ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಂಗ್ಲ ಮಾಧ್ಯಮ: ಆದೇಶ ಹಿಂಪಡೆಯಲು ಪುರುಷೋತ್ತಮ ಬಿಳಿಮಲೆ ಮನವಿ

Published 19 ಜೂನ್ 2024, 14:43 IST
Last Updated 19 ಜೂನ್ 2024, 14:43 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನು (ದ್ವಿಭಾಷಾ ಮಾಧ್ಯಮ) ಆರಂಭಿಸಲು ಸರ್ಕಾರ ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಮನವಿ ಸಲ್ಲಿಸಿದರು‌.

ಸಚಿವರನ್ನು ಬುಧವಾರ ಭೇಟಿಯಾಗಿ ಮನವಿ ಸಲ್ಲಿಸಿ ಮಾತನಾಡಿದ ಅವರು, ‘ಸರ್ಕಾರದ ಈ ಆದೇಶವು ಕನ್ನಡ ಭಾಷೆಯಲ್ಲಿ ಶಿಕ್ಷಣ ಒದಗಿಸುವುದಕ್ಕೆ ಹಿನ್ನಡೆಯನ್ನುಂಟು ಮಾಡುತ್ತದೆ. ಕನ್ನಡ ಭಾಷೆಯ ಸಾರ್ವಭೌಮತ್ವಕ್ಕೆ ಧಕ್ಕೆಯನ್ನುಂಟು ಮಾಡುತ್ತದೆ. ಜೊತೆಗೆ, ಇದು ಕನ್ನಡ ಭಾಷಾ ಕಲಿಕಾ ಅಧಿನಿಯಮ 2015ಕ್ಕೆ ವಿರುದ್ಧವಾಗಿದೆ. ಹಾಗಾಗಿ, ಈ ಆದೇಶವನ್ನು ಹಿಂಪಡೆದು ಶಿಕ್ಷಣದಲ್ಲಿ ಕನ್ನಡ ಭಾಷಾ ಮಾಧ್ಯಮವನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

‘ಮಕ್ಕಳ ಬೆಳವಣಿಗೆಯಲ್ಲಿ ಆರಂಭಿಕ ಕಲಿಕೆ ಮತ್ತು ಕಲಿಕೆಯ ಭಾಷೆ ನಿರ್ಣಾಯಕ ಪಾತ್ರ ವಹಿಸಲಿದೆ. ಮುಖ್ಯವಾಗಿ ಕಲಿಕೆಯು ಕನ್ನಡದಲ್ಲಿ ಇರಬೇಕು. ಮಗುವಿಗೆ ಗೊತ್ತಿರುವ ಭಾಷೆಯಲ್ಲಿ ಕಲಿಸಿದರೆ ಬೌದ್ಧಿಕ ಬೆಳವಣಿಗೆ ಸಾಧ್ಯವಾಗಲಿದೆ’ ಎಂದು ಅವರು ವಿವರಿಸಿದರು.

‘ಭಾಷೆ ಎಂಬುದು ಸಂವಹನದ ಮಾಧ್ಯಮವಷ್ಟೇ ಅಲ್ಲದೇ, ಸಂಸ್ಕೃತಿ ಮತ್ತು ಮೌಲ್ಯಯುತ ವ್ಯವಸ್ಥೆಯನ್ನು ಪರಿಚಯಿಸುವ ಸಾಧನವಾಗಿದೆ. ರಾಜ್ಯದ ಮಕ್ಕಳ ಚಿಂತನ ಶಕ್ತಿಗೆ ಕನ್ನಡ ಭಾಷೆ ಭದ್ರ ಬುನಾದಿ ಹಾಕುತ್ತದೆ. ತಾಯ್ನುಡಿಯಲ್ಲಿ ಶಿಕ್ಷಣ ನೀಡುವುದನ್ನು ಅಂತರರಾಷ್ಟ್ರೀಯವಾಗಿ ಒಪ್ಪಿಕೊಳ್ಳಲಾಗಿದೆ’ ಎಂದು ಬಿಳಿಮಲೆ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT