ಬುಧವಾರ, ಫೆಬ್ರವರಿ 1, 2023
16 °C
ಉತ್ತರ ಕರ್ನಾಟಕದ ಆರು ಜಿಲ್ಲೆಗಳ 70,357 ಅಭ್ಯರ್ಥಿಗಳು ನೋಂದಣಿ: ಜಿಲ್ಲಾಡಳಿತದಿಂದ ಸಿದ್ಧತೆ

ಸೇನಾ ನೇಮಕಾತಿ ರ‍್ಯಾಲಿ ಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ನಗರದ ಜಿಲ್ಲಾ ನೆಹರೂ ಕ್ರೀಡಾಂಗಣದಲ್ಲಿ ಡಿಸೆಂಬರ್ 5ರಿಂದ 22ರವರೆಗೆ ಅಗ್ನಿಪಥ ಅಗ್ನಿ ವೀರರಿಗಾಗಿ ಸೇನಾ ನೇಮಕಾತಿ ರ‍್ಯಾಲಿ ನಡೆಯಲಿದ್ದು, ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಒಟ್ಟು 70,357 ಯುವಕರು ಪಾಲ್ಗೊಳ್ಳಲಿದ್ದಾರೆ.

ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಒಟ್ಟು 70,357 ಆಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ನಿತ್ಯ ಕನಿಷ್ಠ 4 ಸಾವಿರದಿಂದ ಗರಿಷ್ಠ 4,500 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಹಾಜರಾಗಲಿದ್ದಾರೆ.

ಜಿಲ್ಲಾಡಳಿತದ ವತಿಯಿಂದ ಬ್ಯಾರಿಕೇಡ್, ಶಾಮಿಯಾನ, ಕುಡಿಯುವ ನೀರು, ಶೌಚಾಲಯ ಹಾಗೂ ಸೇನಾ ನೇಮಕಾತಿ ರ‍್ಯಾಲಿಗೆ ಬೇಕಾಗುವ ಅಗತ್ಯ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ.

ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಗಾಗಿ ಶಿಕ್ಷಣ ಮತ್ತು ಕಂದಾಯ ಇಲಾಖೆ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿಯನ್ನೂ ನಿಯೋಜನೆ ಮಾಡಲಾಗಿದೆ.

ನಗರಸಭೆ, ಲೋಕೋಪಯೋಗಿ, ಕ್ರೀಡಾ, ಪೊಲೀಸ್ ಇಲಾಖೆ, ಶಿಕ್ಷಣ ಮತ್ತು ಸೈನಿಕ ಕಲ್ಯಾಣ ಇಲಾಖೆ ಸಿಬ್ಬಂದಿ ಸಹ ಸೇನಾ ನೇಮಕಾತಿ ರ‍್ಯಾಲಿಗೆ ಸಹಕಾರ ನೀಡಿವೆ.

ಗುರುದ್ವಾರದ ವತಿಯಿಂದ ರ‍್ಯಾಲಿಗೆ ಬರುವ ಅಭ್ಯರ್ಥಿಗಳಿಗಾಗಿ ಉಚಿತ ಊಟದ ವ್ಯವಸ್ಥೆ. ಕಡಿಮೆ ವೆಚ್ಚದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಡಿಸೆಂಬರ್ 5ರಂದು ಬೆಳಿಗ್ಗೆ 3 ಗಂಟೆಯಿಂದ ಅಭ್ಯರ್ಥಿಗಳು ಕ್ರೀಡಾಂಗಣಕ್ಕೆ ಬರಲಿದ್ದಾರೆ. ಬೆಳಿಗ್ಗೆ 6ಕ್ಕೆ ರನ್ನಿಂಗ್ ಆರಂಭವಾಗಿ 8 ಗಂಟೆಗೆ ಮುಕ್ತಾಯವಾಗಲಿದೆ. ನಂತರ ಇತರೆ ಪ್ರಕ್ರಿಯೆಗಳು ನಡೆಯಲಿವೆ.

ಪೊಲೀಸ್‌ ಬಂದೋಬಸ್ತ್: ಸೇನಾ ನೇಮಕಾತಿ ರ್‍ಯಾಲಿಯ ಸಂದರ್ಭದಲ್ಲಿ ಸಂಚಾರ ಒತ್ತಡ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಡಿವೈಎಸ್‌ಪಿ, ನಾಲ್ಕು ಸಿಪಿಐ, 12 ಪಿಎಸ್‌ಐ, 22 ಎಎಸ್‌ಐ, 34 ಹೆಡ್‌ ಕಾನ್‌ಸ್ಟೆಬಲ್, 37 ಪೊಲೀಸ್‌ ಕಾನ್‌ಸ್ಟೆಬಲ್ ಹಾಗೂ 50 ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಆಸ್ಪತ್ರೆ, ಹೋಟೆಲ್‌, ಕಿರಾಣಿ ಸೇರಿದಂತೆ ವ್ಯಾಪಾರ ವಹಿವಾಟು ನಡೆಸುತ್ತಿರುವ ಅಂಗಡಿ ಮಾಲೀಕರು ಎಂದಿನಂತೆ ಕಾರ್ಯನಿರ್ವಹಿಸಬಹುದು ಎಂದು ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.