ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ ತಾಲೂಕಿನಲ್ಲಿ ನಿತ್ಯ 5 ಸಾವಿರ ಲಸಿಕಾಕರಣ: ಜಿಲ್ಲಾಧಿಕಾರಿ ರಾಮಚಂದ್ರನ್ ಆರ್

ಅಧಿಕಾರಿಗಳಿಗೆ ಸೂಚನೆ
Last Updated 17 ಆಗಸ್ಟ್ 2021, 15:17 IST
ಅಕ್ಷರ ಗಾತ್ರ

ಬೀದರ್‌: ‘ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಕೋವಿಡ್ ಲಸಿಕಾಕರಣ ಮೇಳ ನಡೆಯಬೇಕು. ಪ್ರತಿ ತಾಲೂಕಿನಲ್ಲಿ ನಿತ್ಯ 5 ಸಾವಿರ ಲಸಿಕೆ ಕೊಡಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಮೇಳದಲ್ಲಿ ನೋಂದಣಿ ಸರಿಯಾಗಿ ನಡೆಯಬೇಕು. ಎರಡು ಗಂಟೆಗೊಮ್ಮೆ ಕೋವಿಡ್ ರೂಮ್ ಗೆ ಲಸಿಕಾಕರಣ ಮಾಹಿತಿ ಕಳುಹಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಶೇ 75 ಜನರಿಗೆ ಕೋವಿಡ್ ಲಸಿಕೆ ಕೊಡಲಾಗಿದೆ. ಪ್ರತಿಯೊಬ್ಬರಿಗೂ ಕೋವಿಡ್‌ ಲಸಿಕೆ ಕೊಡಬೇಕಿದೆ. ಯಾರೊಬ್ಬರೂ ಕೋವಿಡ್‌ನಿಂದ ಜೀವ ಕಳೆದುಕೊಳ್ಳಬಾರದು. ಇದಕ್ಕೆ ಲಸಿಕೆ ನೀಡಿಕೆಯೊಂದೇ ಪರಿಹಾರ ಎನ್ನುವುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಎಷ್ಟೇ ಒತ್ತಡವಿದ್ದರೂ ಸಂಬಂಧಿಸಿದ ಅಧಿಕಾರಿಗಳು ಪ್ರತಿ ದಿನ ಒಂದಿಷ್ಟು ಸಮಯವನ್ನು ಲಸಿಕಾಕರಣ ಕಾರ್ಯಕ್ಕೆ ಮೀಸಲಿಡಬೇಕು ಎಂದು ಸೂಚಿಸಿದರು.

ಪ್ರತಿ ದಿನ 5 ಸಾವಿರ ಜನರಿಗೆ ಕೋವಿಡ್ ಲಸಿಕೆ ನೀಡಲು ಕ್ರಮ ವಹಿಸಬೇಕು. ನಿಗದಿಪಡಿಸಿದ ಕೋವಿಡ್ ಲಸಿಕಾಕರಣದ ಗುರಿ ತಲುಪಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಕೇಂದ್ರದಿಂದ ತಾಲ್ಲೂಕುಗಳಿಗೆ ಕೋವಿಡ್ ಲಸಿಕೆ ಕಳಿಸಿದ ಬಳಿಕ ಪೋರ್ಟಲ್‌ನಲ್ಲಿ ದಾಖಲು ಮಾಡಬೇಕು. ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ, ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಮುತುವರ್ಜಿ ವಹಿಸಿ ಮಾಹಿತಿ ಸಕಾಲಕ್ಕೆ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಆಗುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಬಾಕಿ ಉಳಿದ ಕಾಲೇಜುಗಳಲ್ಲಿ ಲೈನ್ ಲೀಸ್ಟ್ ಪ್ರಕಾರ ಪೂರ್ಣ ಪ್ರಮಾಣದಲ್ಲಿ ಲಸಿಕೆ ಕೊಡಿಸಲು ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.

ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಎರಡನೇ ಡೋಸ್ ಪೂರ್ಣಗೊಳಿಸಲು ಒತ್ತು ಕೊಡಬೇಕು. ಮುಂಚೂಣಿ ಕಾರ್ಯಕರ್ತರಿಗೆ ಶೇ 100ರಷ್ಟು ಮೊದಲನೇ ಡೋಸ್ ಕೊಡಿಸಲು ಒತ್ತು ಕೊಡಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಮಾತನಾಡಿ, ಪಂಚಾಯತಿ ಮಟ್ಟದಲ್ಲಿ ಕೂಡ ಕೋವಿಡ್ ಲಸಿಕಾಕರಣ ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳಲು ಕ್ರಮ ವಹಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಪ್ರಭಾರಿ ಸಹಾಯಕ ಆಯುಕ್ತ ಮಹ್ಮದ್ ಶಕೀಲ್, ತಹಸೀಲ್ದಾರರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ.ರೆಡ್ಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕೃಷ್ಣಾರೆಡ್ಡಿ, ಆರ್‌ಸಿಎಚ್ ಅಧಿಕಾರಿ ಡಾ.ರಾಜಶೇಖರ ಪಾಟೀಲ ಇದ್ದರು.

ಬ್ಲಾಕ್ ಫಂಗಸ್ ಸೋಂಕಿಗೆ ಉಚಿತ ಚಿಕಿತ್ಸೆ

ಬೀದರ್‌: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶದಂತೆ ಬ್ಲಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಗುಣಮುಖವಾಗಿ ತೆರಳುವವರಿಗೆ ಅನುಪಾಲನಾ ಅವಧಿಯಲ್ಲಿ ಸಹ ಉಚಿತ ಚಿಕಿತ್ಸೆ ಕೊಡಲಾಗುವುದುಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ತಿಳಿಸಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ ಎಂದ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT