ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ಪಂ- ತಾ.ಪಂ ಚುನಾವಣೆ |ಕ್ಷೇತ್ರ ಪುನರ್ ವಿಂಗಡಣೆ-ಮೀಸಲು ನಿಗದಿಗೆ 10 ವಾರಗಳ‌ ಗಡುವು

Published 29 ಜೂನ್ 2023, 17:11 IST
Last Updated 29 ಜೂನ್ 2023, 17:11 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕ್ಷೇತ್ರಗಳ ಪುನರ್‌ ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು ಹತ್ತು ವಾರಗಳಲ್ಲಿ ಪೂರ್ಣಗೊಳಿಸಿ ಅಧಿಸೂಚನೆ ಹೊರಡಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ‘ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆ ಮಾಡಲಾಗಿತ್ತು. ಆದರೆ, ಕೆಲವು ಆಕ್ಷೇಪಣೆಗಳು ಬಂದಿರುವ ಹಿನ್ನೆಲೆಯಲ್ಲಿ ರೀ-ಡೂ ಮಾಡಬೇಕಾಗಿದೆ. ನಂತರ ಕ್ಷೇತ್ರವಾರು ಮೀಸಲಾತಿ ನಿಗದಿಪಡಿಸಬೇಕಾಗುತ್ತದೆ. ಈ ಪ್ರಕ್ರಿಯೆ ಪೂರ್ಣಗೊಳಿಸಲು ಹತ್ತು ವಾರಗಳ ಕಾಲಾವಕಾಶ ಬೇಕು’ ಎಂದು ಕೋರಿದರು.

ಈ ಮನವಿಯನ್ನು ಮಾನ್ಯ ಮಾಡಿದ ನ್ಯಾಯಪೀಠವು, ‘ಪ್ರಕ್ರಿಯೆಯನ್ನು 10 ವಾರಗಳಲ್ಲಿ ಪೂರ್ಣಗೊಳಿಸಿ, ಅಧಿಸೂಚನೆ ಹೊರಡಿಸಬೇಕು. ನಂತರ ರಾಜ್ಯ ಚುನಾವಣಾ ಆಯೋಗ ಮುಂದಿನ ಪ್ರಕ್ರಿಯೆ ಕೈಗೊಳ್ಳಬೇಕು’ ಎಂದು ನಿರ್ದೇಶಿಸಿತು.

ಆದೇಶದ ಅನುಪಾಲನಾ ವರದಿಯನ್ನು ಮುಂದಿನ ವಿಚಾರಣೆ ವೇಳೆಗೆ ಕೋರ್ಟ್‌ಗೆ ಸಲ್ಲಿಸುವಂತೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಮೂರು ತಿಂಗಳ ಕಾಲ ಮುಂದೂಡಿತು.

ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಲು ಅನುವು ಮಾಡಿಕೊಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಹಾಗೂ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆಗೆ ಸೀಮಾ ನಿರ್ಣಯ ಆಯೋಗ ರಚಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಆಯೋಗ ಈ ಪಿಐಎಲ್ ಸಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT