ಸೋಮವಾರ, ಏಪ್ರಿಲ್ 6, 2020
19 °C
ಕೋವಿಡ್‌ 19 ಸೋಂಕು: ಜಿಲ್ಲಾ ಮಟ್ಟದ ಅಧಿಕಾರಿಗಳ ತುರ್ತು ಸಭೆ

ವಲಸಿಗರ ಮೇಲೆ ನಿಗಾಕ್ಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ‘ವಲಸಿಗರು ಹಾಗೂ ವಿದೇಶದಿಂದ ಬರುವ ವ್ಯಕ್ತಿಗಳ ಮೇಲೆ ನಿಗಾವಹಿಸಬೇಕು. ಹೊರ ರಾಜ್ಯಗಳಿಂದ ಬರುವ ವ್ಯಕ್ತಿಗಳನ್ನು ಸಹ ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಿ ಕೋವಿಡ್‌ 19 ಸೋಂಕು ಬರದಂತೆ ಎಚ್ಚರ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಎಚ್‌.ಆರ್.ಮಹಾದೇವ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವೈದ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ‘ಸೋಂಕು ಇತರರಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕಾದ ಹಿನ್ನೆಲೆಯಲ್ಲಿ ಪೊಲೀಸರ ಸಹಕಾರ ಪಡೆಯಬೇಕು’ ಎಂದರು.

‘ಕೋವಿಡ್‌ 19 ಸೋಂಕು ಇರುವ ಲಕ್ಷಣ ಮೇಲ್ನೋಟಕ್ಕೆ ಕಂಡು ಬಂದರೆ ತಕ್ಷಣ ಅವರ ರಕ್ತ ಮಾದರಿ ಪಡೆದು ಪ್ರಯೋಗಾಯಲಕ್ಕೆ ಕಳಿಸಿ ಖಚಿತಪಡಿಸಿಕೊಳ್ಳಬೇಕು. ಗುಣಮುಖವಾಗುವವರೆಗೆ ವಿಶೇಷ ಚಿಕಿತ್ಸಾ ವಾರ್ಡ್‌ನಲ್ಲಿಯೇ ಸೋಂಕಿತರನ್ನು ಇರಿಸಬೇಕು’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ಕೋವಿಡ್‌ 19 ಸೋಂಕು ಕಂಡು ಬಂದ ವ್ಯಕ್ತಿಗಳಿಗೆ ಬ್ರಿಮ್ಸ್ ಆಸ್ಪತ್ರೆಯಲ್ಲಿ ತೆರೆಯಲಾದ ವಿಶೇಷ ಚಿಕಿತ್ಸಾ ವಾರ್ಡ್‌ಗಳಲ್ಲಿ ಸರಿಯಾಗಿ ಚಿಕಿತ್ಸೆ ನೀಡಬೇಕು. ಈಗಾಗಲೇ ಮೂವರಿಗೆ ಚಿಕಿತ್ಸೆ ನೀಡಲಾಗಿದೆ. ತಾಲ್ಲೂಕು ಕೇಂದ್ರಗಳಲ್ಲೂ ವಿಶೇಷ ವಾರ್ಡ್‌ ವ್ಯವಸ್ಥೆ ಮಾಡಬೇಕು’ ಎಂದು ಸೂಚನೆ ನೀಡಿದರು.

‘ಕೋವಿಡ್‌ 19 ಶಂಕಿತ ಮೂವರಿಗೆ ಜ್ವರ, ನೆಗಡಿ, ಕೆಮ್ಮು ಇರುವ ಹಿನ್ನೆಲೆಯಲ್ಲಿ ಬ್ರಿಮ್ಸನ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಗಳ ರಕ್ತ ಮತ್ತು ಕಫದ ಮಾದರಿಯನ್ನು ಪುಣೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದರು.

‘ಶಂಕಿತರಿಗೆ ಈಗ ಚಿಕಿತ್ಸೆ ಕೊಡಿಸುತ್ತಿರುವ ವೈದ್ಯರು ಮತ್ತು ಸಿಬ್ಬಂದಿ ಮೊದಲು ಮುನ್ನೆಚ್ಚರಿಕೆ ವಹಿಸಬೇಕು. ಕಡ್ಡಾಯವಾಗಿ ಎನ್–95 ಮಾಸ್ಕ್ ಬಳಸುವುದು ಸೇರಿ ಇನ್ನಿತರ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

‘ಸೋಂಕಿತರ ಕೈ ಕುಲುಕಿದಲ್ಲಿ, ಕೆಮ್ಮಿದರೆ, ಸೀನಿದರೆ ಸೋಂಕು ಹರಡುತ್ತದೆ. ಜನರು ಕೆಮ್ಮುವಾಗ, ಸೀನುವಾಗ ಕರವಸ್ತ್ರ ಬಳಸಬೇಕು. ಪ್ರತಿದಿನ ಕರವಸ್ತ್ರವನ್ನು ಬಿಸಿ ನೀರಿನಲ್ಲಿ ತೊಳೆದು ಬಳಸಬೇಕು. ಸರಿಯಾಗಿ ಕೈ ತೊಳೆದುಕೊಳ್ಳಬೇಕು. ಶುಚಿತ್ವ ಕಾಯ್ದುಕೊಳ್ಳಬೇಕು’ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

‘ಜನರು ಸಾಧ್ಯವಾದಷ್ಟು ಮಾಂಸಾಹಾರ ಸೇವಿಸದಂತೆ, ಕಡ್ಡಾಯವಾಗಿ ಶೌಚಾಲಯ ಬಳಸುವಂತೆ, ಶುಚಿತ್ವಕ್ಕೆ ಒತ್ತು ಕೊಡುವಂತೆ, ಕಸವನ್ನು ಆಯಾ ದಿನವೇ ವಿಲೆ ಮಾಡುವಂತೆ ವ್ಯಾಪಕ ಪ್ರಚಾರ ಮಾಡಬೇಕು’ ಎಂದು ಪೌರಾಯುಕ್ತರಿಗೆ ನಿರ್ದೇಶನ ನೀಡಿದರು.

‘ಶಾಲೆ–ಕಾಲೇಜು ವಿದ್ಯಾರ್ಥಿಗಳಲ್ಲಿ ಯಾರಿಗಾದರೂ ಕೆಮ್ಮು, ನೆಗಡಿ, ಜ್ವರ ಕಾಣಿಸಿದರೆ ತಕ್ಷಣ ಅವರಿಗೆ ರಜೆ ನೀಡಿ ಮನೆಯಲ್ಲಿ ಇರುವಂತೆ ತಿಳಿಸಬೇಕು. ಕಡ್ಡಾಯವಾಗಿ ಕೈತೊಳೆದುಕೊಂಡು ಉಪಾಹಾರ ಊಟ ಮಾಡಲು ತಿಳಿಸಬೇಕು. ಕೆಮ್ಮು, ಜ್ವರ, ನೆಗಡಿ ಇರುವ ವಿದ್ಯಾರ್ಥಿಗಳು ಹೇಗೆ ಮಾಸ್ಕ್ ಬಳಸಬೇಕು ಎನ್ನುವ ಬಗ್ಗೆ ಶಾಲಾ ಶಿಕ್ಷಕರಿಂದ ಮಕ್ಕಳಿಗೆ ತುರ್ತಾಗಿ ಮಾಹಿತಿ ನೀಡಲು ಕ್ರಮ ವಹಿಸಬೇಕು’ ಎಂದು ಡಿಡಿಪಿಐಗೆ ಸೂಚಿಸಿದರು.

‘ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ, ತಹಶೀಲ್ದಾರರು ಗ್ರಾಮ ಲೆಕ್ಕಾಧಿಕಾರಿಗಳ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಕರ ಸಭೆ ಕರೆದು ಚರ್ಚಿಸಿ, ಕೋವಿಡ್‌ 19 ಸೋಂಕಿನ ಬಗ್ಗೆ ತಿಳಿವಳಿಕೆ ನೀಡಬೇಕು’ ಎಂದು ತಿಳಿಸಿದರು.

‘ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ನೌಕರರಿಗೆ ತುರ್ತಾಗಿ ತರಬೇತಿ ನೀಡಿ ಗ್ರಾಮಗಳಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಬೀದರ್ ಉಪ ವಿಭಾಗಾಧಿಕಾರಿ ಅಕ್ಷಯ್ ಶ್ರೀಧರ್, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭವರ್ ಸಿಂಗ್ ಮೀನಾ, ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಾಧಿಕಾರಿಗಳು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು