ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಯಾಣ ಕರ್ನಾಟಕದಲ್ಲಿ 20 ಸಾವಿರ ವಿದ್ಯಾರ್ಥಿಗಳಿಗೆ ಪ್ರವೇಶ: ಪ್ರೊ.ಶರಣಪ್ಪ ಹಲಸೆ

ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರಣಪ್ಪ ಹಲಸೆ ಹೇಳಿಕೆ
Last Updated 27 ಜನವರಿ 2023, 15:58 IST
ಅಕ್ಷರ ಗಾತ್ರ

ಬೀದರ್: ‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಕಲ್ಯಾಣ ಕರ್ನಾಟಕದಲ್ಲಿ 20 ಸಾವಿರ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಿ ಒಟ್ಟಾರೆ ವಿದ್ಯಾರ್ಥಿಗಳ ಸಂಖ್ಯೆಯನ್ನು 1 ಲಕ್ಷಕ್ಕೆ ಹೆಚ್ಚಿಸಲು ಸಂಕಲ್ಪ ಮಾಡಿದೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರಣಪ್ಪ ಹಲಸೆ ಹೇಳಿದರು.

‘ರಾಜ್ಯ ಮುಕ್ತ ವಿಶ್ವವಿದ್ಯಾಲಯವು ರಾಜ್ಯದಲ್ಲಿ ದೂರ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದ ಏಕೈಕ ವಿಶ್ವವಿದ್ಯಾಲಯವಾಗಿದೆ. ವಿಶ್ವವಿದ್ಯಾಲಯದಲ್ಲಿ ಅಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಕಲಿಕೆ ಮಾಡಿದ ವಿದ್ಯಾರ್ಥಿಗಳಂತೆ ಸಮಾನ ಅವಕಾಶಗಳು ಇರುತ್ತವೆ’ ಎಂದು ನಗರದ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.

‘ವಿಶ್ವವಿದ್ಯಾಲಯದಿಂದ ಎಂಎಸ್‌ಡಬ್ಲ್ಯೂ, ಎಂಸಿಎ, ಪ್ರವಾಸೋದ್ಯಮ, ಭೂವಿಜ್ಞಾನ ಸೇರಿ ಒಟ್ಟು 10 ಹೊಸ ಕೋರ್ಸ್‌ಗಳನ್ನು ಶುರು ಮಾಡಲಾಗುವುದು. ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಇರುವ ಕಡೆಗೆ ಮುಕ್ತ ವಿಶ್ವವಿದ್ಯಾಲಯ ತೆರಳಲಿದೆ. ಆಯಾ ಜಿಲ್ಲೆಗಳ ವಿದ್ಯಾರ್ಥಿಗಳು ಅಲ್ಲಿಯೇ ಪ್ರಾಯೋಗಿಕ ಹಾಗೂ ಬೋಧನಾ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುವಂತೆ ಜಿಲ್ಲಾ ಮಟ್ಟದಲ್ಲೇ ಕಾಲೇಜುಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು’ ಎಂದರು.

’ಯು.ಜಿ.ಸಿ ನಿಯಮಾವಳಿ ಪ್ರಕಾರ ಏಕಕಾಲಕ್ಕೆ ಒಂದು ದೂರ ಹಾಗೂ ಇನ್ನೊಂದು ಭೌತಿಕ ಶಿಕ್ಷಣ ಪಡೆಯಲು ಅವಕಾಶ ಇದೆ. ಈಗಾಗಲೇ ವಿದ್ಯಾರ್ಥಿಗಳು ಒಂದು ಭೌತಿಕ ತರಗತಿಗೆ ಪ್ರವೇಶ ಪಡೆದಿದ್ದಲಿ, ನಮ್ಮಲ್ಲಿ ದೂರ ಶಿಕ್ಷಣಕ್ಕಾಗಿ ಪ್ರವೇಶ ಪಡೆಯಬಹುದು‘ ಎಂದು ಮಾಹಿತಿ ನೀಡಿದರು.
‘ವಿಶ್ವವಿದ್ಯಾಲಯವು ರಾಷ್ಟ್ರೀಯ ಮೌಲ್ಯೀಕರಣ ಹಾಗೂ ಮಾನ್ಯತೆ ಪರಿಷತ್ (ನ್ಯಾಕ್)ಗೆ ಅರ್ಜಿ ಸಲ್ಲಿಸಿದ್ದು, ನ್ಯಾಕ್ ನಿಂದ ಉತ್ತಮ ಶೇಣಿ ಬರುವ ನಿರೀಕ್ಷೆ ಇದೆ. ವಿಶ್ವವಿದ್ಯಾಲಯವು ರಾಜ್ಯದಲ್ಲಿ 23 ಪ್ರಾದೇಶಿಕ ಕೇಂದ್ರಗಳನ್ನು ಹೊಂದಿದೆ. ಜಿಲ್ಲಾ ಕೇಂದ್ರದಲ್ಲಿ ನಿವೇಶನ ದೊರಕಿದರೆ ಪ್ರಾದೇಶಿಕ ಕಚೇರಿಯ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುವುದು. ತಾಲ್ಲೂಕು ಮಟ್ಟದಲ್ಲೂ ಕೇಂದ್ರಗಳನ್ನು ತೆರೆಯಲಾಗುವುದು’ ಎಂದು ತಿಳಿಸಿದರು.

‘ಬೀದರ್‌ ಪ್ರಾದೇಶಿಕ ಕೇಂದ್ರದಲ್ಲಿ ಪ್ರಥಮ ದರ್ಜೆ ಸಹಾಯಕರ ಕೊರತೆ ಇದೆ. ಕಂಪ್ಯೂಟರ್ ಸೇರಿದಂತೆ ಇತರೆ ಸಿಬ್ಬಂದಿ ನೇಮಕಕ್ಕೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಇರುವ ಹೆಚ್ಚುವರಿ ಸಿಬ್ಬಂದಿಯನ್ನು ಬೇರೆ ಕಾರ್ಯಕ್ಕೆ ಬಳಸಿಕೊಂಡು ವ್ಯವಸ್ಥೆ ಸರಿದೂಗಿಸಲಾಗುವುದು‘ ಎಂದು ಹೇಳಿದರು.

ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಭಾರ ಪ್ರಾದೇಶಿಕ ನಿರ್ದೇಶಕ ಸತೀಶ ಕುಲಕರ್ಣಿ, ಕೆಆರ್‌ಇ ಸಂಸ್ಥೆಯ ಜಂಟಿ ಕಾರ್ಯದರ್ಶಿ ಸತೀಶ ಪಾಟೀಲ, ಕರ್ನಾಟಕ ಕಾಲೇಜಿನ ಪ್ರಾಚಾರ್ಯ ಮಲ್ಲಿಕಾರ್ಜುನ ಹಂಗರಗೆ, ಉಪ ಪ್ರಾಚಾರ್ಯ ಅನಿಲಕುಮಾರ ಸಿ. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT