ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಮಟ್ಟದಲ್ಲಿ ವಿವಿಧ ಯೋಜನೆಗಳ ಜಾಗೃತಿ

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಬೆಳ್ಳಿ ಮಹೋತ್ಸವ
Last Updated 24 ಸೆಪ್ಟೆಂಬರ್ 2021, 13:48 IST
ಅಕ್ಷರ ಗಾತ್ರ

ಬೀದರ್: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ 25ನೇ ವರ್ಷಾಚರಣೆ ಹಾಗೂ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ದೇಶದಾದ್ಯಂತ ಏಕಕಾಲಕ್ಕೆ ಅಕ್ಟೋಬರ್ 2ರಿಂದ ನವೆಂಬರ್ 14ರ ವರೆಗೆ ಕಾನೂನು ಅರಿವು– ನೆರವು ಕಾರ್ಯಕ್ರಮಗಳು ನಡೆಯಲಿವೆ.

ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಾಡ್ಲೂರ ಸತ್ಯನಾರಾಯಣಾಚಾರ್ಯ ಅಧ್ಯಕ್ಷತೆಯಲ್ಲಿ ಇಲ್ಲಿಯ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಈ ಕುರಿತು ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.

ಪ್ರಾಧಿಕಾರ ಸಿದ್ಧಪಡಿಸಿದ ಕಾರ್ಯ ಸೂಚಿಯನ್ವಯ ಕಾನೂನು ಅರಿವು– ನೆರವು ಕಾರ್ಯಕ್ರಮ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಸತ್ಯನಾರಾಯಣಾಚಾರ್ಯ ತಿಳಿಸಿದರು.

ಮಹಾತ್ಮ ಗಾಂಧೀಜಿ ಜಯಂತಿ ವಿಶೇಷ ದಿನಾಚರಣೆ ಮೂಲಕ ಕಾರ್ಯಕ್ರಮ ಆರಂಭಿಸಬೇಕು. ಅಕ್ಟೋಬರ್ 10ರಂದು ವಿಶ್ವ ಮಾನಸಿಕ ಆರೋಗ್ಯ ದಿನ, ಅಕ್ಟೋಬರ್ 11ರಂದು ಅಂತರ ರಾಷ್ಟ್ರೀಯ ಹೆಣ್ಣು ಮಗುವಿನ ದಿನ, ಅಕ್ಟೋಬರ್ 15ರಂದು ವಿಶ್ವ ವಿದ್ಯಾರ್ಥಿ ದಿನ ಹಾಗೂ ಅಕ್ಟೋಬರ್ 24ರಂದು ವಿಶ್ವ ಸಂಸ್ಥೆ ಸ್ಥಾಪನಾ ದಿನದಂದು ಕಾರ್ಯಕ್ರಮ ರೂಪಿಸಬೇಕು ಎಂದು ಸಲಹೆ ನೀಡಿದರು.

ಆಜಾದಿ ಕಾ ಅಮೃತ ಮಹೋತ್ಸವ ಆಚರಣೆಯ ಒಂದು ವಾರದ ಅವಧಿಯನ್ನು ಕಾನೂನು ಸೇವೆಗಳ ಪ್ರಾಧಿಕಾರಕ್ಕಾಗಿ ನೀಡಲಾಗಿದೆ. ನವೆಂಬರ್ 9ರ ಕಾನೂನು ಸೇವೆಗಳ ದಿನದಂದು ಆರಂಭವಾಗಿ ನವೆಂಬರ್ 14ರ ಮಕ್ಕಳ ದಿನಾಚರಣೆ ದಿನ ಸಮಾರೋಪಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಪಂಚಾಯಿತಿ ಕಚೇರಿ, ಶಾಲಾ ಆವರಣ, ಸಮುದಾಯ ಭವನಗಳಲ್ಲಿ ಕಾರ್ಯಕ್ರಮ ಸರಳವಾಗಿ ನಡೆಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವಂತಿರಬೇಕು ಎಂದು ತಿಳಿಸಿದರು.

ಪ್ರತಿ ಕಾರ್ಯಕ್ರಮದಲ್ಲಿ ಒಂದು ಇಲಾಖೆಯಿಂದ ಸಾರ್ವಜನಿಕರಿಗಾಗಿ ಇರುವ ಯೋಜನೆಗಳ ಕುರಿತು ಮಾಹಿತಿ ನೀಡಬೇಕು. ಕಾರ್ಯಕ್ರಮದ ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಳಿಸಬೇಕು. ಕಾರ್ಯಕ್ರಮದ ಬಗ್ಗೆ ಸೂಕ್ತ ಪ್ರಚಾರ ಆಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ. ಮಾತನಾಡಿ, ಬೀದರ್ ಜಿಲ್ಲಾ ಕೇಂದ್ರದಲ್ಲಿ ಒಂದು ಕಾರ್ಯಕ್ರಮ ನಡೆಸಲು ನಗರಸಭೆ ಅಧಿಕಾರಿಗಳು ಸಹಕಾರ ನೀಡಬೇಕು. ಎಲ್ಲ ಕಾರಾಗೃಹಗಳಲ್ಲಿ ಕಾನೂನು ಸೇವೆಗಳ ಶಿಬಿರ ನಡೆಯಬೇಕು. ಅಲ್ಲಿ ಆಧಾರ್ ಕಾರ್ಡ್, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ಆಯುಷ್ಮಾನ್ ಕಾರ್ಡ್, ಬಿಪಿಎಲ್ ಕಾರ್ಡ್, ಕಾರ್ಮಿಕರ ನೋಂದಣಿ, ವಾಹನ ವಿಮೆ ಕುರಿತು ಮಾಹಿತಿ ನೀಡಬೇಕು ಎಂದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮಾತನಾಡಿ, ‘ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಅಗತ್ಯ ಸಹಕಾರ ನೀಡಲಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಮಾತನಾಡಿ, ‘ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಅಶಯದಂತೆ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ಒಂದು ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳುವ ಅಗತ್ಯವಿದೆ’ ಎಂದು ಹೇಳಿದರು.

ಜಿಲ್ಲೆಯ 185 ಗ್ರಾಮ ಪಂಚಾಯಿತಿಗಳಲ್ಲಿ ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಯುವಂತೆ ತಾಲ್ಲೂಕು ಪಂಚಾಯಿತಿಗಳ ಕಾರ್ಯ ನಿರ್ವಹಣಾಧಿಕಾರಿಗಳ ಮೂಲಕ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್., ಐಎಎಸ್ ಪ್ರೊಬೇಷನರಿ ಅಧಿಕಾರಿ ಕೀರ್ತನಾ, ಅಬಕಾರಿ ಉಪ ಆಯುಕ್ತ ಮಂಜುನಾಥ್ ಎನ್., ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಎಸ್.ಎಸ್.ಮಠಪತಿ, ಯೋಜನಾ ನಿರ್ದೇಶಕ ವಿಜಯಕುಮಾರ ಮಡ್ಡೆ, ವಿವಿಧ ತಾಲ್ಲೂಕುಗಳ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT