ಮಂಗಳವಾರ, ಆಗಸ್ಟ್ 16, 2022
27 °C
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ

ಉನ್ನತ ತನಿಖೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಅಧಿಕಾರಿಗಳ ಸಹಯೋಗದೊಂದಿಗೆ ಆಹಾರ ಪೂರೈಕೆ ಟೆಂಡರ್‍ದಾರರಿಂದ ಇಲಾಖೆಯಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.

ವಸತಿ ನಿಲಯಗಳಿಗೆ ಪೂರೈಸುವ ಪ್ರತಿ ಕ್ವಿಂಟಲ್ ಅಕ್ಕಿಗೆ ರೂ. 200, ಗೋಧಿಗೆ ರೂ. 150 ಹಾಗೂ ಸಿಲಿಂಡರ್‍ಗೆ ರೂ. 400 ಅಧಿಕ ಬೆಲೆ ಪಾವತಿಸಲಾಗಿದೆ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನದ ಮೆಟ್ರಿಕ್ ಪೂರ್ವ ಹಾಗೂ ನಂತರದ ಒಟ್ಟು 77 ವಸತಿ ನಿಲಯಗಳು ಇವೆ. ಸರ್ಕಾರ ಪ್ರತಿ ವಿದ್ಯಾರ್ಥಿಗೆ ಮಾಸಿಕ ರೂ. 1,500 ಖರ್ಚು ಮಾಡುತ್ತಿದೆ. ಆದರೆ, ವಿದ್ಯಾರ್ಥಿಗಳಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸುತ್ತಿಲ್ಲ ಎಂದು ಆಪಾದಿಸಿದರು.

ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಕಲ್ಪಿಸುತ್ತಿಲ್ಲ. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕೋಣೆಗಳು, ಸಮರ್ಪಕ ಶೌಚಾಲಯ ಸೇರಿದಂತೆ ಸರಿಯಾದ ವ್ಯವಸ್ಥೆಗಳು ಇಲ್ಲ ಎಂದು ಹೇಳಿದರು.

ಇಲಾಖೆಯಲ್ಲಿ ಹತ್ತು ವರ್ಷಗಳಿಂದ ನಡೆದಿದೆ ಎನ್ನಲಾದ ಅವ್ಯವಹಾರ ತನಿಖೆ ನಡೆಸಬೇಕು. ಭ್ರಷ್ಟಾಚಾರದಲ್ಲಿ ತೊಡಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ದ ಜಾಡರ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಅಮರ ಸುಲ್ತಾನಪುರೆ, ನಗರ ಕಾರ್ಯದರ್ಶಿ ವಿಕಾಸ ಚೋರಮಲ್ಲೆ, ಅರವಿಂದ ಸುಂದಾಳಕರ್, ಅಶೋಕ ಶೆಂಬೆಳ್ಳಿ, ಅನಿಲ್ ಮೇತ್ರೆ, ಅಂಬಾದಾಸ ನೇಳಗೆ, ಉಮೇಶ ತೆಲಂಗ್, ವಿಶಾಲ ಮಡಿವಾಳ, ಚಂದು ಬಿರಾದಾರ, ಲಿಂಗರಾಜ ಬಿರಾದಾರ, ಮಹೇಶ ಪಾಟೀಲ, ವೀರೇಶ ಹಡಪದ, ಚಂದು ಜಾಡರ್, ಪ್ರದೀಪ ರೆಡ್ಡಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.