ಗುರುವಾರ , ನವೆಂಬರ್ 26, 2020
22 °C
ಮಾಧ್ಯಮಗೋಷ್ಠಿಯಲ್ಲಿ ಶಾಸಕ ಬಂಡೆಪ್ಪ ಕಾಶೆಂಪೂರ್ ವಾಗ್ದಾಳಿ

ರೈತರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ರಾಜ್ಯದ ಬಿಜೆಪಿ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಬೀದರ್ ದಕ್ಷಿಣ ಶಾಸಕ ಬಂಡೆಪ್ಪ ಕಾಶೆಂಪೂರ್ ತೀವ್ರ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿಯಿಂದ ಕಬ್ಬು, ತೊಗರಿ ಸೇರಿದಂತೆ ಅಪಾರ ಬೆಳೆ ನಷ್ಟವಾಗಿದೆ. ರೈತರು ತೊಂದರೆಯಲ್ಲಿದ್ದಾರೆ. ಆದರೂ, ಸರ್ಕಾರ ಈವರೆಗೆ ಯಾವುದೇ ಪರಿಹಾರ ಒದಗಿಸಿಲ್ಲ ಎಂದು ನಗರದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಟೀಕಿಸಿದರು.

ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ರೈತರು ಪ್ರಕೃತಿ ವಿಕೋಪದಿಂದ ಹೈರಾಣಾಗಿರಲಿಲ್ಲ. ಆದರೆ, ರೈತರ ಮೇಲಿನ ಸಾಲದ ಒತ್ತಡ ಕಡಿಮೆ ಮಾಡಲು ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ರೈತರು ಸಹಕಾರ ಬ್ಯಾಂಕ್‍ಗಳಿಂದ ಪಡೆದ ₹1 ಲಕ್ಷ ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳ ₹2 ಲಕ್ಷದವರೆಗಿನ ಸಾಲ ಮನ್ನಾ ಮಾಡಿದ್ದರು ಎಂದು ಸ್ಮರಿಸಿದರು.

ಅಂದಿನ ಸರ್ಕಾರ ರೈತರ ನೆರವಿಗಾಗಿ ₹22 ಸಾವಿರ ಕೋಟಿ ಸಾಲ ಮನ್ನಾದ ದಿಟ್ಟ ನಿರ್ಧಾರ ಕೈಗೊಂಡಿತು. ಅತಿವೃಷ್ಟಿಯಿಂದ ಆಗಿರುವ ಬೆಳೆ ಹಾನಿಯ ವೈಮಾನಿಕ ಸಮೀಕ್ಷೆ ನಡೆಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎನ್‍ಡಿಆರ್‌ಎಫ್ ತಂಡ ಪರಿಶೀಲನೆ ನಡೆಸಿದ ನಂತರ ಪರಿಹಾರದ ಕುರಿತು ನಿರ್ಧರಿಸಲಾಗುವುದು ಎಂದು ಹೇಳಿರುವುದು ಸರಿಯಲ್ಲ. ರೈತರ ಹಿತ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜೆಡಿಎಸ್ ಹಾಗೂ ಪುರ್ಲೆ ಅವರ ಕೊಡುಗೆ ಬಹಳ ಇದೆ. ರಾಜ್ಯ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಮತ ಕ್ಷೇತ್ರದ ಚುನಾವಣೆಯಲ್ಲಿ ಶಿಕ್ಷಕರು ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಬೇಕು ಎಂದು ಮನವಿ ಮಾಡಿದರು.

ಭ್ರಷ್ಟಾಚಾರ ತಡೆಗೆ ಮೆರಿಟ್, ರೋಸ್ಟರ್ ಹಾಗೂ ಕೌನ್ಸೆಲಿಂಗ್ ಮೂಲಕ ಶಿಕ್ಷಕರ ನೇರ ನೇಮಕಾತಿ, ಕೌನ್ಸೆಲಿಂಗ್ ಮೂಲಕ ವರ್ಗಾವಣೆ, ಅತಿಹೆಚ್ಚು ಶಿಕ್ಷಕ ಅಭ್ಯರ್ಥಿಗಳಿಗೆ ಉದ್ಯೋಗ, ಹೊಸ ವೈದ್ಯಕೀಯ, ಎಂಜಿನಿಯರಿಂಗ್, ಪ್ರಥಮ ದರ್ಜೆ, ಪದವಿ ಕಾಲೇಜು, ಡಿಪ್ಲೊಮಾ, ಐಟಿಐ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಅಲ್ಪಸಂಖ್ಯಾತರ ಶಾಲೆಗಳು, ಶಿಕ್ಷಣ ಸಂಸ್ಥೆಗಳಿಗೆ ಅನುದಾನ ಅವಧಿ ವಿಸ್ತರಣೆ, ಪ್ರೌಢಶಾಲೆ, ಅನುದಾನಿತ ಶಾಲೆಗಳಿಗೂ ಬಿಸಿಯೂಟ ವಿಸ್ತರಣೆ ಜನತಾ ಪಕ್ಷ, ಜನತಾ ದಳ ಹಾಗೂ ಜಾತ್ಯತೀತ ಜನತಾ ದಳ ಸರ್ಕಾರಗಳ ಕೊಡುಗೆಯಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ತಿಳಿಸಿದರು.

ತಿಮ್ಮಯ್ಯ ಪುರ್ಲೆ ವೇತನ ಬಡ್ತಿ ಕೊಡಿಸುವುದು ಸೇರಿದಂತೆ ಶಿಕ್ಷಕರ ಅನೇಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಶಿಕ್ಷಕರು ಅವರನ್ನು ಆಶೀರ್ವದಿಸಬೇಕು ಎಂದು ಕೋರಿದರು.

ನಾನು ಶೇ 70ರಷ್ಟು ಕೆಲಸ ಮಾಡಿ ಮತ ಕೇಳುತ್ತಿದ್ದೇನೆ. ವಿಧಾನಸಭೆಯಲ್ಲಿ ಶಿಕ್ಷಕರ ಪರವಾಗಿ ಧ್ವನಿ ಎತ್ತಲು ತಮ್ಮನ್ನು ಬೆಂಬಲಿಸಬೇಕು ಎಂದು ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಜೆಡಿಎಸ್
ಅಭ್ಯರ್ಥಿ ತಿಮ್ಮಯ್ಯ ಫುರ್ಲೆ ಮನವಿ ಮಾಡಿದರು.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ, ಪ್ರಧಾನ ಕಾರ್ಯದರ್ಶಿ ಅಶೋಕ ಕೋಡಗೆ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಬಸವರಾಜ ಪಾಟೀಲ, ಮುಖಂಡರಾದ ನಸೀಮುದ್ದೀನ್ ಪಟೇಲ್, ಅಭಿ ಕಾಳೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.