ಬೆಂಗಳೂರು: ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿ ಚಿಕ್ಕಪ್ಪನಿಗೆ 5 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ನಗರದ ಒಂದನೇ ತ್ವರಿತ ವಿಶೇಷ ನ್ಯಾಯಾಲಯ (ಎಫ್‌ಟಿಎಸ್‌ಸಿ) ಆದೇಶ ಹೊರಡಿಸಿದೆ.
ಚಂದ್ರಾಲೇಔಟ್ ಠಾಣೆ ವ್ಯಾಪ್ತಿಯಲ್ಲಿ 2022ರಲ್ಲಿ ನಡೆದಿದ್ದ ಘಟನೆ ಬಗ್ಗೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶೆ ರೂಪಾ ಕೆ.ಎನ್. ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಪಿ.ಕೃಷ್ಣವೇಣಿ ವಾದಿಸಿದ್ದರು.
‘ಭದ್ರತಾ ಸಿಬ್ಬಂದಿ ಕೆಲಸ ಮಾಡುತ್ತಿದ್ದ ಚಿಕ್ಕಪ್ಪ, ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಮಗುವಿನ ತಾಯಿ ಠಾಣೆಗೆ ದೂರು ನೀಡಿದ್ದರು. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು’ ಎಂದು ಪೊಲೀಸರು ಹೇಳಿದರು.
‘ನ್ಯಾಯಾಲಯವು ಅಪರಾಧಿಗೆ ₹75 ಸಾವಿರ ದಂಡ ವಿಧಿಸಿದೆ. ಜೊತೆಗೆ, ಮಗುವಿಗೆ ₹ 50,000 ಪರಿಹಾರ ನೀಡುವಂತೆ ಆದೇಶದಲ್ಲಿ ಉಲ್ಲೇಖಿಸಿದೆ’ ಎಂದು ತಿಳಿಸಿದರು.