ಗುರುವಾರ , ಏಪ್ರಿಲ್ 2, 2020
19 °C
ಅಧಿಕಾರಿಗಳಿಗೆ ಸಂಸದ ಭಗವಂತ ಖೂಬಾ ನಿರ್ದೇಶನ

ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸುವ ಮೂಲಕ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು’ ಎಂದು ಸಂಸದ ಭಗವಂತ ಖೂಬಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ, ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಜಲಮೂಲಗಳಿರುವ ಕಡೆ ನೀರು ಪೂರೈಕೆಯಲ್ಲಿರುವ ಸಮಸ್ಯೆಗಳನ್ನು ನಿವಾರಿಸಬೇಕು. ಕುಡಿಯುವ ನೀರಿನ ತೀವ್ರ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ವಹಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ ಮಾತನಾಡಿ,‘ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಗಂಭೀರ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿ ಎಲ್ಲ ತಾಲ್ಲೂಕುಗಳಲ್ಲಿ ಟ್ಯಾಂಕರ್‌ಗಳನ್ನು ಪಡೆಯಲು ಟೆಂಡರ್ ಕರೆಯಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬ್ರಿಮ್ಸ್ ನಿರ್ದೇಶಕ ಡಾ.ಶಿವಕುಮಾರ ಮಾತನಾಡಿ, ‘ಬ್ರಿಮ್ಸ್ ಆಸ್ಪತ್ರೆಯಲ್ಲಿರುವ ಆರು ಲಿಫ್ಟ್‌ಗಳಲ್ಲಿ ಒಂದು ಮಾತ್ರ ಕಾರ್ಯನಿರ್ವವಹಿಸುತ್ತಿದೆ. ಉಳಿದ ಲಿಫ್ಟ್‌ಗಳನ್ನು ಸರಿಪಡಿಸಿದಲ್ಲಿ ರೋಗಿಗಳಿಗೆ ಅನುಕೂಲವಾಗಲಿದೆ’ ಎಂದರು.

‘ಅಧಿಕ ಸಾಮರ್ಥ್ಯದ ವಿದ್ಯುತ್ ಸಂಪರ್ಕ ಕಲ್ಪಿಸಿ, ಆಸ್ಪತ್ರೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಹೊಸ ನಿರ್ದೇಶಕರು ಬಂದ ನಂತರ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಾಕಷ್ಟು ಸುಧಾರಣೆಗಳು ಕಂಡು ಬಂದಿವೆ. ಆದರೂ ಆಸ್ಪತ್ರೆಯಲ್ಲಿ ಯಾವುದೇ ರೀತಿಯ ಅವ್ಯವಹಾರಗಳಿಗೆ ಅವಕಾಶ ಇಲ್ಲದಂತೆ ನೋಡಿಕೊಳ್ಳಬೇಕು’ ಎಂದು ಸಂಸದರು ಹೇಳಿದರು.
ಬ್ರಿಮ್ಸ್ ಆಸ್ಪತ್ರೆಯ ಸಿಇಒ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ನಿತ್ಯ ಆಸ್ಪತ್ರೆಗೆ ಭೇಟಿ ಕೊಡಬೇಕು. ಸಣ್ಣಪುಟ್ಟ ಸಮಸ್ಯೆಗಳಿದ್ದಲ್ಲಿ ಸ್ಥಳದಲ್ಲೇ ಇತ್ಯರ್ಥಪಡಿಸಬೇಕು’ ಎಂದು ಸೂಚಿಸಿದರು.
ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ.ರೆಡ್ಡಿ ಅವರು ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಪ್ರಗತಿಯ ಮಾಹಿತಿ ನೀಡಿದರು.
‘ನಕಲಿ ವೈದ್ಯರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈವರೆಗೆ ನಕಲಿ ವೈದ್ಯರ 25 ಆಸ್ಪತ್ರೆಗಳನ್ನು ಮುಚ್ಚಿಸಲಾಗಿದೆ. 295 ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ’ ಎಂದು ತಿಳಿಸಿದರು.
‘ರೈತರ ಆ್ಯಪ್ ಬಗೆಗೆ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ಮಾಡಬೇಕು. ಬೆಳೆ ವಿಮೆ ಯೋಜನೆ ಮಾಹಿತಿ ನೀಡಿ ನೋಂದಣಿ ಮಾಡಿಸಬೇಕು’ ಎಂದು ಖೂಬಾ ಹೇಳಿದರು.
ಆರೋಗ್ಯ ಇಲಾಖೆ, ಆಹಾರ ಇಲಾಖೆ, ತೋಟಗಾರಿಕೆ ಇಲಾಖೆ, ಲೋಕೋಪಯೋಗಿ ಇಲಾಖೆ, ಜೆಸ್ಕಾಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು.

ಶಾಸಕ ಬಿ.ನಾರಾಯಣರಾವ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್., ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಅಕ್ಷಯ ಶ್ರೀಧರ ಇದ್ದರು.

...........BOX-1.........

ಸರ್ಕಾರದ ಯೋಜನೆ ಜನರಿಗೆ ತಲುಪಿಸಿ
ಬೀದರ್:‘ಅಧಿಕಾರಿಗಳು ಕೇಂದ್ರ ಸರ್ಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸುವ ಕಾರ್ಯವನ್ನು ಆಸಕ್ತಿಯಿಂದ ಮಾಡಬೇಕು’ ಎಂದು ಸಂಸದ ಭಗವಂತ ಖೂಬಾ ಹೇಳಿದರು.

‘ಸ್ವಂತ ಮನೆ ಇದ್ದವರಿಗೂ ವಸತಿ ಯೋಜನೆಯಡಿ ಹೊಸ ಮನೆ ಮಂಜೂರು ಮಾಡಿರುವುದು, ಮನೆ ಕಟ್ಟದೇ ಹಣ ಪಡೆದಿರುವುದು, ಒಂದೇ ಫಲಾನುಭವಿಗೆ ಎರಡೆರಡು ಬಾರಿ ಮನೆ ಮಂಜೂರಾತಿ ಮಾಡಿರುವ ದೂರುಗಳು ಇವೆ. ಈ ಬಗ್ಗೆ ಪರಿಶೀಲಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಲ್ಲಿ ಅವ್ಯವಹಾರ ನಡೆಸಿರುವ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡು ವರದಿ ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು