ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18 ಲಕ್ಷ ಆರೋಗ್ಯ ಕಾರ್ಡ್‌ ವಿತರಿಸಿ: ಸಂಸದ ಭಗವಂತ ಖೂಬಾ

ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಪಾಕ್ಷಿಕ ಆಚರಣೆ ಕಾರ್ಯಕ್ರಮ
Last Updated 23 ಸೆಪ್ಟೆಂಬರ್ 2019, 11:53 IST
ಅಕ್ಷರ ಗಾತ್ರ

ಬೀದರ್‌: ‘ಅಧಿಕಾರಿಗಳು ಪರಿಶ್ರಮ ಪಟ್ಟರೆ ಮಾತ್ರ ಸರ್ಕಾರದ ಯೋಜನೆಗಳು ಬಡವರ ಮನೆ ಬಾಗಿಲಿಗೆ ತಲುಪಲು ಸಾಧ್ಯ ಇದೆ. ಜಿಲ್ಲೆಯಲ್ಲಿ ಮೂರು ತಿಂಗಳಲ್ಲಿ 18 ಲಕ್ಷ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಬೇಕು’ ಎಂದು ಸಂಸದ ಭಗವಂತ ಖೂಬಾ ಹೇಳಿದರು.

ಇಲ್ಲಿಯ ಬ್ರಿಮ್ಸ್ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬ್ರಿಮ್ಸ್ ಆಸ್ಪತ್ರೆ ಹಾಗೂ ಸುವರ್ಣ ಆರೋಗ್ಯ ಟ್ರಸ್ಟ್ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಪಾಕ್ಷಿಕ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಒಂದು ವರ್ಷದಲ್ಲಿ ಕೇವಲ 2.40 ಲಕ್ಷ ಜನರ ಆರೋಗ್ಯ ಕಾರ್ಡ್‌ ಮಾಡಿದ್ದಾರೆ. ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಅನುಷ್ಠಾನದಲ್ಲಿ ಶೇಕಡ 15 ರಷ್ಟು ಸಹ ಸಾಧನೆ ಮಾಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಜಿಲ್ಲೆಯಲ್ಲಿ 70 ಸರ್ಕಾರಿ ಆಸ್ಪತ್ರೆ ಹಾಗೂ 25 ಕಾಮನ್‌ ಸರ್ವಿಸ್‌ ಸೆಂಟರ್ಗಳು ಇವೆ. ಕಾಮನ್‌ ಸರ್ವಿಸ್‌ ಸೆಂಟರ್‌ಗಳ ಸಂಖ್ಯೆಯನ್ನು ನೂರಕ್ಕೆ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇಂಟರ್ನೆಟ್‌, ವಿದ್ಯುತ್‌ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ 1,350 ಆಶಾ ಕಾರ್ಯಕರ್ತೆಯರು, 500 ಎಎನ್‌ಎಂ, 800 ಅಂಗನವಾಡಿ ಕಾರ್ಯಕರ್ತೆಯರು ಇದ್ದಾರೆ. ಇವರ ಸಹಾಯದಿಂದ ಯೋಜನೆಯನ್ನು ಪ್ರತಿ ಮನೆಗೆ ತಲುಪಿಸಬೇಕು. ಪ್ರತಿಯೊಬ್ಬರಿಗೆ ಆರೋಗ್ಯ ಸೇವೆ ದೊರಕುವಂತೆ ಮಾಡಬೇಕು’ ಎಂದು ಹೇಳಿದರು.

‘ನಿತ್ಯ ಎಷ್ಟು ಆರೋಗ್ಯ ಕಾರ್ಡ್‌ಗಳನ್ನು ಮಾಡಲಾಗಿದೆ ಎನ್ನುವ ಕುರಿತು ಪ್ರತಿದಿನ ನನಗೆ ಮಾಹಿತಿ ಕೊಡಬೇಕು. ಯೋಜನೆ ಅನುಷ್ಠಾನದಲ್ಲಿ ತೊಡಕುಗಳು ಕಂಡು ಬಂದರೆ ತಕ್ಷಣ ನನ್ನ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಅನೇಕ ಮಹಿಳೆಯರು, ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅವರ ಬಗ್ಗೆ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಕಾಳಜಿ ವಹಿಸಬೇಕು. ಕೇಂದ್ರ ಸರ್ಕಾರ ಸ್ವಚ್ಛ ಭಾರತಕ್ಕೆ ಆದ್ಯತೆ ನೀಡಿದಂತೆ ಸ್ವಸ್ಥ ಭಾರತಕ್ಕೂ ಆದ್ಯತೆ ನೀಡಿದೆ. ಅಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು.

‘ಮಹಾತ್ಮ ಗಾಂಧೀಜಿ ಅವರು ದುಡಿಮೆ ಇಲ್ಲದ ಸಂಪತ್ತು, ಆತ್ಮಸಾಕ್ಷಿ ಇಲ್ಲದ ಭೋಗ, ಚಾರಿತ್ರ್ಯವಿಲ್ಲದ ಜ್ಞಾನ, ಇಲ್ಲದ ವ್ಯಾಪಾರ, ಮಾನವೀಯತೆ ಇಲ್ಲದ ವಿಜ್ಞಾನ, ತ್ಯಾಗವಿಲ್ಲದ ಧರ್ಮ ಹಾಗೂ ನೀತಿ ಇಲ್ಲದ ರಾಜಕೀಯ ಸಮಾಜಕ್ಕೆ ಮಾರಕ ಎಂದು ಹೇಳಿದ್ದಾರೆ. ಈ ಏಳು ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯನಿರ್ವಹಿಸುವ ಅಗತ್ಯ ಇದೆ’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎ.ಜಬ್ಬಾರ್, ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ವಿಜಯಕುಮಾರ ಅಂತಪನೋರ್, ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಜಿಲ್ಲಾ ನೋಡಲ್‌ ಅಧಿಕಾರಿ ಡಾ.ರಾಜಶೇಖರ ಪಾಟೀಲ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸಂಯೋಜಕ ಡಾ.ನಂದಕುಮಾರ, ಬ್ರಿಮ್ಸ್‌ ನಿರ್ದೇಶಕ ಡಾ.ಎಸ್‌.ವಿ.ಕ್ಷೀರಸಾಗರ ಇದ್ದರು.

ಜಿಲ್ಲಾ ತಾಯಿ, ಮಕ್ಕಳ ಆರೋಗ್ಯ ಅಧಿಕಾರಿ ಡಾ.ರವೀಂದ್ರ ಸಿರಸಗೆ, ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಉಮೇಶ ಬಿರಾದಾರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುಭಾಷ ಮುಧಾಳೆ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಇಂದುಮತಿ ಪಾಟೀಲ, ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿ ದೀಪಾ ಖಂಡ್ರೆ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಅನಿಲ ಚಿಂತಾಮಣಿ ಪಾಲ್ಗೊಂಡಿದ್ದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರತಿಕಾಂತ ಸ್ವಾಮಿ ಸ್ವಾಗತಿಸಿದರು. ಟಿ.ಎ.ಮಚ್ಚೆ ಕಾರ್ಯಕ್ರಮ ನಿರೂಪಿಸಿದರು. ನಂದಕುಮಾರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT