ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಧಕರು ಜಿಲ್ಲೆಯ ವಿದ್ಯಾರ್ಥಿಗಳಿಗೆ ಮಾದರಿ

ಎಸ್ಸೆಸ್ಸೆಲ್ಸಿ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹೇಳಿಕೆ
Last Updated 24 ಮೇ 2022, 14:26 IST
ಅಕ್ಷರ ಗಾತ್ರ

ಬೀದರ್: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಮೋಘ ಸಾಧನೆಗೈದ ಜಿಲ್ಲೆಯ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಜಿಲ್ಲಾ ಆಡಳಿತ ವತಿಯಿಂದ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಒಬ್ಬರು ವಿದ್ಯಾರ್ಥಿನಿ 625ಕ್ಕೆ 625 ಹಾಗೂ ಆರು ವಿದ್ಯಾರ್ಥಿಗಳು 624 ಅಂಕ ಗಳಿಸಿರುವುದು ಜಿಲ್ಲಾ ಆಡಳಿತಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದರು.

ಪ್ರಸ್ತುತ ಸ್ಪರ್ಧಾತ್ಮಕ ಯುಗ ಇರುವ ಕಾರಣ ಕಲಿಕೆ ನಿರಂತರ ಮುಂದುವರಿಸಬೇಕು. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯಲ್ಲೂ ಸಾಧನೆಗೈಯಲು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಬಡ ವಿದ್ಯಾರ್ಥಿಗಳು ಸರ್ಕಾರದ ವಿವಿಧ ಶೈಕ್ಷಣಿಕ ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರಬಾಬು ಮಾತನಾಡಿ, ಕಠಿಣ ಪರಿಶ್ರಮದಿಂದ ಜೀವನದಲ್ಲಿ ಸಾಧನೆ ಸಾಧ್ಯವಿದೆ. ಸಾಧನೆಯು ಕುಟುಂಬದ ಚಿತ್ರಣವನ್ನೇ ಬದಲಿಸುತ್ತದೆ ಎಂದು ನುಡಿದರು.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟಗಳಾಗಿವೆ. ಈ ಹಂತದಲ್ಲೇ ತಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಮಾತನಾಡಿ, ಹಿಂದೆ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗುವುದೇ ಬಹಳ ಖುಷಿಯ ಸಂಗತಿಯಾಗಿತ್ತು. ಇದೀಗ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿದ ಭಾಲ್ಕಿಯ ವಿದ್ಯಾಭಾರತಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸುಷ್ಮಿತಾ, 624 ಅಂಕ ಪಡೆದ ಬಸವಕಲ್ಯಾಣದ ಬಸವೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ರಾಜು, ಜ್ಞಾನಪ್ರಿಯ ಪ್ರೌಢಶಾಲೆಯ ಅಮನ್, ಭಾಲ್ಕಿಯ ಚನ್ನಬಸವೇಶ್ವರ ಗುರುಕುಲ ಪ್ರೌಢಶಾಲೆಯ ಸುಮೀತ್, ಸತ್ಯಸಾಯಿ ಪ್ರೌಢಶಾಲೆಯ ಪ್ರೇರಣಾ, ಬೀದರ್‍ನ ದತ್ತಗಿರಿ ಮಹಾರಾಜ್ ಪ್ರೌಢಶಾಲೆಯ ಶ್ರೇಯ ಹಾಗೂ ಡಾ. ತೋಂಟದ ಸಿದ್ಧಲಿಂಗ ಪ್ರೌಢಶಾಲೆಯ ವಿದ್ಯಾರ್ಥಿನಿ ಸಾಕ್ಷಿ ಅವರನ್ನು ಶಾಲು ಹೊದಿಸಿ, ಸನ್ಮಾನಿಸಲಾಯಿತು.


ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಪಾಲಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT