ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಲ್ಲಿ ವಾರಾಂತ್ಯ ಕರ್ಫ್ಯೂ ಸದ್ಯಕ್ಕಿಲ್ಲ: ಬಿಬಿಎಂಪಿ

Last Updated 7 ಆಗಸ್ಟ್ 2021, 13:17 IST
ಅಕ್ಷರ ಗಾತ್ರ

ಬೆಂಗಳೂರು: 'ನಗರದಲ್ಲಿ ಕೋವಿಡ್‌ ನಿಯಂತ್ರಣ ಸಲುವಾಗಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸುವ ಪ್ರಸ್ತಾಪ ಸದ್ಯಕ್ಕೆ ಬಿಬಿಎಂಪಿ ಮುಂದಿಲ್ಲ' ಎಂದು ಮುಖ್ಯ ಆಯುಕ್ತ ಗೌರವ್‌ ಗುಪ್ತ ಸ್ಪಷ್ಟಪಡಿಸಿದರು.

‘ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಗೆ ಹೊಂದಿಕೊಂಡ ಎಂಟು ಜಿಲ್ಲೆಗಳಲ್ಲಿ ಮಾತ್ರ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ನಿತ್ಯ ಸರಾಸರಿ 450ರಷ್ಟು ಕೋವಿಡ್‌ ಪ್ರಕರಣಗಳು ಮಾತ್ರ ಪತ್ತೆಯಾಗುತ್ತಿವೆ. ನಗರದಲ್ಲಿ ಕೋವಿಡ್‌ ಪರೀಕ್ಷೆಗೆ ಒಳಪಟ್ಟವರಲ್ಲಿ ಸೊಂಕು ಪತ್ತೆ ದರ ಶೇ 1ಕ್ಕಿಂತ ಕಡಿಮೆ ಇದೆ. ರಾಜ್ಯದ ಗಡಿಭಾಗದ ಹಲವಾರು ಜಿಲ್ಲೆಗಳಲ್ಲಿ ಸೋಂಕು ಪತ್ತೆ ದರ ಶೇ 2ಕ್ಕಿಂತ ಇದೆ. ಸದ್ಯಕ್ಕೆ ನಗರದಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸುವ ಅಗತ್ಯ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

‘ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯ ತಜ್ಞರ ಜೊತೆ ಮುಖ್ಯಮಂತ್ರಿ ಹಾಗೂ ಹಿರಿಯ ಸಚಿವರು ವಿಸ್ತೃತ ಚರ್ಚೆ ನಡೆಸಿ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದಾರೆ. ನಗರದಲ್ಲಿ ರಾತ್ರಿ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ಅದರ ಪ್ರಕಾರ ಪೊಲೀಸ್‌ ಇಲಾಖೆ ಕ್ರಮಕೈಗೊಳ್ಳಲಿದೆ’ ಎಂದು ಗೌರವ್‌ ಗುಪ್ತ ವಿಶ್ವಾಸ ವ್ಯಕ್ತಪಡಿಸಿದರು.

‘ಡೆಲ್ಟಾ ರೂಪಾಂತರಿ ಸೇರಿದಂತೆ ಕೊರೊನಾ ಹರಡುವ ಯಾವುದೇ ವೈರಾಣು ಪತ್ತೆಯಾದರೂ ಸೋಂಕಿತರಿಗೆ ಚಿಕಿತ್ಸೆ ನೀಡಿ ಅವರ ಯೋಗಕ್ಷೇಮ ನೋಡಿಕೊಳ್ಳಲು, ಅವರ ಜೊತೆ ಸಂಪರ್ಕ ಹೊಂದಿದವರನ್ನು ಪತ್ತೆ ಹಚ್ಚಿ ಸೋಂಕು ಹರಡದಂತೆ ತಡೆಯಲು ಬಿಬಿಎಂಪಿಯ ವಾರ್ಡ್‌ ಮಟ್ಟದ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ಸೊಂಕಿತರ ಸಂಪರ್ಕ ಪತ್ತೆ ಕಾರ್ಯವೂ ನಡೆಯುತ್ತಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT