ಭಾನುವಾರ, ಸೆಪ್ಟೆಂಬರ್ 19, 2021
24 °C

ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹ: ಎಐಡಿಎಸ್‍ಒ, ಎಬಿವಿಪಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‍ಒ) ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದರು.

ಎಐಡಿಎಸ್‍ಒ: ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಕಾರ್ಯಕರ್ತರು ವಿದ್ಯಾರ್ಥಿಗಳೊಂದಿಗೆ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಒಂದು ತಿಂಗಳಿಂದ ರಾಜ್ಯದಾದ್ಯಂತ ನಡೆಸಿದ ಹೋರಾಟದ ಪರಿಣಾಮವಾಗಿ ಡಿಪ್ಲೊಮಾ, ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯ ಪ್ರಥಮ ಹಾಗೂ ದ್ವಿತೀಯ ಸೆಮಿಸ್ಟರ್‌ಗಳಿಗೆ ಒಂದು ಸೆಮಿಸ್ಟರ್ ಪರೀಕ್ಷೆ ಮಾತ್ರ ನಡೆಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಅಂತಿಮ ವರ್ಷದ ವಿದ್ಯಾರ್ಥಿಗಳ ಬೇಡಿಕೆಗೆ ಇನ್ನೂ ಸ್ಪಂದಿಸಿಲ್ಲ ಎಂದು ಆರ್ಗನೈಸೇಷನ್ ಜಿಲ್ಲಾ ಸಂಚಾಲಕ ಹಣಮಂತ ಎಸ್.ಎಚ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಮಾನಸಿಕ ಒತ್ತಡ ಕಡಿಮೆ ಮಾಡಲು ಅಂತಿಮ ವರ್ಷದ ವಿದ್ಯಾರ್ಥಿಗಳಿಗೂ ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು.

ಪ್ರಮುಖರಾದ ಲಕ್ಷ್ಮಣ ಪಿ. ಮಚ್ಕೂರೆ, ಅಮರ, ಅಭಿಷೇಕ, ಆದರ್ಶ, ಸಚಿನ್, ಐಶ್ವರ್ಯ, ಸತೀಶ್, ಮಲ್ಲಿಕಾರ್ಜುನ, ಮನಿಷಾ, ಪ್ರಿಯದರ್ಶಿನಿ, ಸ್ಟಿಫನ್, ಪವನ್, ಅಭಿಷೇಕ ಪಾಲ್ಗೊಂಡಿದ್ದರು.

ಎಬಿವಿಪಿ: ವಿದ್ಯಾರ್ಥಿಗಳ ಶಿಷ್ಯವೇತನ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿಪತ್ರ ಸಲ್ಲಿಸಿದರು.

ಶಿಷ್ಯವೇತನ ಬಿಡುಗಡೆ ಮಾಡದ ಕಾರಣ ಡಿಪ್ಲೊಮಾ, ಎಂಜಿನಿಯರಿಂಗ್, ಸ್ನಾತಕ ಹಾಗೂ ಸ್ನಾತಕೋತ್ತರ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದರು.

ರಾಜ್ಯದಲ್ಲಿ ಬಹುತೇಕ ಕಾಲೇಜುಗಳು ಪ್ರಾರಂಭಗೊಂಡರೂ, ಹಾಸ್ಟೇಲ್‍ಗಳನ್ನು ತೆರೆದಿಲ್ಲ ಎಂದು ಹೇಳಿದರು.

ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ಹಾಸ್ಟೇಲ್‍ಗಳನ್ನು ತಕ್ಷಣ ತೆರೆಯಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೊಸ ಹಾಸ್ಟೇಲ್‍ಗಳನ್ನು ಆರಂಭಿಸಬೇಕು. ವಿದ್ಯಾರ್ಥಿಗಳಿಗೆ ಬಸ್ ಪಾಸ್ ಒದಗಿಸಬೇಕು ಎಂದು ಆಗ್ರಹಿಸಿದರು.

ಪರಿಷತ್ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ದ ಜಾಡರ್, ಪ್ರಮುಖರಾದ ಅರವಿಂದ ಸುಂದಾಳಕರ್, ಲಿಂಗರಾಜ ಬಿರಾದಾರ, ವಿಶಾಲ್ ಅತಿವಾಳ, ಅನಿಲ್ ಜಾಧವ್, ಕಿರಣ ಪಾಟೀಲ, ದೀಪಕ್ ಕೋಟೆ, ಅರವಿಂದ ಪಿ, ಚಂದ್ರಕಾಂತ, ಶ್ರೀಕಾಂತ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು