ಬೆಂಗಳೂರು: ‘ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು’ ಎಂದು ಕೋರಿ ಶಾಸಕ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಈ ಕುರಿತು ಜಮೀರ್ ಅಹ್ಮದ್ ಸಲ್ಲಿಸಿರುವ ಮಧ್ಯಂತರ ಅರ್ಜಿಯ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಆದೇಶ ಕಾಯ್ದಿರಿಸಿರುವುದಾಗಿ ಶುಕ್ರವಾರ ಪ್ರಕಟಿಸಿತು.
ವಿಚಾರಣೆ ವೇಳೆ ಜಮೀರ್ ಪರ ವಕೀಲ ಇಸ್ಮಾಯಿಲ್ ಜಬೀವುಲ್ಲಾ ಅವರು, ‘ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವ ಮುನ್ನ ತನಿಖಾ ಸಂಸ್ಥೆ ಪ್ರಾಥಮಿಕ ವಿಚಾರಣೆ ನಡೆಸುವುದು ಕಡ್ಡಾಯ. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಎಸಿಬಿ ನೇರವಾಗಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.
‘ಅರ್ಜಿದಾರರು ಆದಾಯ ಮೀರಿ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇಡಿ) ವರದಿ ಸಲ್ಲಿಸಿತ್ತು. ಆ ವರದಿ ಆಧರಿಸಿ ಎಸಿಬಿ ಎಫ್‌ಐಆರ್ ದಾಖಲಿಸಿದೆ. ಇದು ಕಾನೂನು ಬಾಹಿರ ಕ್ರಮ. ಆದ್ದರಿಂದ, ಎಸಿಬಿ ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು’ ಎಂದು ಕೋರಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಲೋಕಾಯುಕ್ತ ಪರ ವಕೀಲ ಬಿ.ಬಿ.ಪಾಟೀಲ ಅವರು, ‘ಅಕ್ರಮವಾಗಿ ಆಸ್ತಿ ಗಳಿಸಿದ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವ ಮುನ್ನ ಪ್ರಾಥಮಿಕ ವಿಚಾರಣೆ ನಡೆಸುವ ಅಗತ್ಯವೇನೂ ಇಲ್ಲ. ಹಾಗಾಗಿ, ಎಸಿಬಿಯು ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕ್ರಮ ಕಾನೂನುಬದ್ಧವಾಗಿದೆ. ಆದ್ದರಿಂದ, ತಡೆ ನೀಡಬಾರದು’ ಎಂದು ಕೋರಿದರು.
ಪ್ರಕರಣವೇನು?: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಮನೆಯ ಮೇಲೆ ದಾಳಿ ನಡೆಸಿದ್ದ ಎಸಿಬಿ, 2022ರ ಮೇನಲ್ಲಿ ಎಫ್‌ಐಆರ್ ದಾಖಲಿಸಿತ್ತು. ‘ಜಮೀರ್, ಆದಾಯ ಮೀರಿ ₹ 87 ಕೋಟಿ ಹೆಚ್ಚುವರಿ ಆಸ್ತಿ ಗಳಿಸಿರುವ ಅಂಶ ದಾಳಿ ವೇಳೆ ಪತ್ತೆಯಾಗಿದೆ’ ಎಂದು ಆರೋಪಿಸಿತ್ತು.
ಈ ಕುರಿತಂತೆ ಜಮೀರ್ ಹೈಕೋರ್ಟ್ ಮೆಟ್ಟಿಲೇರಿದ್ದು, ಎಫ್‌ಐಆರ್ ರದ್ದುಪಡಿಸುವಂತೆ ಕೋರಿದ್ದಾರೆ. ಎಸಿಬಿ ರಚನೆಯನ್ನು ಹೈಕೋರ್ಟ್ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಎಸಿಬಿ ದಾಖಲಿಸಿದ ಪ್ರಕರಣಗಳನ್ನು ಈಗ ಲೋಕಾಯುಕ್ತ ಸಂಸ್ಥೆ ಮುಂದುವರಿಸುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.