ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದಲ್ಲಿ ಬಿಸಿ ಗಾಳಿ: 4 ಜಿಲ್ಲೆಗಳಲ್ಲಿ 45 ಡಿಗ್ರಿ ಸೆಲ್ಸಿಯಸ್ ದಾಟಿದ ಉಷ್ಣಾಂಶ

Published 2 ಮೇ 2024, 15:41 IST
Last Updated 2 ಮೇ 2024, 15:41 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬಿಸಿ ಗಾಳಿ ಮುಂದುವರಿದಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಪ್ರಕಾರ ಗರಿಷ್ಠ ಉಷ್ಣಾಂಶ ಗುರುವಾರ ನಾಲ್ಕು ಜಿಲ್ಲೆಗಳಲ್ಲಿ 45 ಡಿಗ್ರಿ ಸೆಲ್ಸಿಯಸ್ ದಾಟಿದೆ. 

ಮಂಡ್ಯದಲ್ಲಿ 47.6 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ 46.7 ಡಿಗ್ರಿ ಸೆಲ್ಸಿಯಸ್, ಕಲಬುರಗಿಯಲ್ಲಿ 46.1 ಡಿಗ್ರಿ ಸೆಲ್ಸಿಯಸ್ ಹಾಗೂ ಯಾದಗಿರಿಯಲ್ಲಿ 46 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ವರದಿಯಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಹಾಗೂ ಹಾಸನ ಜಿಲ್ಲೆಯನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ. 

ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಬೆಂಗಳೂರು ಘಟಕದ ಪ್ರಕಾರ ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಯಲ್ಲಿ ಶುಕ್ರವಾರವೂ ತೀವ್ರ ಬಿಸಿ ಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಇದೇ 5ರವರೆಗೂ ಒಣ ಹವೆ ಇರುವ ಬಗ್ಗೆ ಘಟಕ ಮುನ್ಸೂಚನೆ ನೀಡಿದೆ.

ಕೊಡಗು ಹಾಗೂ ಮೈಸೂರಿನ ಕೆಲವೆಡೆ ಶುಕ್ರವಾರ ಮಳೆಯಾಗುವ ಸಂಭವವಿದೆ. ಮುಂದಿನ ನಾಲ್ಕು ದಿನಗಳು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ರಾತ್ರಿಯ ಅವಧಿಯು ಬಿಸಿ ವಾತಾವರಣದಿಂದ ಕೂಡಿರುವ ಸಾಧ್ಯತೆಯಿದೆ. ಇದೇ 7ರಿಂದ 9ರವರೆಗೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಂಭವವಿದೆ ಎಂದು ಐಎಂಡಿ ಬೆಂಗಳೂರು ಘಟಕ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT