ಶನಿವಾರ, ಏಪ್ರಿಲ್ 1, 2023
29 °C

ಕಲ್ಯಾಣ ಕರ್ನಾಟಕ ಗ್ರಾ.ಪಂ.ಗಳಿಗೆ ಹೆಚ್ಚುವರಿ ₹ 1 ಕೋಟಿ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳ ಗ್ರಾಮ ಪಂಚಾಯಿತಿಗಳಿಗೆ ಪ್ರತಿ ವರ್ಷ ಹೆಚ್ಚುವರಿಯಾಗಿ ತಲಾ ₹ 1 ಕೋಟಿ ಅನುದಾನ ಕೊಡಲಿದೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎರಡು ಲಕ್ಷ ಕೋಟಿ ರೂಪಾಯಿ ಕಾಯ್ದಿರಿಸಿ ಪ್ರತಿ ವರ್ಷ ₹ 40 ಸಾವಿರ ಕೋಟಿ ಖರ್ಚು ಮಾಡಿ ರಾಜ್ಯದಲ್ಲಿ ಬಾಕಿ ಉಳಿದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಿದೆ’ ಎಂದೂ ಹೇಳಿದರು.

‘ಬಿಜೆಪಿ ಸರ್ಕಾರ ಐದು ವರ್ಷಗಳಲ್ಲಿ ಒಂದೇ ಒಂದು ಮನೆ ಮಂಜೂರು ಮಾಡಿಲ್ಲ. ಅನುಭವ ಮಂಟಪದ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ. ಕಾಂಗ್ರೆಸ್‌ ಅಧಿಕಾರ ಬಂದರೆ ಕಾಮಗಾರಿಯ ವೇಗ ಹೆಚ್ಚಿಸಿ ಕಾಲಮಿತಿಯಲ್ಲಿ ಮನೆಗಳ ನಿರ್ಮಾಣ ಕಾರ್ಯ ‍ಪೂರ್ಣಗೊಳಿಸಲಾಗುವುದು’ ಎಂದು ಭರವಸೆ ನೀಡಿದರು.

ಹಾಲಿ ಶಾಸಕರಿಗೆ ಟಿಕೆಟ್

‘ಬಹುತೇಕ ಎಲ್ಲ ಹಾಲಿ ಶಾಸಕರಿಗೆ ಕಾಂಗ್ರೆಸ್‌ ಟಿಕೆಟ್‌ ದೊರೆಯಲಿದೆ. ನೂರಕ್ಕೆ ನೂರರಷ್ಟು ಗೆಲ್ಲಲು ಸಾಧ್ಯವೇ ಇಲ್ಲ ಎನ್ನುವ ಸ್ಥಿತಿ ಇರುವ ಕಡೆ ಮಾತ್ರ ಬೇರೆಯವರಿಗೆ ಟಿಕೆಟ್‌ ಕೊಡಲಾಗುವುದು. ಕಾಂಗ್ರೆಸ್‌ ಸಿದ್ಧಾಂತ ಮೆಚ್ಚಿ ಬಂದರೆ ಬಿಜೆಪಿ ಶಾಸಕರಿಗೂ ಸ್ವಾಗತವಿದೆ’ ಎಂದು ಹೇಳಿದರು.

‘ಬಿಜೆಪಿಯವರು ವಿರೋಧ ಪಕ್ಷದಲ್ಲಿದ್ದಾಗಲೂ ಏನೂ ಮಾಡಲಿಲ್ಲ. ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳಾಗಿವೆ. ಒಂಬತ್ತು ವರ್ಷ ಸುಮ್ಮನೆ ಕುಳಿತು ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು