ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೈಲು ನಿಲ್ದಾಣಗಳಲ್ಲಿ ವಿಶ್ವದರ್ಜೆಯ ಸೌಲಭ್ಯ: ವಿ. ಸೋಮಣ್ಣ

ಯಶವಂತಪುರ, ಕಂಟೋನ್ಮೆಂಟ್‌ ರೈಲು ನಿಲ್ದಾಣಗಳ ನವೀಕರಣ ಕಾಮಗಾರಿ ಪರಿಶೀಲಿಸಿದ ಸಚಿವ ಸೋಮಣ್ಣ
Published 30 ಜೂನ್ 2024, 15:49 IST
Last Updated 30 ಜೂನ್ 2024, 15:49 IST
ಅಕ್ಷರ ಗಾತ್ರ

ಬೆಂಗಳೂರು: ನವೀಕರಣಗೊಳ್ಳುತ್ತಿರುವ ಯಶವಂತಪುರ ಮತ್ತು ಬೆಂಗಳೂರು ಕಂಟೋನ್ಮೆಂಟ್‌ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ವಿಶ್ವದರ್ಜೆಯ ಸೌಲಭ್ಯಗಳು ದೊರೆಯಲಿವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ಈ ಎರಡೂ ನಿಲ್ದಾಣಗಳಲ್ಲಿ ನಡೆಯುತ್ತಿರುವ ನವೀಕರಣ ಯೋಜನೆಗಳನ್ನು ಭಾನುವಾರ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು.

ಬೆಳೆಯುತ್ತಿರುವ ನಗರದ ಬೇಡಿಕೆಗೆ ಅನುಗುಣವಾಗಿ ರೈಲು ನಿಲ್ದಾಣಗಳ ಮೂಲಸೌಕರ್ಯಗಳನ್ನು ಹೆಚ್ಚಿಸಿ, ಆಧುನೀಕರಣಗೊಳಿಸಲಾಗುತ್ತಿದೆ. ರಾಜ್ಯದ ರೈಲ್ವೆ ಜಾಲದಲ್ಲಿ ಯಶವಂತಪುರ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳು ಪ್ರಮುಖ ಕೇಂದ್ರಗಳು. ಭಾರತೀಯ ರೈಲ್ವೆಯು ಹಾಕಿಕೊಂಡಿರುವ ನಿಲ್ದಾಣದ ಪುನರಾಭಿವೃದ್ಧಿ ಕಾರ್ಯಕ್ರಮದ ಭಾಗವಾಗಿ ಯಶವಂತಪುರ ನಿಲ್ದಾಣವನ್ನು ₹367 ಕೋಟಿ ಹಾಗೂ ಕಂಟೋನ್ಮೆಂಟ್‌ ನಿಲ್ದಾಣವನ್ನು ₹486 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಪ್ರಯಾಣಿಕರ ಸೌಕರ್ಯ, ಅನುಕೂಲ, ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ಆರಾಮದಾಯಕವಾದ ಕಾಯುವ ಪ್ರದೇಶ, ಮಲ್ಟಿ-ಲೆವೆಲ್ ಪಾರ್ಕಿಂಗ್, ಮಕ್ಕಳಿಗಾಗಿ ಆಟದ ವಲಯ, ಸ್ಥಳೀಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಸ್ಥಳಾವಕಾಶಗಳ ಇರಲಿದೆ ಎಂದು ತಿಳಿಸಿದರು.

ಕಂಟೋನ್ಮೆಂಟ್‌ನ ಪಾರಂಪರಿಕ ಕಟ್ಟಡವನ್ನು ಸಂರಕ್ಷಿಸಬೇಕು. ಮೆಟ್ರೊ ರೈಲು ನಿಲ್ದಾಣದ ಸಂಪರ್ಕ ಸಮರ್ಪಕವಾಗಿದ್ದರೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಪಿ.ಸಿ. ಮೋಹನ್, ಶಾಸಕ  ರಿಜ್ವಾನ್ ಅರ್ಷದ್, ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಅರವಿಂದ್ ಶ್ರೀವಾಸ್ತವ, ವಿಭಾಗೀಯ ವ್ಯವಸ್ಥಾಪಕ ಯೋಗೇಶ್ ಮೋಹನ್, ಮುಖ್ಯ ಆಡಳಿತಾಧಿಕಾರಿ (ನಿರ್ಮಾಣ) ರಾಮಗೋಪಾಲ್, ಜಂಟಿ ನಿರ್ದೇಶಕ ಅನೀಶ್ ಹೆಗಡೆ, ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಜುನಾಥ ಕನಮಡಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT