ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಗೆ ಸಚಿವರ ದಂಡು, ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯಮಟ್ಟದ ಪಶು ಮೇಳ, ನಾಗರಿಕ ವಿಮಾನ ನಿಲ್ದಾಣ ಉದ್ಘಾಟನೆ ಇಂದು
Last Updated 7 ಫೆಬ್ರುವರಿ 2020, 9:51 IST
ಅಕ್ಷರ ಗಾತ್ರ

ಬೀದರ್‌: ನಗರದಲ್ಲಿ ಫೆಬ್ರುವರಿ 7 ರಂದು ನಡೆಯಲಿರುವ ಕಲ್ಯಾಣ ಕರ್ನಾಟಕದ ಎರಡನೆಯ ನಾಗರಿಕ ವಿಮಾನ ನಿಲ್ದಾಣದ ಉದ್ಘಾಟನೆಗೆ ಕೇಂದ್ರ ಹಾಗೂ ರಾಜ್ಯ ಸಚಿವರ ದಂಡೇ ಬರುತ್ತಿದೆ.

ನಗರದ ಹೊರ ವಲಯದಲ್ಲಿ ₹ 12.28 ಕೋಟಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ ಬೀದರ್‌ ವಿಮಾನ ನಿಲ್ದಾಣ ಅಭಿವೃದ್ಧಿ ಮಾಡಲಾಗಿದೆ. 2008ರಲ್ಲಿ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನಾಗರಿಕ ವಿಮಾನ ನಿಲ್ದಾಣ ನಿರ್ಮಾಣಕ್ಕೆ  ಚಾಲನೆ ದೊರೆತಿತ್ತು. ಇದೀಗ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೇ ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ.

ವಿಮಾನ ನಿಲ್ದಾಣ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವ ಹರ್ದೀಪ್ ಸಿಂಗ್ ಪೂರಿ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಅಶ್ವಥ್ ನಾರಾಯಣ, ಬೃಹತ್ ಮತ್ತು ಮಾಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರ ಹೆಸರುಗಳು ಇವೆ.

ಶಾಸಕ ರಹೀಂ ಖಾನ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌, ಸಂಸದ ಭಗವಂತ ಖೂಬಾ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಪ್ರದೀಪ ಸಿಂಗ್ ಖರೋಲಾ, ಜಂಟಿ ಕಾರ್ಯದರ್ಶಿ ಉಷಾ ಪಿ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್, ಕೆಎಸ್‍ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ ಗಂಗಾರಾಮ್ ಬಡೇರಿಯಾ, ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಪಾಲ್ಗೊಳ್ಳಲಿದ್ದಾರೆ.

ಮುಖ್ಯಮಂತ್ರಿ ಕಾರ್ಯಕ್ರಮ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಫೆಬ್ರುವರಿ 7 ರಂದು ರಾಜ್ಯಮಟ್ಟದ ಪಶು ಮೇಳ, ವಚನ ವಿಜಯೋತ್ಸವ ಸೇರಿದಂತೆ ಒಟ್ಟು ನಾಲ್ಕು ಪ್ರಮುಖ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಮುಖ್ಯಮಂತ್ರಿ ಶುಕ್ರವಾರ ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದಲ್ಲಿ ಬೀದರ್‌ಗೆ ಬರಲಿದ್ದಾರೆ. ಬೆಳಿಗ್ಗೆ 11.30ಕ್ಕೆ ನಗರದ ಚಿದ್ರಿ ಸಮೀಪದ ಬೀದರ್‌ ನಾಗರಿಕ ವಿಮಾನ ನಿಲ್ದಾಣ ಉದ್ಘಾಟಿಸುವರು. ಮಧ್ಯಾಹ್ನ 12.15ಕ್ಕೆ ತಾಲ್ಲೂಕಿನ ನಂದಿನಗರದ ಪಶು, ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪಶು ಮೇಳಕ್ಕೆ ಚಾಲನೆ ನೀಡುವರು.

ಮಧ್ಯಾಹ್ನ 2.30ಕ್ಕೆ ಬೀದರ್‌ನ ‘ಪೂಜ್ಯ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗ ಮಂದಿರ’ದ ಮರು ನಾಮಕರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಮಧ್ಯಾಹ್ನ 2.45ಕ್ಕೆ ಬಸವ ಸೇವಾ ಪ್ರತಿಷ್ಠಾನದ ವತಿಯಿಂದ ಬಸವಗಿರಿಯಲ್ಲಿ ಆಯೋಜಿಸಿರುವ ಮೂರು ದಿನಗಳ ವಚನ ವಿಜಯೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಬಿಗಿ ಪೊಲೀಸ್‌ ಬಂದೋಬಸ್ತ್

ಬೀದರ್‌ ತಾಲ್ಲೂಕಿನ ನಂದಿನಗರದ ಪಶು, ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪಶು ಮೇಳದಲ್ಲಿ ಸುಮಾರು ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇರುವ ಕಾರಣ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಆರು ಡಿವೈಎಸ್‌ಪಿ, 19 ಇನ್‌ಸ್ಪೆಕ್ಟರ್, 55 ಸಬ್‌ ಇನ್‌ಸ್ಪೆಕ್ಟರ್, 104 ಎಎಸ್‌ಐ, 608 ಕಾನ್‌ಸ್ಟೆಬಲ್, 88 ಮಹಿಳಾ ಪೊಲೀಸರು, 300 ಗೃಹರಕ್ಷಕ ದಳ ಸಿಬ್ಬಂದಿ, ಕೆಎಸ್‌ಆರ್‌ಪಿಯ ಐದು ಹಾಗೂ ಜಿಲ್ಲಾ ಸಶಸ್ತ್ರಪಡೆಯ 5 ತುಕ್ಕಡಿಗಳನ್ನು ನಿಯೋಜಿಸಲಾಗಿದೆ.

‘ಜಿಲ್ಲೆಯ ಗಡಿಯಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯ ಒಳಗೆ ಬರುವ ಹಾಗೂ ಹೊರ ಹೋಗುವ ವಾಹನಗಳ ಮೇಲೆ ನಿಗಾ ಇಡಲಾಗಿದೆ. ಆಯಕಟ್ಟಿನ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನೂ ಅಳವಡಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್‌.ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT