ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ ನಂತರ ಸಮ್ಮಿಶ್ರ ಸರ್ಕಾರ ಪತನ: ಬಿ.ಎಸ್‌.ವೈ ಭವಿಷ್ಯ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ
Last Updated 22 ಫೆಬ್ರುವರಿ 2019, 17:11 IST
ಅಕ್ಷರ ಗಾತ್ರ

ಹುಮನಾಬಾದ್ (ಬೀದರ್‌ ಜಿಲ್ಲೆ): ‘ಲೋಕಸಭೆ ಚುನಾವಣೆ ಫಲಿತಾಂಶ ಬಂದ 24 ಗಂಟೆಯಲ್ಲಿ ರಾಜ್ಯದ ಸಮ್ಮಿಶ್ರ ಸರ್ಕಾರ ಪತನವಾಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಭವಿಷ್ಯ ನುಡಿದರು.

ಪಟ್ಟಣದ ಹೊರವಲಯದ ರಾಮಚಂದ್ರ ವೀರಪ್ಪ ಕಾಲೇಜು ಮೈದಾನದಲ್ಲಿ ಶುಕ್ರವಾರ ಮೋದಿ ಸಂಕಲ್ಪ ಯಾತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆ ಕಹಳೆ ಮೊಳಗಿಸಿದ ಅವರು, ‘ಸೂರ್ಯ, ಚಂದ್ರ ನಿತ್ಯ ಉದಯವಾಗುವುದು ಎಷ್ಟು ಸತ್ಯವೋ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುವುದು ಅಷ್ಟೇ ಸತ್ಯ’ ಎಂದರು.

‘ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಕೇವಲ 37 ಸ್ಥಾನ ಪಡೆದರೂ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ನನ್ನನ್ನು ಮುಖ್ಯಮಂತ್ರಿ ಮಾಡಿದ್ದು ಸೋನಿಯಾ ಹಾಗೂ ರಾಹುಲ್ ಗಾಂಧಿಯೇ ಹೊರತು ಜನರಲ್ಲ ಎಂದು ಹೇಳುವ ಮೂಲಕ ಅವರು ರಾಜ್ಯದ ಜನರಿಗೆ ದ್ರೋಹ ಬಗೆದಿದ್ದಾರೆ’ ಎಂದು ಆರೋಪಿಸಿದರು.

‘ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ನೈತಿಕ ಹಕ್ಕು ಇಲ್ಲ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌, ಮುಖಂಡರಾದ ಕೋಟಾ ಶ್ರೀನಿವಾಸ, ಶ್ರೀರಾಮಲು, ಆರ್‌.ಅಶೋಕ, ಗೋವಿಂದ ಕಾರಜೋಳ, ಸಂಸದ ಭಗವಂತ ಖೂಬಾ, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಶಾಸಕ ಪ್ರಭು ಚವಾಣ ಇದ್ದರು.

**

ಕಾಂಗ್ರೆಸ್‌ ಮುಳುಗುವ ಹಡಗು
ಬೀದರ್: ‘ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಆಸೆಯಿಂದ ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಹೊರಟಿದೆ. ಕಾಂಗ್ರೆಸ್‌ ಮುಳುಗುವ ಹಡುಗು. ತಾನು ಮುಳುಗುವ ಜತೆಗೆ ಮೈತ್ರಿ ಪಕ್ಷಗಳನ್ನೂ ಮುಳುಗಿಸಲಿದೆ’ ಎಂದು ಕೇಂದ್ರ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪುರುಷೋತ್ತಮ ರೂಪಾಲಾ ಲೇವಡಿ ಮಾಡಿದರು.

ಹುಮನಾಬಾದ್‌ನಲ್ಲಿ ಮೋದಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಬಿಜೆಪಿಯಲ್ಲಿ ವರನ ಸ್ಥಾನದಲ್ಲಿ ನರೇಂದ್ರ ಮೋದಿ ಇದ್ದಾರೆ. ಆದರೆ ಕಾಂಗ್ರೆಸ್‌ನಲ್ಲಿ ವರ ಇಲ್ಲದಿದ್ದರೂ ಮದುವೆ ದಿಬ್ಬಣ ಹೊರಟಿದೆ’ ಎಂದು ಟೀಕಿಸಿದರು.

‘ಕಾಂಗ್ರೆಸ್‌ ಭ್ರಷ್ಟಾಚಾರ ನಿರ್ಮೂಲನೆ ಮಾಡುವಲ್ಲಿ ವಿಫಲವಾಗಿದೆ. ಅಷ್ಟೇ ಅಲ್ಲ ಮಳ್ಳನ (ಲಲ್ಲೂ) ಕೈಯಲ್ಲಿ ಅಧಿಕಾರ ಕೊಡಲು ಹೊರಟಿದೆ. ಬಿಜೆಪಿ ಕಾರ್ಯಕರ್ತರು ಚುನಾವಣೆಯ ಸಂದರ್ಭದಲ್ಲಿ ಸೈನಿಕರ ಮಾದರಿಯಲ್ಲಿ ಕೆಲಸ ಮಾಡಿ ಪಕ್ಷವನ್ನು ಗೆಲ್ಲಿಸಬೇಕು’ ಎಂದು ಕರೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT