ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮೋತ್ಸವಕ್ಕೆ ಬೀದರ್ ಜಿಲ್ಲೆಯಿಂದ 30 ಸಾವಿರ ಅಭಿಮಾನಿಗಳು

ದಾವಣಗೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮೃತ ಮಹೋತ್ಸವ
Last Updated 12 ಜುಲೈ 2022, 12:53 IST
ಅಕ್ಷರ ಗಾತ್ರ

ಬೀದರ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಪ್ರಯುಕ್ತ ದಾವಣಗೆರೆಯಲ್ಲಿ ಆಗಸ್ಟ್ 3 ರಂದು ಹಮ್ಮಿಕೊಂಡಿರುವ ಅಮೃತ ಮಹೋತ್ಸವ ಸಮಾರಂಭದಲ್ಲಿ ಬೀದರ್ ಜಿಲ್ಲೆಯಿಂದ 30 ಸಾವಿರ ಅಭಿಮಾನಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಜಿಲ್ಲಾ ಸಮಿತಿಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಹೇಳಿದರು.

ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಗಳಿಂದ ತಲಾ 5 ಸಾವಿರ ಜನ ಭಾಗವಹಿಸಲಿದ್ದಾರೆ ಎಂದು ನಗರದ ನಾವದಗೇರಿ ಸಮೀಪದ ವೈಬ್ ಹೋಟೆಲ್‍ನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.

ಸಿದ್ದರಾಮಯ್ಯ ಅವರು ಐದು ದಶಕಗಳ ಅವಧಿಯಲ್ಲಿ ನಾಡಿಗೆ ನೀಡಿದ ಕೊಡುಗೆ ಅಪಾರವಾಗಿದೆ. ಅವರ ಅಮೃತ ಮಹೋತ್ಸವವನ್ನು ಅವಿಸ್ಮರಣೀಯವಾಗಿಸಲು ನಿರ್ಧರಿಸಲಾಗಿದೆ ಎಂದರು.

ಅಮೃತ ಮಹೋತ್ಸವಕ್ಕೆ ಬೀದರ್‌ನಿಂದ ಅಧಿಕ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಕರೆದೊಯ್ಯಲು ತೀರ್ಮಾನಿಸಲಾಗಿದೆ. 75ನೇ ಜನ್ಮದಿನದ ನಿಮಿತ್ತ ರಚಿಸಲಾದ 75 ಜನರನ್ನು ಒಳಗೊಂಡ ಜಿಲ್ಲಾ ಸಮಿತಿಯು ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಅಭಿಮಾನಿಗಳ ಸಭೆಗಳನ್ನು ನಡೆಸಲಿದೆ ಎಂದು ಸಮಿತಿಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿರಾದಾರ ಹೇಳಿದರು.

ಜಿಲ್ಲಾ ಸಮಿತಿಗೆ ಶಾಸಕರಾದ ಈಶ್ವರ ಖಂಡ್ರೆ, ರಾಜಶೇಖರ ಪಾಟೀಲ, ರಹೀಂಖಾನ್, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ ಹಾಗೂ ಮಾಜಿ ಶಾಸಕ ಅಶೋಕ ಖೇಣಿ ಅವರನ್ನು ಮಹಾ ಪೋಷಕರನ್ನಾಗಿ ಆಯ್ಕೆ ಮಾಡಲಾಗಿದೆ. ಮಾಜಿ ಶಾಸಕರು, ವಿಧಾನ ಪರಿಷತ್ ಮಾಜಿ ಸದಸ್ಯರು, ಸಮಾಜದ ಚಿಂತಕರು, ಗಣ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಮಿತಿಯಲ್ಲಿ ಇದ್ದಾರೆ. ಈಗಾಗಲೇ ಸಿದ್ಧತಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಾದ್ಯಂತ ಭಿತ್ತಿ ಪತ್ರ, ಪೋಸ್ಟರ್ ಅಳವಡಿಕೆ, ಆಟೊ ಪ್ರಚಾರ ಮೂಲಕ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮದ ಜನಜಾಗೃತಿ ಮೂಡಿಸಲಾಗುವುದು ಎಂದು ಸಮಿತಿಯ ಕಾರ್ಯಾಧ್ಯಕ್ಷ ಬಾಬುರಾವ್ ಮಲ್ಕಾಪುರ ತಿಳಿಸಿದರು.

ಡಿ. ದೇವರಾಜ ಅರಸು ಅವರ ನಂತರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಸೇರಿದಂತೆ ಸರ್ವರ ಏಳಿಗೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿದ ಶ್ರೇಯ ಸಿದ್ದರಾಮಯ್ಯ ಅವರಿಗೆ ಸಲುತ್ತದೆ. ಹೀಗಾಗಿ ಸರ್ವ ಸಮುದಾಯದವರು ಅವರ ಅಮೃತ ಮಹೋತ್ಸವದಲ್ಲಿ ಪಾಲ್ಗೊಳ್ಳಬೇಕು ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ ಬೆಲ್ದಾರ್ ಹಾಗೂ ಬಾಬುರಾವ್ ಪಾಸ್ವಾನ್ ಮನವಿ ಮಾಡಿದರು.

ಸಮಿತಿಯ ಗೌರವಾಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್, ಸಂಚಾಲಕ ಬಸವರಾಜ ಮಾಳಗೆ, ಸಹ ಸಂಚಾಲಕ ಅಶೋಕ ಮಾಳಗೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT