ಸೋಮವಾರ, ಜೂಲೈ 13, 2020
22 °C
ಮಳೆಗೆ ಮಹಿಳೆಯರಿಬ್ಬರ ಬಲಿ–ಬಿಬಿಎಂಪಿಗೆ ನಗರಾಭಿವೃದ್ಧಿ ಇಲಾಖೆ ತರಾಟೆ

ಮಳೆಯಿಂದ ಸಾವು–ಸಹಿಸಲು ಸಾಧ್ಯವಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಮಳೆಯಿಂದಾಗಿ ಮಹಿಳೆಯರಿಬ್ಬರು ಮೃತಪಟ್ಟ ಬಗ್ಗೆ ನಗರಾಭಿವೃದ್ಧಿ ಇಲಾಖೆ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ‘ಮಳೆಯಿಂದ ಪ್ರಾಣಹಾನಿ ಸಂಭವಿಸುವುದನ್ನು ಇನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಬಿಬಿಎಂಪಿಗೆ ಇಲಾಖೆಯು ಸ್ಪಷ್ಟವಾಗಿ ತಿಳಿಸಿದೆ.

‘ಕೊಂಬೆ ಬಿದ್ದು ಯಾರಾದರೂ ಸತ್ತರೆ ಅದನ್ನು ಕೇವಲ ಆಕಸ್ಮಿಕ ಎನ್ನಲಾಗದು. ಸಕಾಲದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುತ್ತಿದ್ದರೆ ಎರಡು ಅಮೂಲ್ಯ ಜೀವಗಳು ಸಾಯುವುದನ್ನು ತಪ್ಪಿಸಬಹುದಿತ್ತು’ ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಅವರು ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌ ಅವರಿಗೆ ಬುಧವಾರ ಬರೆದ ಪತ್ರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

‘ಮಳೆ ಬಂದಾಗ ಸಂಭವಿಸುವ ಅವಘಡ ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಇಲಾಖೆ ಮೊದಲೇ ಸೂಚನೆ ನೀಡಿತ್ತು. ಮರಗಳ ರೆಂಬೆ ಕೊಂಬೆಗಳು ಬೀಳುವ ಸಂಭವವಿದ್ದರೆ ಅವುಗಳನ್ನು ಕತ್ತರಿಸುವಂತೆಯೂ ಸಲಹೆ ನೀಡಿದ್ದೆವು. ಇಷ್ಟಾಗಿಯೂ ಕ್ರಮ ಕೈಗೊಳ್ಳುವಲ್ಲಿ ಬಿಬಿಎಂಪಿ ಅಧಿಕಾರಿಗಳು ವಿಫಲರಾಗಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಈ ಮಳೆ ಅವಘಡಗಳನ್ನು ತಪ್ಪಿಸುವ ಹೊಣೆ ಹೊತ್ತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಂತಹ ಅಧಿಕಾರಿಗಳು ನಿಯೋಜನೆ ಮೇರೆಗೆ ಬಿಬಿಎಂಪಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆ, ಅವರನ್ನು ನಗರಾಭಿವೃದ್ಧಿ ಇಲಾಖೆ ಕಳುಹಿಸಿ. ಇಂತಹ ಕಠಿಣ ಕ್ರಮ ಕೈಗೊಂಡರೆ ಮಾತ್ರ ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ರವಾನೆಯಾಗುತ್ತದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು