತಿ
Published 18 ಜನವರಿ 2024, 17:59 IST
Last Updated 18 ಜನವರಿ 2024, 17:59 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದ ರೌಡಿಗಳಿಗೆ ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡುತ್ತಿದ್ದ ಮಹಾರಾಷ್ಟ್ರದ ಇಬ್ಬರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಸಾಂಗ್ಲಿಯ ವಸಂತ್‌ ಹೌಸಿಂಗ್‌ ಸೊಸೈಟಿ ನಿವಾಸಿ ರಾಹುಲ್‌ ಸತೀಶ್‌ ಮಾನೆ ಹಾಗೂ ಮಲ್ಲಿಕ್‌ ಸಲೀಂ ಶೇಖ ಬಂಧಿತ ಆರೋಪಿಗಳು.

ಮಧ್ಯಪ್ರದೇಶದ ಚೌಟು ಎಂಬಾತ ತಲೆಮರೆಸಿಕೊಂಡಿದ್ದು ಆತನಿಗೆ ಶೋಧ ಮುಂದುವರಿಸಲಾಗಿದೆ.

ಜ್ಞಾನಭಾರತಿ ಪೊಲೀಸ್‌ ಠಾಣಾ ವ್ಯಾಪ್ತಿಯ ಉಲ್ಲಾಳದ ಬಳಿ ಆರೋಪಿಗಳನ್ನು ಬಂಧಿಸಿ, ಎರಡು ಕಂಟ್ರಿಮೇಡ್‌ ಪಿಸ್ತೂಲ್‌, 9 ಜೀವಂತ ಗುಂಡು, ಒಂದು ಕಾರನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

‘ಉಲ್ಲಾಳದ ಬಳಿ ರೌಡಿಗಳಿಗೆ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಆರೋಪಿಗಳು ಪ್ರಯತ್ನಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ, ಬಂಧಿಸಲಾಯಿತು’ ಎಂದು ಪೊಲೀಸರು ಹೇಳಿದರು.

‘ರಾಹುಲ್‌ ಸತೀಶ್‌ ಮಾನೆ ಪ್ರಕರಣವೊಂದರಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ಸೇರಿದ್ದ. ಕಾರಾಗೃಹದಲ್ಲಿ ಒಂದು ವರ್ಷ ಶಿಕ್ಷೆ ಅನುಭವಿಸುತ್ತಿದ್ದ ವೇಳೆ ರೌಡಿಗಳ ಪರಿಚಯವಾಗಿತ್ತು. ಜೈಲಿನಿಂದ ಬಿಡುಗಡೆಯಾದ ಮೇಲೆ ಹಳೆಯ ಸಂಪರ್ಕ ಬಳಸಿ ನಗರದ ಬೇರೆ ಬೇರೆ ಠಾಣಾ ವ್ಯಾಪ್ತಿಯ ರೌಡಿಗಳಿಗೆ ಅಕ್ರಮವಾಗಿ ಶಸ್ತ್ರಾಸ್ತ್ರ ಪೂರೈಸುತ್ತಿದ್ದ’ ಎಂದು ಪೊಲೀಸರು ಹೇಳಿದರು.

‘ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಆರೋಪಿಗಳ ವಿರುದ್ಧ ಶಸ್ತ್ರಾಸ್ತ್ರ ಕಾಯ್ಡೆ ಅಡಿಯಲ್ಲಿ ಮಹಾರಾಷ್ಟ್ರದ ಮೀರಜ್‌ ಮಹಾತ್ಮ ಗಾಂಧಿ ಪೊಲೀಸ್ ಠಾಣೆಯಲ್ಲಿ 2, ಮೀರಜ್‌ ಟೌನ್‌ ಠಾಣೆಯಲ್ಲಿ 1, ಸಾಂಗ್ಲಿ ವೆಲ್‌ವಾಡಿ ಠಾಣೆಯಲ್ಲಿ 1, ಮೀರಜ್‌ ಎಂಐಡಿಸಿ ಠಾಣೆಯಲ್ಲಿ 1, ಬೆಂಗಳೂರು ನಗರದ ಬ್ಯಾಟರಾಯನಪುರ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿತ್ತು’ ಎಂದು ಮೂಲಗಳು ಹೇಳಿವೆ.

ರಾಹುಲ್‌ ಸತೀಶ್‌ ಮಾನೆ ನೇತೃತ್ವದಲ್ಲಿ ಮೂರು ರಾಜ್ಯಗಳಿಗೆ ಅಕ್ರಮವಾಗಿ ಶಸ್ತ್ರಾಸ್ತ್ರ ಪೂರೈಕೆ ಮಾಡಲಾಗುತ್ತಿತ್ತು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ಮಹಾರಾಷ್ಟ್ರದಿಂದ ಕಡಿಮೆ ದರಕ್ಕೆ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಖರೀದಿಸಿ ಹೆಚ್ಚಿನ ದರಕ್ಕೆ ಆರೋಪಿಗಳು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ಮಲ್ಲಿಕ್‌
ಮಲ್ಲಿಕ್‌
ಸಿಸಿಬಿ ಪೊಲೀಸರು ಜಪ್ತಿ ಮಾಡಿಕೊಂಡ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳು.
ಸಿಸಿಬಿ ಪೊಲೀಸರು ಜಪ್ತಿ ಮಾಡಿಕೊಂಡ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT