ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

68 ಸಂಚಾರಿ ಪಶು ಚಿಕಿತ್ಸಾ ವಾಹನಗಳ ಉದ್ಘಾಟನೆ 31ಕ್ಕೆ: ಸಚಿವ ಪ್ರಭು ಚವಾಣ್

Last Updated 27 ಜನವರಿ 2023, 16:03 IST
ಅಕ್ಷರ ಗಾತ್ರ

ಬೀದರ್: ಕಲ್ಯಾಣ ಕರ್ನಾಟಕ ಭಾಗದಲ್ಲಿ ಜಾನುವಾರುಗಳ ರಕ್ಷಣೆಗಾಗಿ 68 ಹೊಸ ಸಂಚಾರಿ ಪಶು ಚಿಕಿತ್ಸಾ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮ ಜನವರಿ 31ರ ಬೆಳಿಗ್ಗೆ 11 ಗಂಟೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವಾಣ್‌ ತಿಳಿಸಿದ್ದಾರೆ.

2022-23ನೇ ಸಾಲಿನ ಕೇಂದ್ರ ಸರ್ಕಾರದ ಅನುದಾನದಲ್ಲಿ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಈ ಸಂಚಾರಿ ಆಂಬ್ಯುಲೆನ್ಸ್ ಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಮೊದಲ ಹಂತದಲ್ಲಿ ಪಶು ಸಂಗೋಪನೆ ಇಲಾಖೆ ಸಚಿವನಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೂಲಕ 15 ಪಶು ಚಿಕಿತ್ಸಾ ವಾಹನಗಳನ್ನು ಪಶು ಸಂಜೀವಿನಿ ಹೆಸರಲ್ಲಿ ಲೋಕಾರ್ಪಣೆ ಮಾಡಲಾಗಿತ್ತು. ಆಯ್ದ ಜಿಲ್ಲಾ ಕೇಂದ್ರಗಳಲ್ಲಿ ಇವುಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಇದನ್ನು ಗಮನಿಸಿದ ಕೇಂದ್ರ ಸರ್ಕಾರವು ಪಶು ಸಂಜೀವಿನಿ ಕಾರ್ಯಕ್ರಮವನ್ನು ಪ್ರಶಂಸಿಸಿ ರಾಜ್ಯಕ್ಕೆ 275 ಸಂಚಾರಿ ಪಶು ಚಿಕಿತ್ಸಾ ವಾಹನಗಳನ್ನು ಒದಗಿಸಿದೆ. ಇದರ ಪೈಕಿ 70 ವಾಹನಗಳನ್ನು ಬೆಂಗಳೂರು ವಿಭಾಗಕ್ಕೆ ಮತ್ತು 82 ವಾಹನಗಳನ್ನು ಬೆಳಗಾವಿ ವಿಭಾಗಕ್ಕೆ ನೀಡಲಾಗಿದೆ. ಇದೀಗ ಕಲ್ಯಾಣ ಕರ್ನಾಟಕ ವಿಭಾಗಗಕ್ಕೆ 68 ವಾಹನಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

ಸಂಚಾರಿ ಪಶು ಚಿಕಿತ್ಸಾ ವಾಹನಗಳ ನಿಗಾ ವಹಿಸಲು ರಾಜ್ಯದಲ್ಲಿಯೇ ಮೊದಲ ಬಾರಿಗೆ ಜಾನುವಾರುಗಳಿಗಾಗಿ ಕಾಲ್ ಸೆಂಟರ್ ತೆರೆಯಲಾಗಿದೆ. ಜಾನುವಾರು ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದಲ್ಲಿ ರೈತರು ಟ್ರೋಲ್ ಫ್ರೀ ಸಂಖ್ಯೆ 1962 ಅಥವಾ 8277100200ಗೆ ಕರೆ ಮಾಡಿದಲ್ಲಿ ತಕ್ಷಣ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿ ಚಿಕಿತ್ಸಾ ವಾಹನದಲ್ಲಿ ಪಶು ವೈದ್ಯರು, ಪಶು ವೈದ್ಯ ಸಹಾಯಕ ಇರುತ್ತಾರೆ ಎಂದು ತಿಳಿಸಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನಕ್ಕೆ ತಂದ ನಂತರ ಹಸುಗಳು ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುವುದು ತಗ್ಗಿದೆ. ರಾಜ್ಯದಲ್ಲಿ ಪ್ರಾಣಿ ಕಲ್ಯಾಣ ಮಂಡಳಿ ಸ್ಥಾಪನೆ, ರಾಷ್ಟ್ರದ ಮೊದಲ ಪ್ರಾಣಿ ಕಲ್ಯಾಣ ಸಹಾಯವಾಣಿ ಕೇಂದ್ರ(ವಾರ್ ರೂಮ್) ಸ್ಥಾಪನೆ, ಜಿಲ್ಲೆಗೊಂದು ಸರ್ಕಾರಿ ಗೋಶಾಲೆ ನಿರ್ಮಾಣ, ಆತ್ಮ ನಿರ್ಭರ ಗೋಶಾಲೆ, ಪುಣ್ಯಕೋಟಿ ದತ್ತು ಯೋಜನೆ, ಪಶು ಸಂಜೀವಿನಿ ಆಂಬುಲೆನ್ಸ್ ಲೋಕಾರ್ಪಣೆ, ಪಶುಗಳ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲು ಲಸಿಕಾ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪಶು ಸಂಜೀವಿನಿ ಯೋಜನೆಯ ಯಶಸ್ಸಿನ ನಂತರ ರಾಜ್ಯಕ್ಕೆ 275 ಪಶು ಚಿಕಿತ್ಸಾ ವಾಹನಗಳನ್ನು ನೀಡಿದ ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಕೇಂದ್ರ ಪಶು ಸಂಗೋಪನೆ ಸಚಿವ ಪುರುಷೋತ್ತಮ ರುಪಾಲಾ ಅವರು ಮತ್ತು ಜಾನುವಾರುಗಳ ಹಿತರಕ್ಷಣೆಗೆ ಮತ್ತು ಇಲಾಖೆಯ ಬೆಳವಣಿಗೆಗೆ ಎಲ್ಲ ರೀತಿಯ ಸಹಕಾರ ನೀಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕೃತಜ್ಞತೆಗಳು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT