ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ‘ಮಹಿಳೆಯರು, ಮಕ್ಕಳ ಆರೋಗ್ಯ ವೃದ್ಧಿಗೆ ಸಹಕಾರಿಯಾದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ರಾಜ್ಯದಲ್ಲಿ ತಲಾ 70 ಸಾವಿರ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಅಂಗನವಾಡಿಗಳ ಸಬಲೀಕರಣಕ್ಕೆ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪ್ರಾಮಾಣಿಕ ಬೇಡಿಕೆಗಳನ್ನು ಈಡೇರಿಸಬೇಕು. ಗ್ರ್ಯಾಚುಟಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈ ಹಿಂದೆ ಹೊರಡಿಸಿರುವ ಆದೇಶವನ್ನು ತಿದ್ದುಪಡಿ ಮಾಡಿ, ನಿವೃತ್ತರಾದ ಎಲ್ಲರಿಗೂ ಗ್ರ್ಯಾಚುಟಿ ಸೌಲಭ್ಯ ಒದಗಿಸಬೇಕು’ ಎಂದರು.