ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಹೆಚ್ಚಿದ ಬಿಸಿಲು, ಝಳ; ಎಚ್ಚರಿಕೆಗೆ ಸಲಹೆ

Published 2 ಮೇ 2024, 14:25 IST
Last Updated 2 ಮೇ 2024, 14:25 IST
ಅಕ್ಷರ ಗಾತ್ರ

ಬೀದರ್‌: ‘ಬಿಸಿಲು ಹಾಗೂ ಅದರ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತೀವ್ರ ಶಾಖದ ಅಲೆಗಳಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸಲಹೆ ನೀಡಿದ್ದಾರೆ.

‘ವಿಶೇಷವಾಗಿ ಮಧ್ಯಾಹ್ನ 12 ರಿಂದ 3ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಹೆಚ್ಚು ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಕೊಡೆ/ಛತ್ರಿ ಬಳಸಬೇಕು. ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಿಸಬೇಕು. ಹಗುರವಾದ, ತಿಳಿ ಬಣ್ಣದ, ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸಿ, ರಕ್ಷಣಾತ್ಮಕ ಕನ್ನಡಕಗಳು, ಛತ್ರಿ ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಿ’ ಎಂದು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಹಿರಿಯ ನಾಗರಿಕರು, ಮಕ್ಕಳು ಹೆಚ್ಚು ನೀರು ಕುಡಿಯಬೇಕು. ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್‌ ತಂಪು ಪಾನೀಯಗಳನ್ನು ತಪ್ಪಿಸಿ, ಸಾಕಷ್ಟು ನೀರು ಕುಡಿಯಬೇಕು. ಮಜ್ಜಿಗೆ, ಗ್ಲೂಕೋಸ್, ಒ.ಆರ್.ಎಸ್.ತಂಪು ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು. ಹೆಚ್ಚಿನ ಪ್ರೋಟೀನ್ ಆಹಾರವನ್ನು ಸೇವಿಸಬಾರದು. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಬೇಕು’ ಎಂದು ಸಲಹೆ ನೀಡಿದ್ದಾರೆ.

‘ಶಾಖಾಘಾತದ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಗಳನ್ನು ತಂಪಾದ ಜಾಗದಲ್ಲಿರಿಸಬೇಕು. ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಹತ್ತಿ ಬಟ್ಟೆಯನ್ನು ಹೊಂದಿರುವಂತೆ ನೋಡಿಕೊಂಡು ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಮಾಡಬೇಕು. ಐಸ್ ಪ್ಯಾಕ್‌ಗಳನ್ನು ಉಪಯೋಗಿಸಬಹುದು. ಒ.ಆರ್.ಎಸ್., ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ, ಶಾಖ, ತರಂಗದ ಪರಿಣಾಮಗಳನ್ನು ತಪ್ಪಿಸಲು ಯಾವಾಗಲೂ ನೀರಿನ ಬಾಟಲಿಯನ್ನು ಜತೆಗಿರಿಸಿಕೊಳ್ಳಬೇಕು. ನಿಂಬೆ ನೀರು, ಮಜ್ಜಿಗೆ, ತೆಂಗಿನ ನೀರು, ತಾಜಾ ಹಣ್ಣಿನ ರಸವನ್ನು ನಿಯಮಿತವಾಗಿ ಸೇವಿಸಬೇಕು’ ಎಂದು ತಿಳಿಸಿದ್ದಾರೆ.

‘ರೈತರು, ಕೃಷಿ ಕಾರ್ಮಿಕರು ಹೊರಗೆ ಕೆಲಸ ಮಾಡುತ್ತಿದ್ದರೆ ಟೋಪಿ ಅಥವಾ ಛತ್ರಿ ಬಳಸಬೇಕು. ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆ ಬಟ್ಟೆಯನ್ನು ಉಪಯೋಗಿಸಬೇಕು. ಪ್ರಯಾಣಿಸುವಾಗ ನೀರು ಜತೆಗಿರಬೇಕು. ಬೀದರ್‌ ಜಿಲ್ಲೆಯ ಎಂಟು ತಾಲ್ಲೂಕುಗಳನ್ನು ಸರ್ಕಾರ ಬರಪೀಡಿತ ಪ್ರದೇಶವೆಂದು ಘೋಷಿಸಿದೆ. ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಉದ್ಭವಿಸಿದರೆ ತಕ್ಷಣ ಸ್ಪಂದಿಸಲು ತಹಸೀಲ್ದಾರ್‌ ಮತ್ತು ತಾಲ್ಲೂಕು ಪಂಚಾಯಿತಿ ಕಾರ‍್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಗ್ರಾಮ ಮಟ್ಟ ಮತ್ತು ತಾಲ್ಲೂಕು ಮಟ್ಟದ ಟಾಸ್ಕ್‌ಫೋರ್ಸ್‌ ರಚಿಸಲಾಗಿದೆ. ಜಿಲ್ಲೆಯಲ್ಲಿ ಬರಗಾಲ ನಿರ್ವಹಣೆಗೆ ಅನುದಾನದ ಕೊರತೆ ಇಲ್ಲ’ ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯಲ್ಲಿ 41 ಡಿಗ್ರಿ ಸೆಲ್ಸಿಯಸ್‌

ಬೀದರ್‌ ಜಿಲ್ಲೆಯಲ್ಲಿ ಗುರುವಾರ (ಮೇ 2) 41 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಹಾಗೂ 25 ಡಿಗ್ರಿ ಕನಿಷ್ಠ ತಾಪಮಾನ ದಾಖಲಾಗಿದೆ. ಮೇ 5ರ ತನಕ ಜಿಲ್ಲೆಯಲ್ಲಿ 40ರಿಂದ 41 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬಿಸಿ ಗಾಳಿಯೂ ಹೆಚ್ಚಲಿದ್ದು ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT