ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಉತ್ಪನ್ನಗಳ ಸಾಗಣೆಗೆ ಗ್ರೀನ್ ಪಾಸ್: ಕೃಷಿ ಸಚಿವ ಬಿ.ಸಿ.ಪಾಟೀಲ

ರೈತ ಮುಖಂಡರ ಸಭೆ
Last Updated 8 ಏಪ್ರಿಲ್ 2020, 13:30 IST
ಅಕ್ಷರ ಗಾತ್ರ

ಬೀದರ್‌: ‘ರೈತರ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ಗ್ರೀನ್ ಪಾಸ್ ವ್ಯವಸ್ಥೆ ಕಲ್ಪಿಸಿದೆ. ಪಾಸ್‌ ಪಡೆದ ರೈತರು ತಮ್ಮ ಫಸಲನ್ನು ನೆರೆಯ ರಾಜ್ಯಗಳಿಗೂ ಸಾಗಣೆ ಮಾಡಬಹುದಾಗಿದೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠರು ಗ್ರೀನ್‌ ಪಾಸ್‌ಗಳನ್ನು ನೀಡಲಿದ್ದಾರೆ. ಪಾಸ್‌ ಪಡೆಯುವಲ್ಲಿ ತೊಂದರೆಯಾದರೆ ಜಿಲ್ಲಾಧಿಕಾರಿ ಗಮನಕ್ಕೆ ತರಬೇಕು’ ಎಂದು ಹೇಳಿದರು.

‘ಹುಮಾನಾಬಾದ್ ಪಟ್ಟಣದಲ್ಲಿ 400 ಮೆಟ್ರಿಕ್ ಟನ್‍ನಷ್ಟು ಕೃಷಿ ಉತ್ಪನ್ನಗಳ ಶೇಖರಣೆಗೆ ಅವಕಾಶವಿದೆ. ಲಾಕ್‌ಡೌನ್ ಅವಧಿ ಮುಗಿಯುವ ವರೆಗೆ ರೈತರು ಇಲ್ಲಿ ಕೃಷಿ ಉತ್ಪನ್ನಗಳನ್ನು ಇಡಬಹುದಾಗಿದೆ. ಇದಕ್ಕೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ರಾಜ್ಯ ಹಾಗೂ ಜಿಲ್ಲಾ ಗಡಿಗಳನ್ನು ತೆರೆದು ಆಹಾರ ಧಾನ್ಯ, ಹಣ್ಣು, ತರಕಾರಿ ಸೇರಿದಂತೆ ಕೃಷಿ ಉತ್ಪನ್ನಗಳ ಸರಕು ಸಾಗಣೆ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಲಾಕ್‍ಡೌನ್ ಇದ್ದಾಗಲೂ ಕೃಷಿ ಚಟುವಟಿಕೆ ನಡೆಯಲು ಅನುಮತಿ ನೀಡಲಾಗಿದೆ. ಸಾಕಷ್ಟು ಅಂತರ ಕಾಯ್ದುಕೊಂಡು ಕೃಷಿಕರು ತಮ್ಮ ಕೃಷಿ ಚಟುವಟಿಕೆಗಳನ್ನು ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

‘ಮುಂಗಾರು ಬಿತ್ತನೆಗಾಗಿ ರೈತರಿಗೆ ಸಾಕಾಗುಷ್ಟು ಬಿತ್ತನೆ ಬೀಜ ಮತ್ತು ಗೊಬ್ಬರ ಪೂರೈಕೆ ಮಾಡಲು ಕೃಷಿ ಇಲಾಖೆಯು ಸಿದ್ಧವಾಗಿದೆ. ಕೃಷಿ ಯಂತ್ರೋಪಕರಣಗಳ ದುರಸ್ತಿ ಮಾಡುವ, ಪೈಪ್ ಮತ್ತು ಕೇಬಲ್ ಸೇರಿದಂತೆ ಕೃಷಿಗೆ ಸಂಬಂಧಿಸಿದ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ’ ಎಂದು ಸಚಿವ ಪಾಟೀಲ ತಿಳಿಸಿದರು.

ಶಾಸಕ ಬಂಡೆಪ್ಪ ಕಾಶೆಂಪೂರ ಮಾತನಾಡಿ, ‘ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳ ಮಾರಾಟಕ್ಕೆ ಸರ್ಕಾರ ವ್ಯವಸ್ಥೆ ಮಾಡಬೇಕು’ ಎಂದು ಮನವಿ ಮಾಡಿದರು.

ಶಾಸಕ ರಾಜಶೇಖರ ಪಾಟೀಲ ಮಾತನಾಡಿ, ‘ಸಕ್ಕರೆ ಕಾರ್ಖಾನೆಗಳು ರೈತರಿಗೆ ಕಬ್ಬಿನ ಬಾಕಿ ಪಾವತಿಸಿಲ್ಲ.
ಹಣ ಪಾವತಿಗೆ ಸರ್ಕಾರ ಕ್ರಮಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.

‘ಕಬ್ಬಿನ ಕಾರ್ಖಾನೆಗಳ ಮುಖ್ಯಸ್ಥರೊಂದಿಗೆ ಚರ್ಚಿಸಿ ರೈತರ ಪಾವತಿ ಪಾವತಿಗೆ ಸೂಚಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಹೇಳಿದರು.

‘ಈಗಾಗಲೇ ಸಕ್ಕರೆ ಕಾರ್ಖಾನೆಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ರೈತರಿಗೆ ತುರ್ತಾಗಿ ಹಣ ಪಾವತಿ ಮಾಡದಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಚ್‌.ಆರ್‌.ಮಹಾದೇವ ಪ್ರತಿಕ್ರಿಯಿಸಿದರು.

ಶಾಸಕ ಬಿ.ನಾರಾಯಣರಾವ್ ಮಾತನಾಡಿ, ‘ಈಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಬಸವಕಲ್ಯಾಣದ ತಾಲ್ಲೂಕಿನಲ್ಲಿ ದ್ರಾಕ್ಷಿ ಮತ್ತು ಇನ್ನಿತರ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ. ಇದಕ್ಕೆ ಪರಿಹಾರ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

‘ಕೃಷಿ ಉತ್ಪನ್ನಗಳ ಮಾರಾಟಕ್ಕೆ ಜಿಲ್ಲೆಯಲ್ಲಿ ಅವಕಾಶ ಕಲ್ಪಿಸಲಾಗುತ್ತಿದೆ. ಕಲ್ಲಂಗಡಿ ಮತ್ತು ಟೊಮೆಟೊ ಮಾರಾಟಕ್ಕೆ ಅವಕಾಶ ಮಾಡಿಕೊಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಪ್ರಾದೇಶಿಕ ಆಯುಕ್ತರಿಗೂ ತಿಳಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಸಂಸದ ಭಗವಂತ ಖೂಬಾ, ಸಂಸದ ಉಮೇಶ ಜಾಧವ್, ಶಾಸಕರಾದ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಣರಾವ್ ಬುಳ್ಳಾ, ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸಿ.ವಿದ್ಯಾನಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT