ಗುರುವಾರ , ಅಕ್ಟೋಬರ್ 21, 2021
24 °C

ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆ: ವರದಿ ಸಲ್ಲಿಸಲು ಬಿಬಿಎಂಪಿಗೆ ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು:‌ 'ಜಯನಗರ ಸುತ್ತಮುತ್ತಲ ಪ್ರದೇಶದ ಪಾದಚಾರಿ ಮಾರ್ಗಗಳಲ್ಲಿ ನಿಲುಗಡೆ ಮಾಡಲಾಗುವ ವಾಹನಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡು ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸಿ' ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ‘ಲೆಟ್ಜ್ ಕಿಟ್ ಫೌಂಡೇಷನ್‘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ಪುತ್ತಿಗೆ ರಮೇಶ್, ’ಬಿಬಿಎಂಪಿ ವ್ಯಾಪ್ತಿಯಲ್ಲಿನ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಲೇ ಇದೆ‘ ಎಂದು ಆಕ್ಷೇಪಿಸಿದರು.

‘ಜಯನಗರ ಪ್ರದೇಶದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಪ್ರಮಾಣಪತ್ರ ಸಲ್ಲಿಸಿತ್ತು. ಆದರೆ, ಅಲ್ಲಿ ತೆರವು ಕಾರ್ಯ ನಡೆದಿಲ್ಲ. ಮಾಮೂಲಿನಂತೆ ಪಾದಚಾರಿ ಮಾರ್ಗಗಳಲ್ಲಿ  ವಾಹನ ನಿಲುಗಡೆ ಮಾಡಲಾಗುತ್ತಿದೆ‘ ಎಂದು ಫೋಟೊ ಸಮೇತ ದಾಖಲೆಗಳನ್ನು ನ್ಯಾಯಪೀಠಕ್ಕೆ ನೀಡಿದರು.

ಅರ್ಜಿದಾರರ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ‌ಬಿಬಿಎಂಪಿ ಪರ ವಕೀಲರು, ’ಈ ಹಿಂದೆ ಅರ್ಜಿದಾರರು ನೀಡಿದ್ದ ಫೋಟೊಗಳನ್ನು ಆಧರಿಸಿ ತೆರವು ಕಾರ್ಯ ನಡೆಸಲಾಗಿತ್ತು. ವಾಹನಗಳ ಮಾಲೀಕರಿಗೆ ನೋಟಿಸ್ ಕೂಡಾ ನೀಡಲಾಗಿತ್ತು. ಆದರೆ, ತೆರವು ಮಾಡಲಾದ ಜಾಗಗಳಲ್ಲಿ ಕೆಲವೆಡೆ ಕುಂಡಗಳನ್ನು ಇರಿಸಲಾಗಿದೆ. ಆದ್ದರಿಂದ, ಈ ಕುರಿತಂತೆ ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆದು ವಿವರ ಸಲ್ಲಿಸಲು ಕಾಲಾವಕಾಶ ನೀಡಬೇಕು‘ ಎಂದು ಕೋರಿದರು.

ಇದನ್ನು ಮನ್ನಿಸಿದ ನ್ಯಾಯಪೀಠ, ’ಅರ್ಜಿದಾರರು ಫೋಟೊದಲ್ಲಿ ತಿಳಿಸಿರುವ ಜಾಗಗಳಲ್ಲಿ ಪಾದಚಾರಿ ಒತ್ತುವರಿ ತೆರವು ಕಾರ್ಯ ಕೈಗೊಳ್ಳಲಾಗುವ ಕ್ರಮಗಳ ಬಗ್ಗೆ ನಾಲ್ಕು ವಾರಗಳಲ್ಲಿ ಅನುಪಾಲನಾ ವರದಿ ಸಲ್ಲಿಸಿ‘ ಎಂದು ಬಿಬಿಎಂಪಿಗೆ ಸೂಚಿಸಿ ನವೆಂಬರ್‌ 12ಕ್ಕೆ ವಿಚಾರಣೆ ಮುಂದೂಡಿದೆ.

ಅರ್ಜಿ ವಿಲೇವಾರಿ: ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕೋರಿ ವಕೀಲ ಡಿ.ಎಸ್.ರಾಮಚಂದ್ರ ರೆಡ್ಡಿ ಸಲ್ಲಿಸಿದ್ದ ಪಿಐಎಲ್ ಅನ್ನು ನ್ಯಾಯಪೀಠ ಇದೇ ವೇಳೆ ವಿಲೇವಾರಿ ಮಾಡಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ಎ.ವಿಜಯಕುಮಾರ್ ಪಾಟೀಲ್, ’ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಮೋಟಾರು ವಾಹನ ಕಾಯ್ದೆ ಅಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲು ಸರ್ಕಾರ ಹಾಗೂ ಬಿಬಿಎಂಪಿ ಈಗಾಗಲೇ ಸೂಕ್ತ ಆದೇಶಗಳನ್ನು ಹೊರಡಿಸಿವೆ. ಆದ್ದರಿಂದ, ಈ  ಅರ್ಜಿಯನ್ನು ಇತ್ಯರ್ಥಪಡಿಸಬಹುದು’ ಎಂದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿ ವಿಲೇವಾರಿ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು