ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸ ಮುಗಿಸಿ ತೆರಳುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ

Published 24 ಮೇ 2024, 15:45 IST
Last Updated 24 ಮೇ 2024, 15:45 IST
ಅಕ್ಷರ ಗಾತ್ರ

ಬೆಂಗಳೂರು: ಕೆಲಸ ಮುಗಿಸಿ ಮನೆಗೆ ಹೊರಟಿದ್ದ ಮಹಿಳೆಯೊಬ್ಬರನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪದಡಿ ಕೆನರಾ ಬ್ಯಾಂಕ್ ವ್ಯವಸ್ಥಾಪಕ ಸೇರಿದಂತೆ ಮೂವರ ವಿರುದ್ಧ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

‘ಸಂಜಯನಗರ ಠಾಣೆ ವ್ಯಾಪ್ತಿಯಲ್ಲಿ ನೆಲಸಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಚಿಕ್ಕಜಾಲ ಬಳಿಯ ಮುತ್ತುಕದಹಳ್ಳಿಯ ನೀಲಗಿರಿ ತೋಪಿನಲ್ಲಿ 2013ರ ಫೆಬ್ರುವರಿ 15ರಂದು ಮೃತದೇಹ ಪತ್ತೆಯಾಗಿತ್ತು’ ಎಂದು ಸಿಐಡಿ ಮೂಲಗಳು ಹೇಳಿವೆ.

‘ಕೃತ್ಯ ಎಸಗಿದ್ದ ಆರೋಪದಡಿ ಕೆನರಾ ಬ್ಯಾಂಕ್ ಮಹಾಲಕ್ಷ್ಮಿ ಲೇಔಟ್ ಶಾಖೆಯ ವ್ಯವಸ್ಥಾಪಕ ನರಸಿಂಹಮೂರ್ತಿ, ಈತನ ಸಹಚರರಾದ ಎನ್‌. ಹರಿಪ್ರಸಾದ್ ಹಾಗೂ ಸಿ. ದೀಪಕ್ ಅವರನ್ನು ಬಂಧಿಸಲಾಗಿದೆ. ಇವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಪತಿಯನ್ನೇ ಬಂಧಿಸಿದ್ದ ಪೊಲೀಸರು: ‘ಕೆಲಸಕ್ಕೆ ಹೋಗಿದ್ದ ಮಹಿಳೆ ವಾಪಸು ಮನೆಗೆ ಬಂದಿರಲಿಲ್ಲ. ಗಾಬರಿಗೊಂಡಿದ್ದ ಪತಿ, ಠಾಣೆಗೆ ದೂರು ನೀಡಿದ್ದರು. ಇದಾದ ಮರುದಿನವೇ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಅದನ್ನು ಪತಿ ಗುರುತಿಸಿದ್ದರು’ ಎಂದು ಸಿಐಡಿ ಮೂಲಗಳು ಹೇಳಿವೆ.

‘ಮಹಿಳೆ ಕೊಲೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಪತಿಯೇ ಆರೋಪಿ ಎಂಬುದಾಗಿ ಶಂಕಿಸಿ ಬಂಧಿಸಿದ್ದರು. ಹಲವು ದಿನಗಳವರೆಗೆ ಪತಿ ನ್ಯಾಯಾಂಗ ಬಂಧನದಲ್ಲಿದ್ದರು. ದೋಷಾರೋಪ ಪಟ್ಟಿ ಸಿದ್ಧಪಡಿಸುವ ಸಂದರ್ಭದಲ್ಲಿ ಪತಿ ವಿರುದ್ಧ ಯಾವುದೇ ಪುರಾವೆಗಳು ಲಭ್ಯವಾಗಿರಲಿಲ್ಲ. ಹೀಗಾಗಿ, ಪತಿ ಬಿಡುಗಡೆ ಆಗಿದ್ದರು. ‘ಮಹಿಳೆ ಕೊಲೆ ನಡೆದಿದೆ. ಆರೋಪಿಗಳು ಪತ್ತೆಯಾಗಿಲ್ಲ’ ಎಂಬುದಾಗಿ ಹೇಳಿ ಪೊಲೀಸರು ನ್ಯಾಯಾಲಯಕ್ಕೆ ‘ಸಿ’ ರಿಪೋರ್ಟ್ ಸಲ್ಲಿಸಿದ್ದರು’ ಎಂದು ತಿಳಿಸಿವೆ.

ಹೈಕೋರ್ಟ್‌ನಲ್ಲಿ ಮೊಕದ್ದಮೆ: ‘ಪತ್ನಿ ಕೊಲೆ ಮಾಡಿದವರನ್ನು ಪತ್ತೆ ಮಾಡಲು ಉನ್ನತ ಮಟ್ಟದ ತನಿಖೆ ನಡೆಸುವಂತೆ ಸರ್ಕಾರಕ್ಕೆ ಸೂಚಿಸಬೇಕು’ ಎಂದು ಕೋರಿ ಪತಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದರು. ಹೈಕೋರ್ಟ್ ಸೂಚನೆಯಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು.

‘ತನಿಖೆ ಆರಂಭಿಸಿದಾಗ, ಯಾವುದೇ ಸುಳಿವು ಇರಲಿಲ್ಲ. ಹಲವರನ್ನು ವಿಚಾರಣೆ ನಡೆಸಿದಾಗ, ಆರೋಪಿ ಸಿ. ದೀಪಕ್ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಈತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ನರಸಿಂಹಮೂರ್ತಿ ಹಾಗೂ ಹರಿಪ್ರಸಾದ್ ಸಿಕ್ಕಿಬಿದ್ದರು’ ಎಂದು ಸಿಐಡಿ ಮೂಲಗಳು ಹೇಳಿವೆ.

‘ಮೂವರು ಸೇರಿಕೊಂಡು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ. ಎಲ್ಲ ಪುರಾವೆಗಳನ್ನು ಲಗತ್ತಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT