ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗತ್ಯ ಬಿದ್ದರೆ ಕಲ್ಯಾಣ ಮಂಟಪದಲ್ಲಿ ವ್ಯವಸ್ಥೆ: ಚವಾಣ್

ಕೋವಿಡ್‌ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ
Last Updated 24 ಏಪ್ರಿಲ್ 2021, 17:23 IST
ಅಕ್ಷರ ಗಾತ್ರ

ಬೀದರ್: ‘ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದೆ. ಕೆಲ ಖಾಸಗಿ ಸಂಸ್ಥೆಗಳ ಸಹಕಾರ ಪಡೆಯಲಾಗಿದೆ. ಅಗತ್ಯಬಿದ್ದರೆ ಕಲ್ಯಾಣ ಮಂಟಪಗಳಲ್ಲೂ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯ ವಿಡಿಯೊ ಕಾನ್ಫ್‌ರೆನ್ಸ್‌ ಹಾಲ್‌ನಲ್ಲಿ ಶನಿವಾರ ನಡೆದ ಜನಪ್ರತಿನಿಧಿಗಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್‌ ಸೋಂಕಿತರ ಸಮರ್ಪಕ ಚಿಕಿತ್ಸೆಗೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿಯಿಂದ ಕಾಲ ಕಾಲಕ್ಕೆ ಮಾಹಿತಿ ಪಡೆಯಲಾಗುತ್ತಿದೆ. ರೆಮ್‌ಡಿಸಿವಿರ್‌ ಹಾಗೂ ಆಕ್ಸಿಜನ್‌ ಕೊರತೆ ಇಲ್ಲ. ಒಂದು ವೇಳೆ ಕೊರತೆ ಉಂಟಾದರೂ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.


ಅಧಿಕಾರಿಗಳಿಂದ ಸುಳ್ಳು ಮಾಹಿತಿ: ಖಂಡ್ರೆ


‘ಭಾಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ ನೂರು ಜನರಿಗೆ ರೆಮ್‌ಡಿಸಿವಿರ್‌ ಕೊಟ್ಟಿಲ್ಲ. ಸರ್ಕಾರ ಸತ್ತಿದೆ. ಜನರನ್ನು ಕೊಲ್ಲುತ್ತಿದೆ. ಅಧಿಕಾರಿಗಳು ಸರ್ಕಾರಕ್ಕೆ ಸುಳ್ಳು ಮಾಹಿತಿ ಕೊಡುತ್ತಿದ್ದಾರೆ’ ಎಂದು ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದರು.

‘ಆಕ್ಸಿಜನ್‌ ಕೊರತೆಯಿಂದ ಜನ ಸಾವಿಗೀಡಾಗುತ್ತಿದ್ದಾರೆ. ಸರ್ಕಾರ ಜನರಿಗೆ ವೈದ್ಯಕೀಯ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾಗಿದೆ. ಸಚಿವರು ಕಾಟಾಚಾರಕ್ಕೆ ಸಭೆ ಕರೆದಿದ್ದಾರೆ. ಚಹಾ ಕುಡಿಯಲು ಸಭೆ ಕರೆದರೆ ಏನು ಪ್ರಯೋಜನ. ಅಧಿಕಾರಿಗಳು ದೂರವಾಣಿ ಕರೆಗಳನ್ನೇ ಸ್ವೀಕರಿಸುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಬಂಡೆಪ್ಪ ಕಾಶೆಂಪೂರ್, ‘ಜನರು ಚಿಕಿತ್ಸೆ ದೊರೆಯದೇ ಸಾವಿಗೀಡಾಗುವಂತಹ ಸ್ಥಿತಿ ನಿರ್ಮಾಣವಾಗಬಾರದು. ಕೋವಿಡ್‌ ಗಂಭೀರ ಸ್ವರೂಪ ಪಡೆಯುವ ಮೊದಲೇ ಸರ್ಕಾರ ಇನ್ನಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.


ಸಂಸದ ಭಗವಂತ ಖೂಬಾ ಮಾತನಾಡಿ, ‘ದೇಶದೆಲ್ಲೆಡೆ ಆಕ್ಸಿಜನ್‌ಗೆ ಬೇಡಿಕೆ ಇದೆ. ಆದರೂ, ಬೀದರ್‌ ಜಿಲ್ಲೆಗೆ ಪ್ರತಿನಿತ್ಯ ಆಕ್ಸಿಜನ್ ಪೂರೈಸಲಾಗುತ್ತಿದೆ, ಹೆಚ್ಚಿನ ಆಕ್ಸಿಜನ್ ಶೇಖರಣೆ ಮಾಡಿಟ್ಟುಕೊಳ್ಳಲು ಸೂಚಿಸಲಾಗಿದೆ’ ಎಂದು ಹೇಳಿದರು.

‘ತಾಲ್ಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ, ಆಯಾ ತಾಲ್ಲೂಕಿನ ಜನರಿಗೆ ಅಲ್ಲಿಯೇ ಚಿಕಿತ್ಸೆ ನೀಡಬೇಕು. ಕೋವಿಡ್ ವಾರ್ಡ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಸೂಚಿಸಲಾಗಿದೆ’ ಎಂದು ತಿಳಿಸಿದರು.

‘ಪಿ.ಎಂ. ಕೇರ್ಸ್ ನಿಂದ 23 ವೆಂಟಿಲೇಟರ್ ಯುಪಿಎಸ್‌ಗಳು ಬಂದಿವೆ. ತಾಲ್ಲೂಕು ಆಸ್ಪತ್ರೆಗಳಲ್ಲಿ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಬೇಡ್‌ಗಳ ಸಂಖ್ಯೆಗಳನ್ನು ಅಸ್ಪತ್ರೆಯ ಹೊರಗಡೆ ರೋಗಿಗಳಿಗೆ ಗೊತ್ತಾಗುವಂತೆ ಬೋರ್ಡ್ ಮೇಲೆ ಹಾಕಿಸಬೇಕು’ ಎಂದು ಸಲಹೆ ನೀಡಿದರು.

‘ತಾಲ್ಲೂಕು ಮಟ್ಟದ ಆಸ್ಪತ್ರೆಗಳ ವೈದ್ಯರು ಕೇವಲ ಬ್ರಿಮ್ಸ್‌ಗೆ ರೋಗಿಗಳನ್ನು ಕಳುಹಿಸಿಕೊಡುವ ಕೆಲಸಕ್ಕೆ ಮುಂದಾಗಬಾರದು. ಅಲ್ಲಿಯೇ ಚಿಕಿತ್ಸೆ ನೀಡಬೇಕು. ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುವ ವೈದ್ಯರನ್ನು ಗುರುತಿಸಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಶಾಸಕ ರಾಜಶೇಖರ್ ಪಾಟೀಲ, ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅವರು ವರ್ಚುವಲ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.
ಶಾಸಕರಾದ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯ ರಘುನಾಥ ಮಲ್ಕಾಪುರೆ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ ಗಾದಗಿ ಇದ್ದರು.

ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಹಾಜರಿದ್ದರು.


ಸೋಂಕಿತರಿಗೆ ಸೌಕರ್ಯ: ಜಿಲ್ಲಾಡಳಿತ ಜತೆ ಚರ್ಚೆ


ಬೀದರ್: ಕೋವಿಡ್ ಸೋಂಕಿತರಿಗೆ ಅಗತ್ಯ ಸೌಕರ್ಯ ಹಾಗೂ ಸಮರ್ಪಕ ಚಿಕಿತ್ಸೆ ಒದಗಿಸುವ ಕುರಿತಂತೆ ಜಿಲ್ಲಾಡಳಿತದ ಜತೆ ಚರ್ಚೆ ನಡೆಸಲಾಗಿದೆ ಎಂದು ಶಾಸಕ ರಹೀಂಖಾನ್ ತಿಳಿಸಿದ್ದಾರೆ.
ನಗರದ ಬ್ರಿಮ್ಸ್ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.
ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಪ್ರಯುಕ್ತ ಶಾಹೀನ್ ಕಾಲೇಜು, ಝೀರಾ ಕನ್ವೆನ್ಶನ್ ಹಾಲ್‍ನಲ್ಲಿ ಕೋವಿಡ್ ಕೇರ್ ಸೆಂಟರ್‍ಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ನಿಯಮಗಳನ್ನು ಜಾಚೂತಪ್ಪದೆ ಪಾಲಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.


ಮಾಧ್ಯಮ ಪ್ರತಿನಿಧಿಗಳನ್ನು ದೂರಇಟ್ಟ ಸಚಿವರು


ಬೀದರ್‌: ಕೋವಿಡ್‌ ನಿಯಂತ್ರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಅವರು ಕರೆದಿದ್ದ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಅವಕಾಶ ನೀಡದ ಕಾರಣ ಸಾಮಾಜಿಕ ಜಾಲ ತಾಣಗಳಲ್ಲಿ ತೀವ್ರ ಟೀಕೆಗಳು ವ್ಯಕ್ತವಾಗಿವೆ.
ಸಭೆಯಲ್ಲಿ ಪಾಲ್ಗೊಳ್ಳುವಂತೆ ಉಸ್ತುವಾರಿ ಸಚಿವರೇ ಪತ್ರಕರ್ತರಿಗೆ ಮನವಿ ಮಾಡಿಕೊಂಡಿದ್ದರು. ವಾರ್ತಾ ಇಲಾಖೆಯಿಂದಲೂ ಇಮೇಲ್‌ ಕಳಿಸಲಾಗಿತ್ತು. ವಾಟ್ಸ್‌ಅ್ಯಪ್‌ ಸಂದೇಶ ಸಹ ಕಳಿಸಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಸಭೆಯ ಸ್ಥಳವನ್ನೇ ಬದಲು ಮಾಡಿ, ವಿಡಿಯೊ ಕಾನ್ಫ್‌ರೆನ್ಸ್‌ ಹಾಲ್‌ನಲ್ಲಿ ಸಭೆ ನಡೆಸಲಾಯಿತು.
ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ವಿವರಣೆ ನೀಡಲಾಗುವುದು ಎಂದು ಅಧಿಕಾರಿಗಳು ಮನವಿ ಮಾಡಿದರು. ಮೂರೂವರೆ ತಾಸು ಸಭೆ ನಡೆದರೂ ಸಭೆಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳದಿರುವುದು ಟೀಕೆಗೆ ಕಾರಣವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT