ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಪಸಂಖ್ಯಾತರ ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿ

Last Updated 27 ಫೆಬ್ರುವರಿ 2020, 15:34 IST
ಅಕ್ಷರ ಗಾತ್ರ

ಬೀದರ್: ‘ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನ ಕುರಿತು ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಅಲ್ಪಸಂಖ್ಯಾತರಲ್ಲಿ 1,043 ಅಂಗವಿಕಲ ಮಕ್ಕಳಿದ್ದಾರೆ. ಇವರಲ್ಲಿ 361 ಮಕ್ಕಳಿಗೆ ಮಾಸಾಶನ ದೊರೆಯುತ್ತಿದೆ’ ಎಂದು ಅಧಿಕಾರಿ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಎಲ್ಲ ಅಂಗವಿಕಲ ಮಕ್ಕಳಿಗೂ ಮಾಸಾಶನ ಸೌಲಭ್ಯ ಕಲ್ಪಿಸಬೇಕು. ಗಾಲಿ ಕುರ್ಚಿ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ಜಿಲ್ಲೆಯಲ್ಲಿ ಇರುವ ಎಲ್ಲ ಮದರಸಾ ಕೇಂದ್ರಗಳ ನೋಂದಣಿ ಆಗಬೇಕು. ಅಲ್ಲಿ ಶಿಕ್ಷಣ ಪಡೆಯುವ ಮಕ್ಕಳ ದಾಖಲಾತಿಗಳ ನಿರ್ವಹಣೆ ತಪ್ಪದೇ ಮಾಡಬೇಕು’ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ್‌ನ ಡಿಆರ್‌ಡಿಎ ವಿಭಾಗ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಗರಸಭೆ, ಕೊಳಚೆ ಮಂಡಳಿ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿನ ಅಲ್ಪಸಂಖ್ಯಾತರ ಯೋಜನೆಗಳ ಪ್ರಗತಿಯ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅವಿನಾಶ ಎಂ.ಎ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಚ್.ಸಿ.ಚಂದ್ರಶೇಖರ, ನಗರಸಭೆಯ ಆಯುಕ್ತ ಬಿ.ಬಸಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT