ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮ ಹಗರಣ: ಮಾಜಿ ಎಂ.ಡಿ, ಲೆಕ್ಕಾಧಿಕಾರಿ ಬಂಧನ

Published 1 ಜೂನ್ 2024, 23:30 IST
Last Updated 1 ಜೂನ್ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಲ್ಲಿದ್ದ ₹89.62 ಕೋಟಿ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಹಗರಣಕ್ಕೆ ಸಂಬಧಿಸಿದಂತೆ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ ಮತ್ತು ಲೆಕ್ಕಾಧಿಕಾರಿಯಾಗಿದ್ದ ಪರಶುರಾಮ್‌ ಜಿ. ದುರುಗಣ್ಣವರ್‌ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರ ಬಂಧಿಸಿದೆ.

ಹಗರಣದ ತನಿಖೆಗೆ ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ಎಸ್ಐಟಿ ರಚಿಸಿ ಶುಕ್ರವಾರ ಆದೇಶ ಹೊರಡಿಸಲಾಗಿತ್ತು. ಶುಕ್ರವಾರ ರಾತ್ರಿಯೇ ಕಾರ್ಯಪ್ರವೃತ್ತರಾದ ಎಸ್‌ಐಟಿ ಅಧಿಕಾರಿಗಳು, ಪದ್ಮನಾಭ ಮತ್ತು ಪರಶುರಾಮ್‌ ಅವರನ್ನು ವಶಕ್ಕೆ ಪಡೆದಿದ್ದರು. ಶನಿವಾರ ಇಬ್ಬರನ್ನೂ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ನಗರದ ಮೂರನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್‌ಐಟಿ ಅಧಿಕಾರಿಗಳು, ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಸಲ್ಲಿಸಿದರು. ಆರು ದಿನಗಳ ಕಾಲ ಇಬ್ಬರನ್ನೂ ತನಿಖಾ ತಂಡದ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದರು.

ಮತ್ತಷ್ಟು ಮಂದಿಗೆ ನೋಟಿಸ್‌:

ನಿಗಮದ ಅಧೀಕ್ಷಕ ಪಿ. ಚಂದ್ರಶೇಖರನ್ ಅವರು ಬಂಧಿತ ಇಬ್ಬರು ಅಧಿಕರಿಗಳು ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕೆಲವು ಅಧಿಕಾರಿಗಳು ಒತ್ತಡ ಹೇರಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿಸಿದ್ದಾರೆ ಎಂದು ಆರೋಪಿಸಿ ಪತ್ರ ಬರೆದಿಟ್ಟು ಶಿವಮೊಗ್ಗದಲ್ಲಿ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಚಂದ್ರಶೇಖರನ್ ಆತ್ಮಹತ್ಯೆ, ನಿಗಮದ ಹಣದ ಅಕ್ರಮ ವರ್ಗಾವಣೆ ಮತ್ತು ನಿಗಮದಲ್ಲಿನ ಆರ್ಥಿಕ ಅವ್ಯವಹಾರಗಳ ಕುರಿತು ಎಸ್ಐಟಿ ತನಿಖೆ ನಡೆಸುತ್ತಿದೆ.

ಹಣದ ಅಕ್ರಮ ವರ್ಗಾವಣೆ ಕುರಿತು ಯೂನಿಯನ್‌ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಣಿಮೇಖಲೈ ಸೇರಿದಂತೆ ಹಲವರ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಗಳು, ನಿಗಮದ ಕೆಲವು ಅಧಿಕಾರಿಗಳಿಗೆ ನೋಟಿಸ್‌ ಜಾರಿಗೊಳಿಸಿರುವ ಎಸ್‌ಐಟಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT