ಮಂಗಳವಾರ, ಮಾರ್ಚ್ 28, 2023
30 °C
ಸರಿದಾರಿಗೆ ತರಲು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಆಗ್ರಹ

ಪಾತಾಳಕ್ಕೆ ಕುಸಿದ ಶಿಕ್ಷಣ ವ್ಯವಸ್ಥೆ: ಬಸವರಾಜ ಜಾಬಶೆಟ್ಟಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಆಡಳಿತಾರೂಢ ಬಿಜೆಪಿ ಆಂತರಿಕ ಯುದ್ಧದಲ್ಲಿ ಮುಳುಗಿರುವ ಕಾರಣ ರಾಜ್ಯದಲ್ಲಿ ಇಡೀ ಶಿಕ್ಷಣ ವ್ಯವಸ್ಥೆ ಪಾತಾಳಕ್ಕೆ ಕುಸಿದಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಆರೋಪಿಸಿದ್ದಾರೆ.

ಕೊರೊನಾ ಸೋಂಕಿನ ಮಧ್ಯೆ ಪರೀಕ್ಷೆ ಎದುರಿಸುವಂತೆ ಮಕ್ಕಳ ಮೇಲೆ ಒತ್ತಡ ಹೇರುವುದರಿಂದ ಹಿಡಿದು ಮತ್ತೆ ಶಾಲೆ ಆರಂಭಿಸಲು ಯಾವುದೇ ಯೋಜನೆಗಳು ಇಲ್ಲದಿರುವುದರಿಂದ ಅಸಂಖ್ಯಾತ ಮಕ್ಕಳ ಭವಿಷ್ಯ ಅಂಧಕಾರದಲ್ಲಿ ಮುಳುಗಿದೆ. ಸರ್ಕಾರಿ ಶಾಲಾ ಮಕ್ಕಳ ಪರಿಸ್ಥಿತಿ ಹೀನಾಯವಾಗಿದ್ದು, ಬಡವರ ಮಕ್ಕಳಿಗೆ ಶಿಕ್ಷಣ ಒದಗಿಸಲು ಸರ್ಕಾರದ ಬಳಿ ಯಾವುದೇ ಯೋಜನೆ ಇಲ್ಲವಾಗಿದೆ ಎಂದು ಹೇಳಿಕೆಯಲ್ಲಿ ಟೀಕಿಸಿದ್ದಾರೆ.

ಕೊರೊನಾದಿಂದಾಗಿ ಶಿಕ್ಷಣ ವ್ಯವಸ್ಥೆ ಅಲ್ಲೋಲ, ಕಲ್ಲೋಲವಾಗಿದೆ. ಖಾಸಗಿ ಶಾಲೆಗಳು ಸೇರಿದಂತೆ ಉಳ್ಳವರ ಮಕ್ಕಳು ಆನ್‍ಲೈನ್ ಶಿಕ್ಷಣ, ತಾಂತ್ರಿಕ ಜ್ಞಾನದ ಮೂಲಕ ಶಿಕ್ಷಣ ಪಡೆಯುವತ್ತ ಹೆಜ್ಜೆ ಹಾಕಿದ್ದಾರೆ. ಗ್ರಾಮೀಣ ಭಾಗದ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಶಿಕ್ಷಣ ಒದಗಿಸಲು ಸರ್ಕಾರ ಈವರೆಗೆ ಯೋಜನೆ ರೂಪಿಸಿಲ್ಲ ಎಂದು ಆಪಾದಿಸಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಬೇಜವಾಬ್ದಾರಿಯಿಂದಾಗಿ ಕೇವಲ ಮಕ್ಕಳಷ್ಟೇ ಅಲ್ಲದೆ, ಶಾಲಾ ಶಿಕ್ಷಕರು, ಶಾಲಾ ಆಡಳಿತ ವರ್ಗದವರು, ಕಾರ್ಮಿಕರು ಹಾಗೂ ಪೋಷಕರೂ ಸಾಕಷ್ಟು ಒತ್ತಡಕ್ಕೆ ಒಳಗಾಗಿದ್ದಾರೆ. ಅಸಂಖ್ಯಾತ ಶಿಕ್ಷಕರ ಬದುಕು ಕೆಲಸವಿಲ್ಲದೆ ಮೂರಾಬಟ್ಟೆಯಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಹಳ್ಳ ಹಿಡಿಸಿರುವ ಹಾಗೂ ಸಂಕಷ್ಟದಲ್ಲಿ ಇರುವ ಶಿಕ್ಷಕರ ಸಹಾಯಕ್ಕೆ ಯೋಜನೆ ರೂಪಿಸುವಲ್ಲಿ ವಿಫಲವಾಗಿರುವ ಸರ್ಕಾರದ ಬೇಜವಾಬ್ದಾರಿಯನ್ನು ಖಂಡಿಸಲಾಗುವುದು ಎಂದು ತಿಳಿಸಿದ್ದಾರೆ.

ಮಧ್ಯಾಹ್ನದ ಬಿಸಿಯೂಟ ವಿದ್ಯಾರ್ಥಿಗಳ ಮನೆಗೆ ತಲುಪಿಸಿ, ಅವರ ಪೌಷ್ಟಿಕತೆ ಕಾಪಾಡಬೇಕು. ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ ನಡೆಸಿ, ಪೋಷಕರ ಮನವೊಲಿಸಿ ಅವರನ್ನು ಮರಳಿ ಶಾಲೆಗೆ ಕರೆ ತರುವ ಯೋಜನೆ ರೂಪಿಸಬೇಕು. ಶಿಕ್ಷಣ ಕ್ಷೇತ್ರದಲ್ಲಿ ನೇರವಾಗಿ ಮತ್ತು ಪರೋಕ್ಷವಾಗಿ ಉದ್ಯೋಗದಲ್ಲಿ ಇರುವವರಿಗೆ ಆರ್ಥಿಕ ಪರಿಹಾರ ಪ್ಯಾಕೇಜ್ ಒದಗಿಸಬೇಕು. ಕೊರೊನಾ ವಿರುದ್ಧ ಹೋರಾಟದಲ್ಲಿ ಪ್ರಾಣ ಕಳೆದುಕೊಂಡ ಶಿಕ್ಷಕರ ಕುಟುಂಬಗಳಿಗೆ ಪರಿಹಾರ ಕೊಡಬೇಕು. ಬಡ್ಡಿ ರಹಿತ ಸಾಲ ನೀಡುವ ಮೂಲಕ ಶಾಲೆಗಳ ಆರ್ಥಿಕ ಸಾಮರ್ಥ್ಯ ವೃದ್ಧಿಸುವತ್ತ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಖಾಸಗಿ ಶಾಲೆಗಳಿಗೆ ತೆರಿಗೆಯಲ್ಲಿ ವಿನಾಯಿತಿ ನೀಡಬೇಕು. ಈ ಮೂಲಕ ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಶಾಲಾ ಶುಲ್ಕ ಕಡಿಮೆ ಮಾಡುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಒತ್ತಡ ಹೇರಬೇಕು. ಆದ್ಯತೆ ಮೇರೆಗೆ ತಂತ್ರಜ್ಞಾನ ಬಳಸಿಕೊಳ್ಳುವ ಅಂತರ ಕಡಿಮೆಗೊಳಿಸಬೇಕು. ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಮಾರ್ಗಸೂಚಿಗಳನ್ನು ಹೊರಡಿಸಬೇಕು. ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.