ಬೀದರ್: ಶುದ್ಧ ಕುಡಿಯುವ ನೀರು ಪೂರೈಕೆ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ ತಾಲ್ಲೂಕಿನ ಚಟ್ನಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ದೇವಪ್ಪ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ. ಭಾನುವಾರ ಸಂಜೆ ಆದೇಶ ಹೊರಡಿಸಿದ್ದಾರೆ.
‘ಕಲುಷಿತ ನೀರು ಸೇವಿಸಿ ತಾಲ್ಲೂಕಿನ ಬರೀದಾಬಾದ್ ಗ್ರಾಮದಲ್ಲಿ ಶನಿವಾರ ಇಬ್ಬರು ಅಸ್ವಸ್ಥರಾದ ವಿಷಯ ಗಂಭೀರವಾಗಿ ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪಿಡಿಒ ದೇವಪ್ಪ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಬರೀದಾಬಾದ್ ಹಾಗೂ ಚಿಟಗುಪ್ಪ ತಾಲ್ಲೂಕಿನ ಬೆಳಕೇರಾ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 40 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಭಾನುವಾರ ಬೆಳಿಗ್ಗೆ ಬ್ರಿಮ್ಸ್‌ಗೆ ಭೇಟಿ ನೀಡಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಸಂಜೆ ಈ ಕುರಿತು ಸಭೆ ನಡೆಸಿ, ಶುದ್ಧ ಕುಡಿವ ನೀರು ಪೂರೈಸಬೇಕು. ಕರ್ತವ್ಯಲೋಪ ಎಸಗಿದವರ ವಿರುದ್ಧ ಕ್ರಮ ಜರುಗಿಸಬೇಕೆಂದು ಸೂಚಿಸಿದ ಬೆನ್ನಲ್ಲೇ ಈ ಆದೇಶ ಹೊರಬಿದ್ದಿದೆ.