ಶನಿವಾರ, ಅಕ್ಟೋಬರ್ 1, 2022
20 °C

75 ಅಡಿ ರಾಷ್ಟ್ರಧ್ವಜದ ಮೆರವಣಿಗೆ:  ಜಿ.ಕೆ.ಫೌಂಡೇಷನ್‍ನಿಂದ ರಾಷ್ಟ್ರ ಧ್ವಜ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಇಲ್ಲಿಯ ಜನಸೇವಾ ಶಿಶು ಮಂದಿರ, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು 75 ಅಡಿ ಉದ್ದದ ರಾಷ್ಟ್ರ ಧ್ವಜದ ಮೆರವಣಿಗೆ ನಡೆಸುವ ಮೂಲಕ ಗಮನ ಸೆಳೆದರು.

ಶಾಲೆಯಿಂದ ಆರಂಭವಾದ ಮೆರವಣಿಗೆಯು ಎಲ್‍ಐಸಿ ಕಾಲೊನಿ, ಮಾಧವ ನಗರ, ಪ್ರತಾಪನಗರದ ಪ್ರಮುಖ ಬೀದಿಗಳ ಮೂಲಕ ಹಾಯ್ದು ಪುನಃ ಶಾಲೆಗೆ ಮರಳಿ ಸಮಾರೋಪಗೊಂಡಿತು.
ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದುಕೊಂಡಿದ್ದ ವಿದ್ಯಾರ್ಥಿಗಳು ಬೊಲೋ ಭಾರತ ಮಾತಾ ಕೀ ಜೈ, ವಂದೇ ಮಾತರಂ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದರು. ಬ್ಯಾಂಡ್ ಬಾಜಾ ಮೆರವಣಿಗೆಯ ಮೆರುಗು ಹೆಚ್ಚಿಸಿತು. ದಾರಿ ಉದ್ದಕ್ಕೂ ಜನ ಪುಷ್ಪ ವೃಷ್ಟಿ ಮಾಡಿ ಮೆರವಣಿಗೆಯನ್ನು ಸ್ವಾಗತಿಸಿ ಬರಮಾಡಿಕೊಂಡರು.

ರಾಷ್ಟ್ರ ಧ್ವಜ ವಿತರಣೆ: ಇದಕ್ಕೂ ಮುನ್ನ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಜಿ.ಕೆ. ಫೌಂಡೇಷನ್ ಅಧ್ಯಕ್ಷ ಗುರುನಾಥ ಕೊಳ್ಳೂರು ಅವರು 600 ವಿದ್ಯಾರ್ಥಿಗಳಿಗೆ ಫೌಂಡೇಷನ್‍ನಿಂದ ರಾಷ್ಟ್ರಧ್ವಜ ಉಚಿತವಾಗಿ ವಿತರಿಸಿದರು.

ಅಸಂಖ್ಯಾತ ಹೋರಾಟಗಾರರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ದೊರಕಿದೆ. ಅದನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ಇಂದಿನ ಪೀಳಿಗೆಯ ಮೇಲಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಗುಲಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಬಿ.ಜಿ. ಮೂಲಿಮನಿ ಮಾತನಾಡಿ, ಮಕ್ಕಳು ರಾಷ್ಟ್ರಭಕ್ತಿ ಮೈಗೂಡಿಸಿಕೊಳ್ಳಬೇಕು. ಶ್ರೇಷ್ಠವಾದ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ತಿಳಿಸಿದರು.

ಜನಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ಮಾತನಾಡಿ, ಶಾಲೆಯು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿದೆ. ದೇಶಾಭಿಮಾನ ಮೂಡಿಸುವ ದಿಸೆಯಲ್ಲಿ ವಿದ್ಯಾರ್ಥಿಗಳಿಗೆ ನಿಬಂಧ, ಆಶು ಭಾಷಣ, ದೇಶ ಭಕ್ತಿ ಗೀತೆ ಸೇರಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ನಿವೃತ್ತ ಕರ್ನಲ್ ಶರಣಪ್ಪ ಸಿಕೇನಪುರ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ಶಿವಲಿಂಗಪ್ಪ ಜಲಾದೆ, ಬಿ.ಎಸ್. ಕುದರೆ, ಆಡಳಿತಾಧಿಕಾರಿ ಸೌಭಾಗ್ಯವತಿ, ಸಂಗಮೇಶ ಏಣಕೂರ ಇದ್ದರು. ಶಿಕ್ಷಕಿ ರೇಣುಕಾ ನಿರೂಪಿಸಿದರು. ಶಿಕ್ಷಕ ರಾಹುಲ್ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು