ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ, ದದ್ದಲ್‌ ಎಸ್‌ಐಟಿ ಎದುರು ಇಂದು ಹಾಜರು?

Published 8 ಜುಲೈ 2024, 23:53 IST
Last Updated 8 ಜುಲೈ 2024, 23:53 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಎದುರು ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷರೂ ಆಗಿರುವ ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಸನಗೌಡ ದದ್ದಲ್‌ ಅವರು ಮಂಗಳವಾರ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ಹಗರಣದಲ್ಲಿ ಇಬ್ಬರ ಪಾತ್ರದ ಕುರಿತು ವಿಚಾರಣೆ ನಡೆಸಲು ಜುಲೈ 9ರಂದು ಸಿಐಡಿ ಕಚೇರಿಗೆ ಬರುವಂತೆ ಸೂಚಿಸಿ ಎಸ್‌ಐಟಿ ನೋಟಿಸ್ ಜಾರಿ ಮಾಡಿತ್ತು.‌ ನಿಗಮದ ಬ್ಯಾಂಕ್‌ ಖಾತೆಯಿಂದ ₹94.97 ಕೋಟಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪದಡಿ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದೆ.

‘ಎಸ್‌ಐಟಿ ಮುಖ್ಯಸ್ಥ ಮನೀಶ್ ಖರ್ಬೀಕರ್ ಅವರ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ. ಕೆಲವು ಪ್ರಶ್ನೆ ಕೇಳಲಾಗುವುದು. ಇಬ್ಬರ ಹೇಳಿಕೆಗಳನ್ನೂ ದಾಖಲು ಮಾಡಿಕೊಳ್ಳುತ್ತೇವೆ. ಇದಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ತನಿಖಾ ತಂಡದ ಮೂಲಗಳು ‘ಪ್ರಜಾವಾಣಿ’ಗೆ ಹೇಳಿವೆ.

ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದ ಬಿ.ನಾಗೇಂದ್ರ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹೊರಬಿದ್ದ ಬಳಿಕ ಜೂನ್‌ 6ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

‘ಹಣ ವರ್ಗಾವಣೆಯಲ್ಲಿ ಬಿ.ನಾಗೇಂದ್ರ ಅವರ ಆಪ್ತ ನೆಕ್ಕಂಟಿ ನಾಗರಾಜ್‌ ಹಾಗೂ ಅವರ ಸಂಬಂಧಿ ನಾಗೇಶ್ವರ ರಾವ್‌ ಅವರನ್ನು ಎಸ್‌ಐಟಿ ಬಂಧಿಸಿತ್ತು. ಅವರಿಬ್ಬರೂ ವಿಚಾರಣೆ ವೇಳೆ ನೀಡಿದ್ದ ಮಾಹಿತಿ ಆಧರಿಸಿ ನಾಗೇಂದ್ರ ಅವರಿಗೆ ಜುಲೈ 5ರಂದು ನೋಟಿಸ್ ಜಾರಿ ಮಾಡಲಾಗಿತ್ತು. ಬಸನಗೌಡ ದದ್ದಲ್‌ ಅವರ ಆಪ್ತರೊಬ್ಬರಿಗೆ ಹಣ ಸಂದಾಯ ಆಗಿರುವ ಆರೋಪದ ಮೇಲೆ ದದ್ದಲ್‌ ಅವರಿಗೂ ಅಂದೇ ನೋಟಿಸ್‌ ನೀಡಲಾಗಿತ್ತು’ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಬಸನಗೌಡ ದದ್ದಲ್‌
ಬಸನಗೌಡ ದದ್ದಲ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT