ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಕ್ಷಕ್ಕೆ ಮುಜುಗರ ತರುವ ಯತ್ನಾಳ ಹೇಳಿಕೆ ಸರಿಯಲ್ಲ

ಬಸವಕಲ್ಯಾಣ ಶಾಸಕ ಶರಣು ಸಲಗರ ಹೇಳಿಕೆ
Published : 2 ಅಕ್ಟೋಬರ್ 2024, 16:00 IST
Last Updated : 2 ಅಕ್ಟೋಬರ್ 2024, 16:00 IST
ಫಾಲೋ ಮಾಡಿ
Comments

ಬೀದರ್: ‌‘ಪಕ್ಷದ ಹಿರಿಯ ಮುಖಂಡ, ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರು ಪದೇ ಪದೇ ಪಕ್ಷ ಹಾಗೂ ಪಕ್ಷದ ಮುಖಂಡರಿಗೆ ಮುಜುಗರ ತರುವ ಹೇಳಿಕೆ ನೀಡುತ್ತಿರುವುದು ಸರಿಯಲ್ಲ’ ಎಂದು ಬಸವಕಲ್ಯಾಣ ಶಾಸಕ ಶರಣು ಸಲಗರ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ನಮ್ಮಂತಹ ಶಾಸಕರಿಗೆಲ್ಲ ಮಾರ್ಗದರ್ಶನ ಮಾಡಬೇಕಾದವರೇ ಈ ರೀತಿ ಬಹಿರಂಗ ಹೇಳಿಕೆ ನೀಡಿದರೆ ಹೇಗೆ? ಮುಂದೆಯೂ ಅವರು ಹೀಗೆಯೇ ನಡೆದುಕೊಂಡರೆ ಅವರ ವಿರುದ್ಧ ವರಿಷ್ಠರಿಗೆ ದೂರು ನೀಡಬೇಕಾಗುತ್ತದೆ’ ಎಂದರು.

ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ, ‘ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವಾಗಿ ತನಿಖೆಗೆ ಈಗಾಗಲೇ ಹೈಕೋರ್ಟ್ ಅನುಮತಿ ನೀಡಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಲೇಬೇಕು’ ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಪಕ್ಷದ ಸದಸ್ಯತ್ವ ಅಭಿಯಾನದ ಮಾಹಿತಿ ನೀಡಿದರು. ‘ಜಿಲ್ಲೆಯಲ್ಲಿ 3.80 ಲಕ್ಷ ಸದಸ್ಯತ್ವದ ಗುರಿ ಹೊಂದಲಾಗಿದೆ. ಇದರಲ್ಲಿ ಶೇ.60ರಷ್ಟು ಗುರಿ ತಲುಪಿದ್ದೇವೆ. ಅಕ್ಟೋಬರ್ 15ರೊಳಗೆ ಪೂರ್ಣ ಗುರಿ ತಲುಪುತ್ತೇವೆ’ ಎಂದರು.

‘ಬೀದರ್‌ ನಗರದಲ್ಲಿ ರಸ್ತೆಗಳು ಮಳೆಯಿಂದ ಸಂಪೂರ್ಣ ಹದಗೆಟ್ಟಿವೆ. ಕಳಪೆ ಕಾಮಗಾರಿಗಳು ನಡೆಯುತ್ತಿವೆ. ಗುಣಮಟ್ಟದ ಕಾಮಗಾರಿ ನಡೆಯುವಂತೆ ಸಚಿವರು ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ರೈತರು ಅತಿವೃಷ್ಟಿಯಿಂದ ಮತ್ತು ಅನಾವೃಷ್ಟಿಯಿಂದ ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಅವರಿಗೆ ಪರಿಹಾರ ಒದಗಿಸಬೇಕು’ ಎಂದು ಒತ್ತಾಯಿಸಿದರು.

‘ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳು ಸಂಕಷ್ಟದಲ್ಲಿವೆ. ಡಿಸಿಸಿ ಬ್ಯಾಂಕ್‌ಗೆ ₹111 ಕೋಟಿ ನಷ್ಟವಾಗಿದೆ ಎಂದು ಅಧ್ಯಕ್ಷರೇ ಒಪ್ಪಿಕೊಂಡಿದ್ದಾರೆ. ಅದಕ್ಕೆ ಸಕ್ಕರೆ ಕಾರ್ಖಾನೆಗಳೇ ಕಾರಣ. ರೈತರು ತಮ್ಮ ಸಾಲವನ್ನು ಸರಿಯಾಗಿ ಮರುಪಾವತಿ ಮಾಡುತ್ತಿದ್ದಾರೆ. ಆದರೆ ನಷ್ಟಕ್ಕೆ ಕಾರಣವೇನು ಎಂಬುದನ್ನು ತಿಳಿದು ಅದನ್ನು ಸುಧಾರಣೆ ಮಾಡಬೇಕು. ಇಲ್ಲವಾದಲ್ಲಿ ಪಕ್ಷದಿಂದ ಹೋರಾಟ ಮಾಡಲಾಗುವುದು’ ಎಂದರು.

ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ, ಮುಖಂಡ ಪೀರಪ್ಪ ಔರಾದೆ, ಕಿರಣ ಪಾಟೀಲ, ಮಾಧವ ಹಸೂರೆ, ಮಾಜಿ ಬುಡಾ ಅಧ್ಯಕ್ಷ ಬಾಬು ವಾಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT