ಸೋಮವಾರ, ಜನವರಿ 18, 2021
27 °C
ಆನ್‌ಲೈನ್‌ನಲ್ಲೇ ಕಾರ್ಯಕ್ರಮ: ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿಕೆ

28, 29ರಂದು ಅನುಭವ ಮಂಟಪ ಉತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿಯ ವತಿಯಿಂದ 41ನೇ ಶರಣ ಕಮ್ಮಟ ‘ಅನುಭವ ಮಂಟಪ ಉತ್ಸವ’ ನ.28 ಹಾಗೂ 29ರಂದು ಆನ್‌ಲೈನ್‌ನಲ್ಲಿ ನಡೆಯಲಿದೆ. ಫೇಸ್‌ಬುಕ್‌ ಹಾಗೂ ಯೂಟ್ಯೂಬ್‌ನಲ್ಲಿ ಕಾರ್ಯಕ್ರಮದ ನೇರ ಪ್ರಸಾರ ಮಾಡಲಾಗುವುದು ಎಂದು ಮಂಡಳಿಯ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ತಿಳಿಸಿದರು.

28ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ರಾಮಚಂದ್ರನ್ ಷಟ್‌ಸ್ಥಲ ಧ್ವಜಾರೋಹಣ ನೆರವೇರಿಸುವರು ಎಂದು ನಗರದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಆಯುಕ್ತ ಶರಣಬಸಪ್ಪ ಕೊಟಪ್ಪಗೋಳ, ತಹಶೀಲ್ದಾರ್ ಸಾವಿತ್ರಿ ಸಲಗರ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನಶೆಟ್ಟಿ, ವಿಶ್ವ ಬಸವ ಧರ್ಮ ಟ್ರಸ್ಟ್ ಉಪಾಧ್ಯಕ್ಷ ವೈಜನಾಥ ಕಾಮಶೆಟ್ಟಿ, ಕಾರ್ಯದರ್ಶಿ ಎಸ್‌.ಬಿ.ದುರ್ಗೆ ಉಪಸ್ಥಿತರಿರುವರು ಎಂದು ಹೇಳಿದರು.

ಶನಿವಾರ 11 ಗಂಟೆಗೆ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸುವರು. ಆರ್ಟ್‌ ಆಫ್‌ ಲಿವಿಂಗ್‌ನ ಶ್ರೀ ಶ್ರೀ ರವಿಶಂಕರ ಗುರೂಜಿ ಹಾಗೂ ಧಾರವಾಡದ ಮಲ್ಲಿಕಾರ್ಜುನ ಮಹಾಸ್ವಾಮಿ ಸಾನ್ನಿಧ್ಯ ವಹಿಸ ಲಿದ್ದಾರೆ. ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬೃಹತ್‌ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಅನುಭವ ಮಂಟಪದ ಅಧ್ಯಕ್ಷ ಬಸವರಾಜ ಪಟ್ಟದ್ದೇವರು ಆಶಯ ನುಡಿ ಆಡುವರು. ಸಂಜೆ 6 ಗಂಟೆಗೆ ‘ಅನುಭವ ಮಂಟಪ ಅಂದು–ಇಂದು ಮತ್ತು ಎಂದೆಂದೂ’ ಗೋಷ್ಠಿ ನಡೆಯಲಿದೆ.

ನ.29ರಂದು ಬೆಳಿಗ್ಗೆ 11 ಗಂಟೆಗೆ ‘ಕಲ್ಯಾಣ ರಾಜ್ಯ ಶರಣರ ಪರಿಕಲ್ಪನೆ’ ಗೋಷ್ಠಿ ಜರುಗಲಿದೆ. ಕೋವಿಡ್‌ ಕಾರಣದಿಂದ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಿಲ್ಲ. ಆನ್‌ಲೈನ್‌ಲ್ಲೇ ಕಾರ್ಯಕ್ರಮ ವೀಕ್ಷಸಬಹುದಾಗಿದೆ ಎಂದು ತಿಳಿಸಿದರು.

ಸಂಜೆ 6 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಸಮಾರೋಪ ನುಡಿ ಆಡುವರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ತೋಂಟದ ಸಿದ್ಧರಾಮ ಸ್ವಾಮೀಜಿ, ಗುರುಬಸವ ಪಟ್ಟದ್ದೇವರು ಹಾಗೂ ಅಕ್ಕ ಗಂಗಾಂಬಿಕೆ ಸಾನ್ನಿಧ್ಯ ವಹಿಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ಅನುಭವ ಮಂಟಪ ಉತ್ಸವದಲ್ಲಿ ಐದು ಕನ್ನಡ, ಒಂದು ತೆಲುಗು ಹಾಗೂ 14 ಮರಾಠಿ ಗ್ರಂಥಗಳು ಬಿಡುಗಡೆಯಾಗಲಿವೆ. ಪ್ರಮುಖರು ವಚನ ಗಾಯನ ಕಾರ್ಯಕ್ರಮ ನಡೆಸಿ ಕೊಡಲಿದ್ದಾರೆ ಎಂದು ವಿವರಿಸಿದರು.

ಗುರುಬಸವ ಪಟ್ಟದ್ದೇವರು, ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಬಸವರಾಜ ಧನ್ನೂರ್ ಹಾಗೂ ಜಯರಾಜ್‌ ಖಂಡ್ರೆ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು