ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲಶಕ್ತಿ ಅಭಿಯಾನಕ್ಕೆ ಚಾಲನೆ

Last Updated 6 ಅಕ್ಟೋಬರ್ 2019, 19:13 IST
ಅಕ್ಷರ ಗಾತ್ರ

ಯಲಹಂಕ: ‘ನೀರಿನ ಸದ್ಬಳಕೆ ಮತ್ತು ಸಮರ್ಪಕವಾಗಿ ನಿರ್ವಹಣೆ ಮಾಡಲು ನೀರಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳನ್ನು ಒಂದೇ ಸಚಿವಾಲಯದಡಿ ಕಾರ್ಯನಿರ್ವಹಿಸುವಂತೆ ಮಾರ್ಪಾಡು ಮಾಡುವ ಮೂಲಕ ನೀರಿನ ಸಂರಕ್ಷಣೆಗೆ ಒತ್ತು ನೀಡಲಾಗುವುದು’ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.

ಕೃಷಿ ವಿಶ್ವವಿದ್ಯಾಲಯ, ಭಾರತೀಯ ಕೃಷಿ ಸಂಶೋಧನಾ ಪರಿಷತ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಜಿಕೆವಿಕೆಯಲ್ಲಿ ಆಯೋಜಿಸಿದ್ದ ಜಲಶಕ್ತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

‘ನೀರಿನ ಅಭಾವ ಮತ್ತು ಭವಿಷ್ಯದಲ್ಲಿ ನೀರಿನ ಅಗತ್ಯತೆ ಹಿನ್ನೆಲೆಯಲ್ಲಿ ಈ ಅಭಿಯಾನವನ್ನು ಆರಂಭಿಸಲಾಗಿದ್ದು, ರೈತರು ಹಾಗೂ ಸಾರ್ವಜನಿಕರನ್ನು ಸಹಭಾಗಿತ್ವ ಮಾಡಿಕೊಳ್ಳಲು ಮುಂದಾಗಿದ್ದೇವೆ’ ಎಂದರು.

ನೀರನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಜಲಶಕ್ತಿ ಯೋಜನೆಯ ಸಮರ್ಪಕ ಅನುಷ್ಟಾನಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ದೇಶದಲ್ಲಿ ಅತಿಹೆಚ್ಚು ನೀರಿನ ಅಭಾವವಿರುವ 155 ತಾಲ್ಲೂಕುಗಳು ಸೇರಿದಂತೆ ರಾಜ್ಯದ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳನ್ನು ಗುರುತಿಸಲಾಗಿದ್ದು, ಮೊದಲ ಹಂತದಲ್ಲಿ ಈ ಪ್ರದೇಶಗಳಲ್ಲಿ ಜಲಸಂರಕ್ಷಣೆಗಾಗಿ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ರಾಜೇಂದ್ರಪ್ರಸಾದ್ ಮಾತನಾಡಿ, ‘ರಾಜ್ಯದಲ್ಲಿ ಸುಮಾರು 2 ಲಕ್ಷ ಜನರು ಪ್ರತಿವರ್ಷ ನೀರಿಲ್ಲದೆ ಸಂಕಷ್ಟದಲ್ಲಿದ್ದಾರೆ. ಪ್ರತಿದಿನ ನೀರಿನ ಮೂಲಗಳು ಕಡಿಮೆಯಾಗುತ್ತಿದ್ದು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ 2 ಸಾವಿರ ಅಡಿಗಳವರೆಗೆ ಅಂತರ್ಜಲ ಕುಸಿದಿದೆ’ ಎಂದು ಹೇಳಿದರು.

‘ಕೃಷಿ ವಿಶ್ವವಿದ್ಯಾಲಯದಲ್ಲಿ ಈ ಹಿಂದೆ ನೀರಿನ ಸಮಸ್ಯೆ ಇತ್ತು. ಮಳೆ ನೀರು ಸಂಗ್ರಹ ಮತ್ತಿತರ ಜಲಸಂರಕ್ಷಣೆ ಕಾರ್ಯಕ್ರಮಗಳನ್ನು ಅಳವಡಿಸಿಕೊಂಡು 2 ಲಕ್ಷ ಲೀಟರ್ ನೀರನ್ನು ಮರುಬಳಕೆ ಮಾಡುತ್ತಿರುವುದರಿಂದ ನೀರಿನ ಅಭಾವವನ್ನು ನೀಗಿಸಲಾಗಿದೆ. ರೈತರೂ ಸಹ ನೀರಿನ ವಿಚಾರದಲ್ಲಿ ನಿರ್ಲಕ್ಷ್ಯ ಮನೋಭಾವ ತೋರದೆ, ಲಭ್ಯವಿರುವ ಸಣ್ಣ ತಂತ್ರಜ್ಞಾನಗಳನ್ನು ಬಳಸಿಕೊಳ್ಳಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT