ಭಾನುವಾರ, ಏಪ್ರಿಲ್ 2, 2023
31 °C

ಒಂದೇ ತಿಂಗಳಲ್ಲಿ ಎರಡು ಸೆಮಿಸ್ಟರ್‌ ಪರೀಕ್ಷೆ: ಆಕ್ಷೇಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಫಾರ್ಮಸಿ ಹಾಗೂ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗೆ ಹಿಂದಿನ ಸೆಮಿಸ್ಟರ್‌ನ ಪರೀಕ್ಷೆಗಳನ್ನು ರದ್ದುಗೊಳಿಸಿ, ಆಂತರಿಕ ಮೌಲ್ಯಮಾಪನ ಅಥವಾ ವೈಜ್ಞಾನಿಕ ಮಾನದಂಡಗಳ ಮೌಲ್ಯಮಾಪನ ನಡೆಸಬೇಕು’ ಎಂದು ಆಲ್‌ ಇಂಡಿಯಾ ಡೆಮಾಕ್ರಟಿಕ್ಸ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್ (ಎಐಡಿಎಸ್ಒ) ಸಂಘಟನೆ ಆಗ್ರಹಿಸಿದೆ. 

ಈ ಸಂಬಂಧ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಸಂಘಟನೆ ಪತ್ರ ಬರೆದಿದೆ.

‘ಕೋವಿಡ್‌ ಬಿಕ್ಕಟ್ಟಿನಿಂದಾಗಿ ಹಿಂದಿನ ಸೆಮಿಸ್ಟರ್‌ಗಳ ಪರೀಕ್ಷೆಗಳನ್ನು ರದ್ದು ಮಾಡಲಾಗಿತ್ತು. ವಿದ್ಯಾರ್ಥಿಗಳೂ ಈಗ ಮುಂದಿನ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಹಿಂದಿನ ಸೆಮಿಸ್ಟರ್‌ನ ಪರೀಕ್ಷೆ ನಡೆಸುವ ದಿಢೀರ್ ನಿರ್ಧಾರ ಸರಿಯಲ್ಲ. ಇದರಿಂದ ವಿದ್ಯಾರ್ಥಿಗಳ ಮೇಲೆ ಹೊರೆ ಹೆಚ್ಚಾಗಲಿದೆ’ ಎಂದು ಎಐಡಿಎಸ್ಒ ರಾಜ್ಯ ಘಟಕದ ಅಧ್ಯಕ್ಷೆ ಕೆ.ಎಸ್.ಅಶ್ವಿನಿ ಕಳವಳ ವ್ಯಕ್ತಪಡಿಸಿದರು.

‘ಒಂದೇ ತಿಂಗಳಲ್ಲಿ ಎರಡು ಸೆಮಿಸ್ಟರ್‌ಗಳ ಪರೀಕ್ಷೆ ನಡೆಸುವ ನಿರ್ಧಾರವನ್ನು ಕೂಡಲೇ ಕೈಬಿಡಬೇಕು. ಶಿಕ್ಷಣ ತಜ್ಞರು, ಪೋಷಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಜೊತೆ ಚರ್ಚಿಸಿ, ಶೈಕ್ಷಣಿಕ ವೇಳಾ‍ಪಟ್ಟಿ, ಪರೀಕ್ಷೆ, ಮೌಲ್ಯಮಾಪನ ಸಂಬಂಧ ವೈಜ್ಞಾನಿಕ ನೀತಿ ರೂಪಿಸಬೇಕು’ ಎಂದು ಸಲಹೆ ನೀಡಿದರು.

‘ಭೌತಿಕ ತರಗತಿಗಳ ಆರಂಭಕ್ಕೂ ಮುನ್ನ ಎಲ್ಲ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಬೇಕು. ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಿಲ್ಲದ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಬೇಕು’ ಎಂದೂ ಒತ್ತಾಯಿಸಿದರು‌.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು