ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌ ಜಿಲ್ಲೆಯಲ್ಲಿ ಶೇ 19ರಷ್ಟು ಬಾಲ್ಯವಿವಾಹ: ಶಶಿಧರ ಕೋಸಂಬೆ ಆತಂಕ

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಆತಂಕ
Published : 8 ಆಗಸ್ಟ್ 2024, 15:39 IST
Last Updated : 8 ಆಗಸ್ಟ್ 2024, 15:39 IST
ಫಾಲೋ ಮಾಡಿ
Comments

ಬೀದರ್‌: ಜಿಲ್ಲೆಯಲ್ಲಿ ಬಾಲ್ಯ ವಿವಾಹದ ಪ್ರಮಾಣವು ಶೇ 19ರಷ್ಟಿರುವುದು ಗಂಭೀರ ಸಂಗತಿ. ವಯಸ್ಸಿಗೆ ಮುನ್ನ ಮದುವೆಯಾದಲ್ಲಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ' ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಆತಂಕ ವ್ಯಕ್ತಪಡಿಸಿದರು.

ಇಲ್ಲಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ನಿರ್ದೇಶನಾಲಯ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ ಹಾಗೂ ಇನ್ನಿತರ ಇಲಾಖೆಗಳ ಸಹಯೋಗದಲ್ಲಿ ಗುರುವಾರ ನಡೆದ ಮಿಷನ್ ವಾತ್ಸಲ್ಯ ಮತ್ತು ರಾಜ್ಯ ಮಕ್ಕಳ ರಕ್ಷಣಾ ನೀತಿ ಮತ್ತಿತರ ಕಾಯ್ದೆಗಳ ಕುರಿತು ಸಹಭಾಗೀದಾರ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಬಾಲಕಿಯರು ಗರ್ಭಿಣಿಯಾದಲ್ಲಿ ಶಿಶುವಿನ ಬೆಳವಣಿಗೆ ಸರಿಯಾಗಿ ಆಗುವುದಿಲ್ಲ. ತಾಯಿ ಸಹ ರಕ್ತಹೀನತೆ ಮತ್ತಿತರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಜಿಲ್ಲೆಯನ್ನು ಮಕ್ಕಳ ಸ್ನೇಹಿ ಜಿಲ್ಲೆಯನ್ನಾಗಿ ಮಾಡಬೇಕು. ಬಾಲಕಾರ್ಮಿಕ, ಬಾಲ್ಯವಿವಾಹ ಸಂಪೂರ್ಣವಾಗಿ ತಡೆಗಟ್ಟಬೇಕು' ಎಂದು ಹೇಳಿದರು.

‘ಜಿಲ್ಲೆಯಲ್ಲಿ ಮಕ್ಕಳ ಸ್ಥಿತಿಗತಿ ಸಮಾಧಾನಕರವಾಗಿಲ್ಲ. 4,825 ಗರ್ಭಿಣಿ ಬಾಲಕಿಯರು ಕಂಡು ಬಂದಿರುವುದು ತೀವ್ರ ಕಳವಳಕಾರಿ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ ಅವರು, ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಮಟ್ಟದಲ್ ಸಮಿತಿಗಳು ಏನು ಮಾಡುತ್ತಿವೆ' ಎಂದು ಪ್ರಶ್ನಿಸಿದರು.

ಮಕ್ಕಳು ದೇಶದ ಸಂಪತ್ತಾಗಿದ್ದಾರೆ. ಹೀಗಾಗಿ ಮಕ್ಕಳ ಹಕ್ಕುಗಳ ರಕ್ಷಣೆಯ ವಿಷಯದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಎಚ್ಚರದಿಂದ ಕಾರ್ಯ ನಿರ್ವಹಿಸಬೇಕು' ಎಂದು ಎಚ್ಚರಿಕೆ ನೀಡಿದರು.

‘ಸುಸ್ಥಿರ ಅಭಿವೃದ್ಧಿಯನ್ನು ಗುರುತಿಸುವ 17 ಸೂಚ್ಯಂಕಗಳಲ್ಲಿ 9 ಸೂಚ್ಯಂಕಗಳು ಮಹಿಳೆ ಮತ್ತು ಮಕ್ಕಳಿಗಾಗಿ ಸಂಬಂಧಿಸಿವೆ. ಮಕ್ಕಳನ್ನು ಕೇಂದ್ರವಾಗಿರಿಸಿಕೊಳ್ಳದ ಅಭಿವೃದ್ದಿಯಿಂದ ಹೆಚ್ಚೇನು ಅನುಕೂಲ ಆಗುವುದಿಲ್ಲ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ' ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಮಟ್ಟದಲ್ಲಿರುವ ಸಮಿತಿಗಳು ನಿಯಮಿತವಾಗಿ ಸಭೆ ನಡೆಸಬೇಕು. ಮಕ್ಕಳು ತಮ್ಮ ಹಕ್ಕುಗಳಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಮಕ್ಕಳ ಹಕ್ಕುಗಳ ಉಲ್ಲಂಘನೆ ತಡೆಯಬೇಕು' ಎಂದು ಸೂಚಿಸಿದರು.

‘ಬಾಲಕಾರ್ಮಿಕ, ಬಾಲ್ಯವಿವಾಹ, ಮಧ್ಯದಲ್ಲಿ ಶಾಲೆ ತೊರೆಯುವುದು ಹೀಗೆ ಹಲವು ಕಾರಣಗಳಿಂದಾಗಿ ಮಕ್ಕಳು ಸಂಕಷ್ಟದಲ್ಲಿದ್ದಾರೆ. ಎಲ್ಲ ಇಲಾಖೆಯ ಅಧಿಕಾರಿಗಳು ಮಕ್ಕಳ ವಿಷಯದಲ್ಲಿ ಕಾಳಜಿ ವಹಿಸಬೇಕು. ಮಕ್ಕಳ ಬಾಲ್ಯವು ಸುರಕ್ಷಿತವಾಗುವುದನ್ನು ಖಾತರಿಪಡಿಸಬೇಕು. ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲ ಸೌಲಭ್ಯಗಳು ಸಿಗುವಂತೆ ಮಾಡಬೇಕು' ಎಂದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ‘ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಣ ಮತ್ತು ಆರೋಗ್ಯದ ಪಾತ್ರ ಹೆಚ್ಚಿದೆ. ಬಡತನದ ಕಾರಣಕ್ಕೆ ಮಕ್ಕಳನ್ನು ಬಾಲಕಾರ್ಮಿಕ ಪದ್ಧತಿಗೆ ದೂಡುವುದನ್ನು ಅಲ್ಲಲ್ಲಿ ಕಾಣುತ್ತೇವೆ. ಇದೊಂದು ಗಂಭೀರ ಸಂಗತಿ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಹಲವು ಕಾಯ್ದೆಗಳಿವೆ. ಸಂಬಂಧಿಸಿದ ಅಧಿಕಾರಿಗಳು ಈ ಕಾಯ್ದೆಗಳನ್ನು, ಮಕ್ಕಳಿಗಾಗಿ ಇರುವ ಕಾರ್ಯಕ್ರಮಗಳನ್ನು ಸರಿಯಾಗಿ ಜಾರಿಗೊಳಿಸಬೇಕು' ಎಂದು ತಿಳಿಸಿದರು.

'ಮಕ್ಕಳು ತಮ್ಮ ಹಕ್ಕುಗಳನ್ನು ಆನಂದದಿಂದ ಅನುಭವಿಸುವಂತಹ ವಾತಾವರಣ ನಿರ್ಮಿಸಿಕೊಡುವುದು ಎಲ್ಲರ ಕರ್ತವ್ಯ. ಹಕ್ಕುಗಳಿಗೆ ಧಕ್ಕೆಯಾದಲ್ಲಿ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತದೆ ಎಂದು ಎಚ್ಚರಿಸಿದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಜಿಯಾ ಬಳಬಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೂಪಾ, ಕೊಪ್ಪಳದ ಯೂನಿಸೆಫ್‌ ಪ್ರಾದೇಶಿಕ ಸಂಯೋಜಕ ಕೆ.ರಾಘವೇಂಧ್ರ ಭಟ್ ವಿಶೇಷ ಉಪನ್ಯಾಸ ನೀಡಿದರು. ಮಕ್ಕಳ ರಕ್ಷಣಾಧಿಕಾರಿ ಗೌರಿಶಂಕರ ಪರ್ತಾಪುರ, ಜಿಲ್ಲೆಯ ತಹಶೀಲ್ದಾರರು, ತಾಪಂ ಇಒ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಮುಂದಿನ ತಿಂಗಳಿಂದ ಎಲ್ಲ ತಾಲ್ಲೂಕುಗಳಿಗೆ ಭೇಟಿ ನೀಡಿ ಮಕ್ಕಳ ಹಕ್ಕುಗಳ ರಕ್ಷಣಾ ವ್ಯವಸ್ಥೆ ವಿವಿಧ ಸಮಿತಿಗಳ ರಚನೆ ಕುರಿತು ಪರಿಶೀಲನೆ ನಡೆಸಲಾಗುವುದು
-ಶಶಿಧರ ಕೋಸಂಬೆ ಸದಸ್ಯ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
ತಾಲ್ಲೂಕು ಮಟ್ಟದ ಮಕ್ಕಳು ಹಕ್ಕುಗಳ ರಕ್ಷಣಾ ಸಮಿತಿ ಸದಸ್ಯರು ನಿಯಮಿತವಾಗಿ ಸಭೆ ನಡೆಸಬೇಕು. ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ವರದಿ ಸಲ್ಲಿಸಬೇಕು
-ಶಿಲ್ಪಾ ಶರ್ಮಾ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT