ಶುಕ್ರವಾರ, ಮಾರ್ಚ್ 5, 2021
25 °C

‘ಸರ್ಕಾರದ ನಿರ್ಲಕ್ಷ್ಯದಿಂದಲೇ ಮಹಿಳೆಯರ ಮೇಲೆ ದೌರ್ಜನ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮಹಿಳೆಯರ ಮೇಲಿನ ದೌರ್ಜನ್ಯಗಳ ತಡೆಗೆ ವಿವಿಧ ಸಮಿತಿಗಳು ಕೊಟ್ಟ ವರದಿಯನ್ನು ರಾಜ್ಯ ಸರ್ಕಾರ ಕಣ್ಣೆತ್ತಿಯೂ ನೋಡದೆ ಇರುವುದೇ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಕಾರಣ’ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಸಮಿತಿ ಆರೋಪಿಸಿದೆ.

‘ಐದೂವರೆ ತಿಂಗಳಲ್ಲೇ 908 ಮಕ್ಕಳ ಮೇಲೆ ದೌರ್ಜನ್ಯ ವರದಿಯು ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಯ ಘನಘೋರ ಮುಖದ ಪರಿಚಯ ಮಾಡಿದೆ. ಹಿಂದೆ ಬಾಲ್ಯ ವಿವಾಹಗಳ ಕುರಿತು ಸಮೀಕ್ಷಾ ವರದಿಯೊಂದು ಪ್ರಕಟವಾಗಿತ್ತು. ಪ್ರತಿನಿತ್ಯ ನಡೆಯುತ್ತಿರುವ ದೌರ್ಜನ್ಯಗಳ ವರದಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಲೇ ಇದೆ’ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಗೌರಮ್ಮ ಹೇಳಿದ್ದಾರೆ.

‘ಪೋಕ್ಸೊ ಕಾಯ್ದೆಯಡಿ ಪ್ರಕರಣಗಳು ದಾಖಲಾಗುತ್ತಿವೆ. ಆದರೆ, ಶಿಕ್ಷೆ ನಿರೀಕ್ಷಿತ ‌ಪ್ರಮಾಣದಲ್ಲಿ ಆಗುತ್ತಿಲ್ಲ. ಮಹಿಳಾ ಆಯೋಗ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಮತ್ತು ಅದು ಹಲ್ಲಿಲ್ಲದ ಹಾವಿನಂತಾಗಿದೆ. ಈ ಎಲ್ಲಾ ಕಾರಣಗಳಿಂದ ದೌರ್ಜನ್ಯ ಹೆಚ್ಚಾಗುತ್ತಿದೆ’ ಎಂದಿದ್ದಾರೆ.

‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಅದನ್ನು ವಿಡಿಯೋ ಮಾಡಿಕೊಂಡು ಇನ್ನಷ್ಟು‌ ವಿಕೃತಿ ಮೆರೆಯಲಾಗಿದೆ. ದೇಶದ ‘ಸಂಸ್ಕೃತಿ ರಕ್ಷಕರ’ ಒಂದುಅಂಗ ಸಂಸ್ಥೆಯಾದ ಎಬಿವಿಪಿ ಕಾರ್ಯಕರ್ತರೆನ್ನಲಾದ ಯುವಕರು
ಎಸಗಿದ ಕೃತ್ಯವನ್ನು ಖಂಡಿಸುತ್ತೇವೆ. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯನ್ನು ಅಭಿನಂದಿಸುತ್ತೇವೆ’ ಎಂದು ಹೇಳಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.